ಬೆಂಗಳೂರು: ಬಾಕಿ ಉಳಿಸಿಕೊಂಡಿರುವ ವೇತನ ಪಾವತಿಗೆ ಆಗ್ರಹಿಸಿ 108-ಆರೋಗ್ಯ ಕವಚ ಯೋಜನೆಯಡಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿ ಇಂದಿನಿಂದ ಮುಷ್ಕರಕ್ಕೆ ಕರೆ ನೀಡಿದ್ದಾರೆ. ಈ ಮೂಲಕ ಆಂಬುಲೆನ್ಸ್ ಸೇವೆಯಲ್ಲಿ ವ್ಯತ್ಯಯವಾಗುವ ಸಾಧ್ಯತೆಯಿದೆ.
ಈ ಆರೋಗ್ಯ ಕವಚ ಯೋಜನೆಯನ್ನು ಜಿವಿಕೆ-ಇಎಂಆರ್‌ಐ ಸಂಸ್ಥೆ ನಿರ್ವಹಿಸುತ್ತಿದ್ದು ಸುಮಾರು 2,500 ಸಿಬ್ಬಂದಿ ಕಾರ್ಯನಿರ್ವಹಿಸುತ್ತಿದ್ದಾರೆ. ರಾಜ್ಯ ಸರ್ಕಾರ ಮತ್ತು ಜಿವಿಕೆ ಸಂಸ್ಥೆ ವಿರುದ್ಧ ನೌಕರರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಒಂದು ಕಡೆ ನಿಗದಿಪಡಿಸಿದ ವೇತನದಲ್ಲಿ ಡಿಸೆಂಬರ್ ಹಾಗೂ ಜನವರಿ ತಿಂಗಳಲ್ಲಿ ಅರ್ಧದಷ್ಟು ವೇತನ ಮಾತ್ರ ನೀಡಲಾಗಿದ್ದು, ಕಳೆದ ಮೂರು ತಿಂಗಳಿಂದ ವೇತನ ಪಾವತಿಸಿಲ್ಲ. ಬಾಕಿ ಉಳಿಸಿಕೊಂಡಿರುವ ವೇತನ ಪಾವತಿಗೆ ಆಗ್ರಹಿಸಿ 108-ಆರೋಗ್ಯ ಕವಚ ಯೋಜನೆಯಡಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿ ಇಂದಿನಿಂದ ಮುಷ್ಕರಕ್ಕೆ ಮುಂದಾಗಿದ್ದಾರೆ.
ಈ ಕುರಿತು ಮಾತನಾಡಿರುವ 108 ನೌಕರರ ಸಂಘದ ರಾಜ್ಯ ಉಪಾಧ್ಯಕ್ಷ ಎನ್.ಎಚ್. ಪರಮಶಿವ, ಸಿಬ್ಬಂದಿಯ ಹಿತದೃಷ್ಟಿಯಿಂದ ಅನಿರ್ದಿಷ್ಟಾವಧಿ ಮುಷ್ಕರ ಅನಿವಾರ್ಯವಾಗಿದೆ. ಆದ್ದರಿಂದ ಸೋಮವಾರ ರಾತ್ರಿಯಿಂದ ನೌಕರರು ಕರ್ತವ್ಯ ನಿಭಾಯಿಸುವುದಿಲ್ಲ ಎಂದು ತಿಳಿಸಿದ್ದಾರೆ.