ಬೆಂಗಳೂರು : ನಿಗಮ-ಮಂಡಳಿಗಳಿಗೆ ನಿರ್ದೇಶಕರು ಹಾಗೂ ಸದಸ್ಯರನ್ನು ಆಯ್ಕೆ ಮಾಡಲು ಮುಖ್ಯಮಂತ್ರಿಯವರು ವಹಿಸಿರುವ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸುತ್ತೇನೆ. ತಿಂಗಳೊಳಗೆ ಪಟ್ಟಿ ಸಿದ್ದಪಡಿಸಿ ಸಲ್ಲಿಸುತ್ತೇನೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ ಅವರು ತಿಳಿಸಿದರು.
ಬೆಂಗಳೂರಿನ ಸದಾಶಿವನಗರದ ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಂಟೂವರೆ ವರ್ಷ ಕೆಪಿಸಿಸಿ ಅಧ್ಯಕ್ಷನಾಗಿ ಕೆಲಸ ಮಾಡಿ, ಚುನಾವಣೆಗಳಿಗೆ ಅಭ್ಯರ್ಥಿಗಳ ಆಯ್ಕೆ ಮತ್ತು ನಿಗಮ- ಮಂಡಳಿಗಳಿಗೆ ಅಧ್ಯಕ್ಷರನ್ನು ನೇಮಕ ಮಾಡಿದ ಅನುಭವವಿದೆ. ಆದ್ದರಿಂದ ಯಾವುದೇ ತೊಂದರೆಯಾಗುವುದಿಲ್ಲ ಎಂದರು.
ಹಿರಿಯ ಶಾಸಕರಿಗೆ ಸಚಿವ ಸ್ಥಾನ ನೀಡ ಬೇಕು ಎಂಬ ಒತ್ತಾಯದ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿ, ಸಂಪುಟ ಪುನಾರಚನೆ ಬಗ್ಗೆ ನಾನು ಏನೂ ಹೇಳಲು ಹೋಗುವುದಿಲ್ಲ. ಹೈಕಮಾಂಡ್ ತೆಗೆದುಕೊಳ್ಳುವ ನಿರ್ಧಾರಕ್ಕೆ ಬದ್ಧರಾಗಿರುತ್ತೇವೆ. ಎಲ್ಲವು ಹೈಕಮಾಂಡ್‌ಗೆ ಬಿಟ್ಟದ್ದು ಎಂದರು.