ಮಂಡ್ಯ: ಕೃಷ್ಣರಾಜ ಜಲಾಶಯ ಭರ್ತಿಗೆ ಕೆಲವೇ ಅಡಿಗಳಷ್ಟು ನೀರು ಬಾಕಿ ಇದೆ. ಜಲನಯ ಪ್ರದೇಶದಲ್ಲಿ ನಿರಂತರವಾಗಿ ಮಳೆಯಾಗುತ್ತಿರುವ ಕಾರಣ, ಒಳ ಹರಿವಿನ ಪ್ರಮಾಣ ಕೂಡ ಹೆಚ್ಚಾಗಿದೆ. ಈ ಹಿನ್ನಲೆಯಲ್ಲಿ ಕೆ ಆರ್ ಎಸ್ ಡ್ಯಾಂನಿಂದ ಕಾವೇರಿ ನದಿಗೆ ನೀರು ಬಿಡುಗಡೆ ಮಾಡಲಾಗುತ್ತಿದೆ. ಹೀಗಾಗಿ ನದಿ ಪಾತ್ರದ ಜನರು ಎಚ್ಚರಿಕೆಯಿಂದ ಇರುವಂತೆ ಕಾವೇರಿ ನೀರಾವರಿ ನಿಗಮ ಸೂಚಿಸಿದೆ.
ಈ ಬಗ್ಗೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಬಿಡುಗಡೆ ಮಾಡಲಾಗಿದ್ದು,ಕಾವೇರಿ ನದಿ ಜಲಾನಯನ ಪ್ರದೇಶದಲ್ಲಿ ಭಾರಿ ಮಳೆಯಾಗುತ್ತಿರುವುದರಿಂದ ಕೃಷ್ಣರಾಜಸಾಗರ ಜಲಾಶಯಕ್ಕೆ ಹೆಚ್ಚಿನ ನೀರು ಬರುತ್ತಿದ್ದು, ಕೃಷ್ಣರಾಜಸಾಗರ ಜಲಾಶಯದಿಂದ ಸುಮಾರು 5,000 ರಿಂದ 15,000 ಕ್ಯೂಸೆಕ್ಸ್ ಗೂ ಅಧಿಕ ನೀರನ್ನು ಕಾವೇರಿ ನದಿಗೆ ಬಿಡಲಾಗುವುದು ಎಂದಿದೆ.
ಈ ಪ್ರಮಾಣವು ಹೆಚ್ಚಾಗುವ ಸಂಭವವಿರುತ್ತದೆ. ಆದ್ದರಿಂದ ಕಾವೇರಿ ನದಿಯ ತಗ್ಗು ಪ್ರದೇಶದಲ್ಲಿರುವ ಮತ್ತು ನದಿಯ ಎರಡೂ ದಂಡೆಗಳಲ್ಲಿರುವ ಸಾರ್ವಜನಿಕರು ತಮ್ಮ ಆಸ್ತಿ ಪಾಸ್ತಿ ಹಾಗೂ ಜಾನುವಾರು ರಕ್ಷಣೆಗೆ ಎಚ್ಚರಿಕೆ ವಹಿಸಿ, ಸೂಕ್ತ ಮುಂಜಾಗ್ರತೆ ಕೈಗೊಂಡು ಸುರಕ್ಷಿತ ಸ್ಥಳಗಳಿಗೆ ಹೋಗಲು ಕೋರಲಾಗಿದೆ.