ಬೆಂಗಳೂರು: ನ.11ರಂದು ಪ್ರಧಾನಿ ನರೇಂದ್ರ ಮೋದಿ ( PM Narendra Modi ) ಇಲ್ಲಿನ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಆವರಣದಲ್ಲಿ ನಾಡಪ್ರಭು ಕೆಂಪೇಗೌಡರ 108 ಅಡಿ ಎತ್ತರದ ಕಂಚಿನ ಪ್ರತಿಮೆ ( kempegowda statue ) ಉದ್ಘಾಟಿಸಲಿದ್ದು, ಈ ಕಾರ್ಯಕ್ರಮದ ರೂಪುರೇಷೆ ಕುರಿತು ಕೆಂಪೇಗೌಡ ಅಭಿವೃದ್ಧಿ ಪ್ರಾಧಿಕಾರದ ಉಪಾಧ್ಯಕ್ಷರೂ ಆದ ಉನ್ನತ ಸಚಿವ ಡಾ.ಸಿ ಎನ್ ಅಶ್ವತ್ಥನಾರಾಯಣ ( Minister Dr CN Ashwathanrayana ) ಅವರು ಸೋಮವಾರ ಆದಿಚುಂಚನಗಿರಿ ಮಠದ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿಗಳನ್ನು ಭೇಟಿ ಮಾಡಿ ಸಮಾಲೋಚನೆ ನಡೆಸಿದರು.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸಲಹೆಯಂತೆ ಶ್ರೀಗಳನ್ನು ಭೇಟಿ ಮಾಡಿದ ಸಚಿವರು, ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ಸರಕಾರದ ಚಿಂತನೆ ಮತ್ತು ಆಶಯಗಳನ್ನು ಹಂಚಿಕೊಂಡರು.
ಶ್ರೀಗಳ ಜತೆ ಸುಮಾರು ಎರಡು ತಾಸು ವಿಚಾರ ವಿನಿಮಯ ನಡೆಸಿದ ಸಚಿವರು, ಕಾರ್ಯಕ್ರಮದ ಯಶಸ್ಸಿಗೆ ಮಾರ್ಗದರ್ಶನ ಕೋರಿದರು. ಜತೆಗೆ, ಕಾರ್ಯಕ್ರಮಕ್ಕೆ ಜನರನ್ನು ಸಮಾಗಮಗೊಳಿಸುವ ಕುರಿತು ಚರ್ಚಿಸಿದರು.
ಸಚಿವರ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಶ್ರೀಗಳು, ಕಾರ್ಯಕ್ರಮದ ಯಶಸ್ಸಿಗೆ ಮಠ ಮತ್ತು ಸಮಾಜದ ವತಿಯಿಂದ ಸಕಲ ಸಹಕಾರ ನೀಡುವುದಾಗಿ ಭರವಸೆ ನೀಡಿದರು.
ಇದಕ್ಕೂ ಮೊದಲು ಸಚಿವರು 20ಕ್ಕೂ ಹೆಚ್ಚು ಪ್ರಮುಖ ಒಕ್ಕಲಿಗ ಸಂಘಟನೆಗಳ ಪ್ರಮುಖರ ಜೊತೆಯೂ ಕಾರ್ಯಕ್ರಮ ಕುರಿತು ಸಭೆ ನಡೆಸಿದರು.
21ರಂದು ರಥಗಳಿಗೆ ಚಾಲನೆ
ನ.11ರ ಕಾರ್ಯಕ್ರಮದ ಅಂಗವಾಗಿ ನಾಡಿನೆಲ್ಲೆಡೆಯಿಂದ ಪವಿತ್ರ ಮೃತ್ತಿಕೆ ಸಂಗ್ರಹಣಾ ಅಭಿಯಾನ ನಡೆಯಲಿದೆ. ಇದಕ್ಕೆ ಸಿದ್ಧವಾಗಿರುವ ವಿಶೇಷ ರಥಗಳಿಗೆ ಅ.21ರಂದು ವಿಧಾನಸೌಧದ ಮುಂಭಾಗದಿಂದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಚಾಲನೆ ನೀಡಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಹೆಚ್ವಿನ ಸಂಖ್ಯೆಯಲ್ಲಿ ಜನ ಸೇರಬೇಕು ಎಂದು ಅಶ್ವತ್ಥನಾರಾಯಣ ಹೇಳಿದರು.
ಇದರಲ್ಲಿ ಪಕ್ಷಾತೀತವಾಗಿ ಎಲ್ಲರೂ ಪಾಲ್ಗೊಂಡು, ಸಾಮೂಹಿಕ ಸಂಭ್ರಮದಂತೆ ಆಚರಿಸಬೇಕು ಎಂದರು.
ಇದಕ್ಕೂ ಮೊದಲು ವಿಧಾನಸೌಧದಲ್ಲಿ ಎಲ್ಲಾ ಜಿಲ್ಲಾಧಿಕಾರಿಗಳ ಜತೆ ಸಭೆ ನಡೆಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ನಾಡಪ್ರಭು ಕೆಂಪೇಗೌಡರ ಪ್ರತಿಮೆಯ ಲೋಕಾರ್ಪಣೆ ಅಂಗವಾಗಿ ರಾಜ್ಯಾದ್ಯಂತ ನಡೆಯಲಿರುವ ಪವಿತ್ರ ಮೃತ್ತಿಕಾ ಸಂಗ್ರಹ ಅಭಿಯಾನದ ಯಶಸ್ಸಿಗೆ ಎಲ್ಲರೂ ಸೂಕ್ತ ವ್ಯವಸ್ಥೆ ಮಾಡಬೇಕೆಂದು ಸೂಚಿಸಿದರು.