ಬೆಂಗಳೂರು: ತಹಶೀಲ್ದಾರ್ ಹಾಗೂ ಉಪ ವಿಭಾಗಾಧಿಕಾರಿಗಳ (ಎಸಿ) ನ್ಯಾಯಾಲಯಗಳಲ್ಲಿ ಅವಧಿ ಮೀರಿ ಇರುವ ಎಲ್ಲಾ ಪ್ರಕರಣಗಳ ಇತ್ಯರ್ಥಕ್ಕೆ ಆರು ತಿಂಗಳ ಗಡುವು ನೀಡಲಾಗಿದೆ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ತಿಳಿಸಿದರು.
ವಿಕಾಸಸೌಧದಲ್ಲಿ ಸೋಮವಾರ ಜಿಲ್ಲಾಧಿಕಾರಿಗಳ ಮಾಸಿಕ ಪ್ರಗತಿ ಪರಿಶೀಲನಾ ಸಭೆಯ ನಂತರ ಪತ್ರಿಕಾಗೋಷ್ಠಿ ನಡೆಸಿ ಮಾಹಿತಿ ನೀಡಿದ ಅವರು, ತಕರಾರು ಪ್ರಕರಣಗಳನ್ನು ತಹಶೀಲ್ದಾರ್ ನ್ಯಾಯಾಲಯಗಳು 90 ದಿನಗಳಲ್ಲಿ ಇತ್ಯರ್ಥಪಡಿಸಬೇಕು ಎಂಬ ನಿಯಮವಿದೆ. ಆದರೆ, ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಸಂದರ್ಭದಲ್ಲಿ ಅವಧಿ ಮೀರಿದ 10,774 ಪ್ರಕರಣಗಳಿದ್ದವು. ಪ್ರಸ್ತುತ ಈ ಸಂಖ್ಯೆಯನ್ನು 369ಕ್ಕೆ ಇಳಿಸಲಾಗಿದೆ. ಈ ಹಿಂದೆ ಪ್ರತಿ ಪ್ರಕರಣಗಳ ಇತ್ಯರ್ಥಕ್ಕೆ ತಹಶೀಲ್ದಾರ್ ನ್ಯಾಯಾಲಯಗಳಲ್ಲಿ ಸರಾಸರಿ 7 ತಿಂಗಳಿಗಿಂತ ಹೆಚ್ಚು ಸಮಯ ವ್ಯಯವಾಗುತ್ತಿತ್ತು. ಆದರೆ, ಪ್ರಸ್ತುತ 67 ದಿನಕ್ಕೆ ಪ್ರಕರಣಗಳನ್ನು ವಿಲೇ ಮಾಡಲಾಗುತ್ತಿದೆ ಎಂದರು.
ಉಪ ವಿಭಾಗಾಧಿಕಾರಿಗಳ ನ್ಯಾಯಾಲಯದಲ್ಲಿ 62,857 ಪ್ರಕರಣಗಳು ಬಾಕಿ ಇದ್ದವು. ಆದರೆ, ಇದೀಗ ಆ ಸಂಖ್ಯೆಯನ್ನು 26,726ಕ್ಕೆ ಇಳಿಸಲಾಗಿದೆ. ಕಳೆದ ಒಂದೂವರೆ ವರ್ಷದಲ್ಲಿ 36,131 ಪ್ರಕರಣಗಳನ್ನು ಇತ್ಯರ್ಥಪಡಿಸಲಾಗಿದೆ. ನಾವು ಅಧಿಕಾರ ಸ್ವೀಕರಿಸುವಾಗ ಐದು ವರ್ಷಕ್ಕೆ ಮೇಲ್ಪಟ್ಟ 32777 ಪ್ರಕರಣಗಳಿದ್ದವು, ಈ ಸಂಖ್ಯೆಯನ್ನು 6,602ಕ್ಕೆ ಇಳಿಸಲಾಗಿದೆ. ಮುಂದಿನ ಆರು ತಿಂಗಳಲ್ಲಿ ಉಳಿದ ಪ್ರಕರಣಗಳನ್ನೂ ಇತ್ಯರ್ಥಪಡಿಸಲು ಸೂಚಿಸಲಾಗಿದೆ. ಇದರಿಂದ ಜನರು ಅನಗತ್ಯವಾಗಿ ಸರ್ಕಾರಿ ಕಚೇರಿಗಳಿಗೆ ಅಲೆದಾಡುವುದು ತಪ್ಪಲಿದೆ ಎಂದು ತಿಳಿಸಿದರು.