ತುಮಕೂರು : ಕರ್ನಾಟಕದಲ್ಲಿ ಇತ್ತೀಚಿನ ದಿನಗಳಲ್ಲು ಸೈಬರ್ ಅಪರಾಧ ಪ್ರಕರಣಗಳು ಹೆಚ್ಚಳವಾಗುತ್ತಿದ್ದು, ರಾಜ್ಯದಲ್ಲಿ ವರ್ಷಕ್ಕೆ 25 ಸಾವಿರಕ್ಕೂ ಹೆಚ್ಚು ಸೈಬರ್ ಅಪರಾಧ ಪ್ರಕರಣಗಳು ದಾಖಲಾಗುತ್ತಿವೆ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ಮಾಹಿತಿ ನೀಡಿದ್ದಾರೆ.
ತುಮಕೂರಿನ ಪೊಲೀಸ್ ಟಾಣೆಯ ನೂತನ ಕಟ್ಟಡ, ಪೊಲೀಸ್ ಸಮುಚ್ಛಯಕ್ಕೆ ಶಿಲಾನ್ಯಾಸ ನೆರವೇರಿಸಿ ಮಾತನಾಡಿದ ಅವರು, ರಾಜ್ಯದಲ್ಲಿ ವರ್ಷಕ್ಕೆ 25 ಸಾವಿರಕ್ಕೂ ಹೆಚ್ಚು ಸೈಬರ್ ಅಪರಾಧ ಪ್ರಕರಣಗಳು ದಾಖಲಾಗುತ್ತಿವೆ, ಪ್ರಜ್ಞಾವಂತರೇ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗುತ್ತಿದ್ದಾರೆ. ಆಧುನಿಕ ಜಗತ್ತಿನಲ್ಲಿ ಜನರು ಹೆಚ್ಚು ಪ್ರಜ್ಞಾವಂತರಾಗಿದ್ದರೂ ಸಹ ಕೊಲೆ, ಅಪರಾಧಗಳು ನಡೆಯುತ್ತಲೇ ಇವೆ ಎಂದು ಆತಂಕ ವ್ಯಕ್ತಪಡಿಸಿದರು. ಹಣಕಾಸು ವ್ಯವಹಾರಗಳು ಡಿಜಿಟಲೀಕರಣದ ಮೂಲಕ ನಡೆಯುತ್ತಿದ್ದರೂ ರಾಜ್ಯದಲ್ಲಿ ಸೈಬರ್ ಅಪರಾಧಗಳ ಸಂಖ್ಯೆ ದಿನೇದಿನೆ ಹೆಚ್ಚುತ್ತಿವೆ ಎಂದರು.
ರಾಜ್ಯವನ್ನು ಸರ್ವಜನಾಂಗದ ಶಾಂತಿಯ ತೋಟವನ್ನಾಗಿಸಲು ಪೊಲೀಸ್ ಇಲಾಖೆ ನಿರಂತರವಾಗಿ ಶ್ರಮಿಸುತ್ತಿದೆ. ಸಾರ್ವಜನಿಕರಿಗೆ ನ್ಯಾಯ ದೊರಕಿಸಿಕೊಡುವ ನಿಟ್ಟಿನಲ್ಲಿ ಕರ್ನಾಟಕ ಪೊಲೀಸ್ ದೇಶದಲ್ಲೇ ಮುಂಚೂಣಿಯಲ್ಲಿದೆ. ಇಲಾಖೆಯ ಸಿಬ್ಬಂದಿ ಮತ್ತು ಅವರ ಕುಟುಂಬಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ನಗರದ ಚಿಲುಮೆ ಸಮುದಾಯ ಭವನದ ಹಿಂಭಾಗದಲ್ಲಿ 22 ಕೋಟಿ ರೂ. ವೆಚ್ಚದಲ್ಲಿ 62 ವಸತಿ ಸಮುಚ್ಛಯವನ್ನು ನಿರ್ಮಿಸಲಾಗುತ್ತಿದೆ ಎಂದು ತಿಳಿಸಿದರು.