ಬೆಂಗಳೂರು: ಇಂದಿನಿಂದ 2024ರ ಎಸ್ ಎಸ್ ಎಲ್ ಸಿ ಪರೀಕ್ಷೆ-2 ಆರಂಭಗೊಳ್ಳಲಿದೆ. ಈ ಪರೀಕ್ಷೆಗೆ ರಾಜ್ಯಾಧ್ಯಂತ 2.23 ಲಕ್ಷ ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದಾರೆ.
ಈ ಕುರಿತಂತೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಳ್ಳಲಾಗಿದೆ. ದಿನಾಂಕ 14-06-2024ರಿಂದ 22-06-2024ರವರೆಗೆ 2024ರ ಎಸ್ ಎಸ್ ಎಲ್ ಸಿ ಪರೀಕ್ಷೆ -2 ಅನ್ನು ನಡೆಸಲಾಗುವುದು ಅಂತ ತಿಳಿಸಿದೆ.
ರಾಜ್ಯದ 35 ಶೈಕ್ಷಣಿಕ ಜಿಲ್ಲೆಗಳ 2,23,308 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದಾರೆ. ಇವರಲ್ಲಿ 1,44,160 ವಿದ್ಯಾರ್ಥಿಗಳು, 79,148 ವಿದ್ಯಾರ್ಥಿನಿಯರು ಸೇರಿದ್ದಾರೆ ಎಂದಿದೆ.
ಒಟ್ಟು ನೋಂದಣಿಯಲ್ಲಿ 13,085 ವಿದ್ಯಾರ್ಥಿಗಳು ಫಲಿತಾಂಶ ವೃದ್ಧಿಗಾಗಿ ಪರೀಕ್ಷೆ ತೆಗೆದುಕೊಂಡಿದ್ದಾರೆ. ರಾಜ್ಯದ 724 ಪರೀಕ್ಷಾ ಕೇಂದ್ರಗಳಲ್ಲಿ ನಾಳೆ ಎಸ್ ಎಸ್ ಎಲ್ ಸಿ ಪರೀಕ್ಷೆ-2 ನಡೆಸಲಾಗುತ್ತಿದೆ ಎಂಬುದಾಗಿ ಮಾಹಿತಿ ನೀಡಿದೆ.
ಪ್ರತಿ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷಾ ಕೇಂದ್ರದ ಮುಖ್ಯಸ್ಥರು, ಪ್ರಶ್ನೆ ಪತ್ರಿಕೆ ಅಭಿರಕ್ಷಕರು, ಸ್ಥಾನಿಕ ಜಾಗೃತ ದಳದವರು ಹಾಗೂ ಕೊಠಡಿ ಮೇಲ್ವಿಚಾರಕರು ಕರ್ತವ್ಯ ನಿರ್ವಹಿಸಲಿದ್ದಾರೆ. ಜಿಲ್ಲಾ, ತಾಲೂಕು ಹಂತಗಳ ವಿಚಕ್ಷಣ ದಳಗಳು ಪರೀಕ್ಷಾ ಸಂದರ್ಭದಲ್ಲಿ ಕಾರ್ಯ ನಿರ್ವಹಿಸುತ್ತವೆ. ಜಿಲ್ಲಾಧಿಕಾರಿಗಳಿಂದ ನಿಯೋಜಿತ ಇತರೆ ಇಲಾಖೆಗಳ ಜಾಗೃತ ದಳಗಳು ಎಲ್ಲಾ ಜಿಲ್ಲೆಗಳಲ್ಲಿ ಕಾರ್ಯನಿರ್ವಹಿಸಲಿದೆ ಎಂದಿದೆ.
ಎಸ್ ಎಸ್ ಎಲ್ ಸಿ ಪರೀಕ್ಷೆ-2ರಲ್ಲಿ ಅಕ್ರಮ ತಡೆಗೆ ಶಾಲಾ ಶಿಕ್ಷಣ ಇಲಾಖೆ ಮಹತ್ವದ ಕ್ರಮ ಕೈಗೊಳ್ಳಿದೆ. ಪ್ರತಿ ಕೇಂದ್ರದಲ್ಲಿಯೂ ಸಿಸಿಟಿವಿಗಳ ಮೂಲಕ ಪರೀಕ್ಷಾ ಅವ್ಯವಹಾರಗಳ ಬಗ್ಗೆ ನಿಗಾ ಇಡಲಾಗಿವುದು ಅಂತ ಶಾಲಾ ಶಿಕ್ಷಣ ಇಲಾಖೆಯ ಪರೀಕ್ಷೆಗಳು ನಿರ್ದೇಶಕರು ತಿಳಿಸಿದ್ದಾರೆ.
ವರದಿ: ವಸಂತ ಬಿ ಈಶ್ವರಗೆರೆ