ಬೆಂಗಳೂರು : ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಮಹಿಳೆಯರಿಗೆ ಉಚಿತ ಪ್ರಯಾಣ ಒದಗಿಸುವ ಶಕ್ತಿ ಯೊಜನೆ ಒಂದು ವರ್ಷ ಪೂರೈಸಿದೆ. ಯೋಜನೆ ಅಡಿಯಲ್ಲ ಜೂನ್ 9 ರವರೆಗೆ 225.15 ಕೋಟಿ ಮಹಿಳಾ ಪ್ರಯಾಣಿಕರು ಲಾಭ ಪಡೆದಿದ್ದಾರೆ.
ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳ ಪೈಕಿ ಮೊದಲು ಅನುಷ್ಠಾನಗೊಂಡ ಶಕ್ತಿ ಯೋಜನೆಗೆ ಇಂದು ಒಂದು ವರ್ಷ ಪೂರೈಸಿದೆ. ಕಳೆದೊಂದು ವರ್ಷದಲ್ಲಿ 225.15 ಕೋಟಿ ಮಹಿಳಾ ಪ್ರಯಾಣಿಕರು ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನಾಲ್ಕು ನಿಗಮಗಳಲ್ಲೂ ಉಚಿ ಪ್ರಯಾಣ ಮಾಡಿದ್ದಾರೆ. ಈ ಮೂಲಕ ಜೂ.9 ರವರೆಗೆ ಒಟ್ಟು5481.40 ಕೋಟಿ ರೂ.ಗಳನ್ನು ನೀಡಲಾಗಿದೆ.
ಶಕ್ತಿ ಯೋಜನೆಯನ್ನು ಯಾವುದೇ ಕಾರಣಕ್ಕೂ ನಿಲ್ಲಿಸಲ್ಲ
ಕಾಂಗ್ರೆಸ್ ಸರ್ಕಾರ ಗ್ಯಾರಂಟಿಗಳನ್ನು ಮತ ಪಡೆಯೋದಕ್ಕಾಗಿ ನೀಡಿಲ್ಲ. ಲೋಕಸಭಾ ಚುನಾವಣೆಯವರೆಗೆ ಅಂತ ನಿಗದಿ ಮಾಡಿಲ್ಲ. ಯಾವುದೇ ಕಾರಣಕ್ಕೂ ಶಕ್ತಿ ಯೋಜನೆಯನ್ನು ನಿಲ್ಲಿಸುವುದಿಲ್ಲ. ಮೋದಿ ನೇತೃತ್ವದ ಕೇಂದ್ರ ಸರ್ಕಾರ ಮಾಡಿದ್ದ ಬೆಲೆ ಏರಿಕೆಯಿಂದ ಜನರು ತತ್ತರಿಸಿದ್ದರು. ಅವರಿಗೆ ಸಹಾಯ ಮಾಡೋದಕ್ಕಾಗಿ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರಲಾಗಿತ್ತು. ಇದರಿಂದ ಬಡ, ಮಧ್ಯಮ ವರ್ಗದವರಿಗೆ ಸಹಾಯ ಆಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶಕ್ತಿ ಯೋಜನೆಗಾಗಿ ಬಜೆಟ್ ನಲ್ಲಿ ಸುಮಾರು ₹5,500 ಕೋಟಿ ಮೀಸಲಿಟ್ಟಿದ್ದಾರೆ. ಶಕ್ತಿ ಯೋಜನೆಗೆ ಯಾವುದೇ ಸಮಸ್ಯೆ ಇಲ್ಲ. ನಮ್ಮ ಕಾಂಗ್ರೆಸ್ ಸರ್ಕಾರ ಇರುವವರೆಗೂ ಶಕ್ತಿ ಯೋಜನೆ ಇರುತ್ತೆ. ಯಾರಿಗೂ ಅನುಮಾನ ಬೇಡ. ಮುಂದೆಯೂ ಸಹ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಲಿದ್ದು, ಆಗಲೂ ಶಕ್ತಿ ಯೋಜನೆ ಇರುತ್ತದೆ ಎಂದು ಸಚಿವ ರಾಮಲಿಂಗ ರೆಡ್ಡಿ ತಿಳಿಸಿದ್ದಾರೆ.