ಬೆಂಗಳೂರು: ರಾಜ್ಯದಲ್ಲಿ ಒಳ ಮೀಸಲಾತಿ ಸಂಬಂಧ ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್ ಸಮಿತಿಯು ವರದಿ ನೀಡಿದ ಬಳಿಕ 19 ಸಾವಿರ ಶಿಕ್ಷಕರ ನೇಮಕಾತಿ ಮಾಡಲಾಗುವುದು ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.
ಅವರು ಶುಕ್ರವಾರ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಫಲಿತಾಂಶ ಪ್ರಕಟಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡುತ್ತ ಈ ಬಗ್ಗೆ ಮಾಹಿತಿ ನೀಡಿದರು.ಇದೇ ವೇಳೆ ಅವರು ಮಾತನಾಡುತ್ತ, ಎಸ್‌ಎಸ್‌ಎಲ್‌ಸಿ ಫಲಿತಾಂಶ ಸುಧಾರಣೆಗೆ ಶಿಕ್ಷಕರ ಕೊರತೆ ನೀಗಿಸುವುದು ಮುಖ್ಯವಾಗಿದೆ ಅಂತ ತಿಳಿಸಿದರು.
ಇನ್ನೂ ಇದೇ ವೇಳೆ ಅವರು ಮಾತನಾಡಿ, ಕಲ್ಯಾಣ ಕರ್ನಾಟಕ ಭಾಗದ ಶಾಲೆಗಳಿಗೆ 5000 ಶಿಕ್ಷಕರು, ಉಳಿದ ಭಾಗದಲ್ಲಿ 5000 ಸೇರಿ ಒಟ್ಟು 10 ಸಾವಿರ ಶಿಕ್ಷಕರ ನೇಮಕಾತಿ ಮಾಡಿಕೊಳ್ಳುವುದಾಗಿ ಈಗಾಗಲೇ ಬಜೆಟ್‌ನಲ್ಲಿ ಮುಖ್ಯಮಂತ್ರಿಗಳು ಘೋಷಿಸಿದ್ದಾರೆ. ಇದರ ಜೊತೆಗೆ ಇನ್ನೂ ಒಂಬತ್ತು ಹುದ್ದೆಗಳು ಸೇರಿ 19 ಸಾವಿರ ಶಿಕ್ಷಕರನ್ನು ನೇಮಕ ಮಾಡಿಕೊಳ್ಳುವ ಉದ್ದೇಶವಿದೆ. ನಾಗಮೋಹನದಾಸ್ ಸಮಿತಿ ವರದಿ ಬಂದ ಬಳಿಕ ಈ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗುವುದು ಎಂದರು.