ಬೆಂಗಳೂರು: ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವಂತ 384 ಗೆಜೆಟೆಡ್ ಪ್ರೊಬೇಷನರ್ ಹುದ್ದೆಗಳ ನೇಮಕಾತಿಗೆ ಕರ್ನಾಟಕ ಲೋಕಸೇವಾ ಆಯೋಗವು ಅಧಿಸೂಚನೆಯನ್ನು ಹೊರಡಿಸಿದೆ. ಮಾರ್ಚ್.4ರಿಂದ ಈ ಹುದ್ದೆಗಳ ಭರ್ತಿಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಕೆ ಆರಂಭಗೊಳ್ಳಲಿದೆ.
ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸಹಾಯಕ ಆಯುಕ್ತರು, ವಾಣಿಜ್ಯ ತೆರಿಗೆ ಇಲಾಖೆಯಲ್ಲಿ ವಾಣಿಜ್ಯ ತೆರಿಗೆ ಸಹಾಯಕ ಆಯುಕ್ತರು, ಖಜಾನೆ ಇಲಾಖೆಯಲ್ಲಿ ಸಹಾಯಕ ನಿರ್ದೇಶಕರು, ತಹಶೀಲ್ದಾರ್, ಡಿವೈಎಸ್ಪಿ ಸೇರಿದಂತೆ 159 ಗ್ರೂಪ್-ಎ ಹುದ್ದೆಗಳು ಹಾಗೂ 225 ಗ್ರೂಪ್-ಬಿ ಹುದ್ದೆಗಳ ನೇಮಕಾತಿ ನಡೆಯಲಿದೆ. ಇದರಲ್ಲಿ ಕಲ್ಯಾಣ ಕರ್ನಾಟಕ ವೃಂದದ 77 ಹುದ್ದೆಗಳು ಸೇರಿದ್ದಾವೆ.
ಮಾರ್ಚ್.4ರಿಂದ ಏಪ್ರಿಲ್.4ರವರೆಗೆ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ. ಮೇ.5ರಂದು ಪೂರ್ವಭಾವಿ ಪರೀಕ್ಷೆ ನಡೆಸಲು ತಾತ್ಕಾಲಿಕ ದಿನಾಂಕವನ್ನು ನಿಗದಿ ಪಡಿಸಲಾಗಿದೆ.
ಭಾರತದಲ್ಲಿ ಕಾನೂನು ರೀತಿಯಲ್ಲಿ ಸ್ಥಾಪಿತವಾದ ಯಾವುದೇ ವಿಶ್ವವಿದ್ಯಾಲಯದಿಂದ ಪದವಿಯನ್ನು ಪಡೆದವರು ಈ ಕೆಎಎಸ್ ಹುದ್ದೆಗಳ ನೇಮಕಾತಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
3 ವರ್ಷ ವಯೋಮಿತಿ ಸಡಿಲಿಕೆ.
ಕೋವಿಡ್ ಸೇರಿದಂತೆ ವಿವಿಧ ಕಾರಣಗಳಿಂದ ಕಳೆದ ಐದಾರು ವರ್ಷಗಳಿಂದ ಕೆಎಎಸ್ ನೇಮಕಾತಿ ನಡೆಯದ ಕಾರಣ, ಅಭ್ಯರ್ಥಿಗಳ ವಯೋಮಿತಿಯಲ್ಲಿ 3 ವರ್ಷ ಸಡಿಲಿಕೆ ಮಾಡಲಾಗಿದೆ.
ಸಾಮಾನ್ಯ ವರ್ಗದವರಿಗೆ 38, 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ 41 ವರ್ಷ ಹಾಗೂ ಎಸ್ಸಿ, ಎಸ್ಟಿ, ಪ್ರವರ್ಗ-1ರ ಅಭ್ಯರ್ಥಿಗಳಿಗೆ 43 ವರ್ಷ ವಯೋಮಿತಿ ನಿಗದಿಪಡಿಸಲಾಗಿದೆ.