ಬೆಂಗಳೂರು: ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ಐತಿಹಾಸಿಕ ಜಾಮಿಯಾ ಮಸೀದಿಯಲ್ಲಿ ಅನಧಿಕೃತವಾಗಿ ನಡೆಸಲಾಗುತ್ತಿರುವ ಮದರಸಾ ಚಟುವಟಿಕೆಗಳನ್ನು ನಿರ್ಬಂಧಿಸಬೇಕು ಎಂದು ಕೋರಲಾದ ಅರ್ಜಿಗೆ ಸಂಬಂಧಿಸಿದಂತೆ ಕೇಂದ್ರ ಹಾಗೂ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿಗೊಳಿಸಲು ಹೈಕೋರ್ಟ್ ಆದೇಶಿಸಿದೆ.
ಈ ಕುರಿತಂತೆ ರಾಮನಗರ ಜಿಲ್ಲೆಯ ಕನಕಪುರ ತಾಲ್ಲೂಕಿನ ಹೊಸ ಕಬ್ಬಾಳು ಗ್ರಾಮದ ನಿವಾಸಿ ಅಭಿಷೇಕ್ ಗೌಡ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಪಿ.ಬಿ.ವರಾಳೆ ಹಾಗೂ ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್ ಅವರಿದ್ದ ವಿಭಾಗೀಯ ನ್ಯಾಯಪೀಠ ಬುಧವಾರ ವಿಚಾರಣೆ ನಡೆಸಿತು.
ಪ್ರತಿವಾದಿಗಳಾದ ಕೇಂದ್ರ ಸಂಸ್ಕೃತಿ ಸಚಿವಾಲಯ, ಭಾರತೀಯ ಪುರಾತತ್ವ ಹಾಗೂ ಸರ್ವೇಕ್ಷಣಾ ಇಲಾಖೆ ಮಹಾ ನಿರ್ದೇಶಕ, ರಾಜ್ಯ ಕಂದಾಯ ಇಲಾಖೆ ಮತ್ತು ಮಂಡ್ಯ ಜಿಲ್ಲಾಧಿಕಾರಿಗೆ ನೋಟಿಸ್ ಜಾರಿಗೊಳಿಸಲು ಆದೇಶಿಸಿದ ನ್ಯಾಯಪೀಠ ವಿಚಾರಣೆ ಮುಂದೂಡಿದೆ.
ಅರ್ಜಿಯಲ್ಲಿ ಏನಿದೆ?:
ಶ್ರೀರಂಗಪಟ್ಟಣದ ಜಾಮಿಯಾ ಮಸೀದಿಯನ್ನು ಮೈಸೂರು ಅರಸ ಟಿಪ್ಪು ಸುಲ್ತಾನ್ ಆಡಳಿತಾವಧಿಯಲ್ಲಿ ನಿರ್ಮಿಸಲಾಗಿದೆ. ಈ ಮಸೀದಿಯನ್ನು ಐತಿಹಾಸಿಕ ಮತ್ತು ಪ್ರಾಚೀನ ಸ್ಮಾರಕ ಎಂದು ಘೋಷಿಸಿರುವ ಭಾರತೀಯ ಸರ್ವೇಕ್ಷಣಾ ಇಲಾಖೆ ಪೋಷಣೆ ಮಾಡುತ್ತಿದೆ. ಆದರೆ, ಈ ಸ್ಮಾರಕದ ಒಳಾವರಣದಲ್ಲಿ ಅನಧಿಕೃತವಾಗಿ ವಸತಿ ಮದರಸಾ ಚಟುವಟಿಕೆಗಳನ್ನು ನಡೆಸಲಾಗುತ್ತಿದೆ ಎಂದು ಅರ್ಜಿದಾರರು ಆರೋಪಿಸಿದ್ದಾರೆ.
ಮಸೀದಿಯಲ್ಲಿ 50ರಿಂದ 60 ವಿದ್ಯಾರ್ಥಿಗಳು ವಿದ್ಯಾಭ್ಯಾಸ ನಡೆಸುತ್ತಿದ್ದು ಇಲ್ಲಿಯೇ ತಂಗಿದ್ದಾರೆ. ಈ ವಿದ್ಯಾರ್ಥಿಗಳಿಗೆ ಹಾಗೂ ಮದರಸಾ ಸಿಬ್ಬಂದಿಗೆ ಆವರಣದಲ್ಲಿಯೇ ಶೌಚಾಲಯ, ಸ್ನಾನ ಗೃಹ, ವಿಶ್ರಾಂತಿ ಕೋಣೆ, ಅಡುಗೆ ಮನೆ ನಿರ್ಮಿಸಲಾಗಿದೆ. ಬಟ್ಟೆಗಳನ್ನು ಶುಚಿಗೊಳಿಸಿ ಒಣಗಲು ಇಲ್ಲಿಯೇ ಹರವಲಾಗುತ್ತಿದೆ. ಇಲ್ಲೆಲ್ಲಾ ತಾತ್ಕಾಲಿಕ ಕಟ್ಟಡ ನಿರ್ಮಿಸಿ, ಸ್ಮಾರಕಕ್ಕೆ ಹಾನಿ ಉಂಟು ಮಾಡಲಾಗಿದೆ. ಇದು ಪ್ರಾಚೀನ ಸ್ಮಾರಕ ಮತ್ತು ಪುರಾತತ್ವ ಜಾಗಗಳು, ಉಳಿಕೆಗಳ ಕಾಯ್ದೆ-1958ರ ಕಲಂ 7, 8 ಮತ್ತು 16ರ ಸ್ಪಷ್ಟ ಉಲ್ಲಂಘನೆ’ ಎಂದು ಅರ್ಜಿಯಲ್ಲಿ ವಿವರಿಸಲಾಗಿದೆ.