ಅಹಮದಾಬಾದ್: ಭಾರತದ ಸಮುದ್ರ ವ್ಯಾಪ್ತಿಯಲ್ಲಿ ಕೋಟ್ಯಂತರ ರೂಪಾಯಿ ಮೌಲ್ಯದ ಮಾದಕ ವಸ್ತುಗಳನ್ನು ಸಾಗಿಸುತ್ತಿದ್ದ ಆರು ಮಂದಿ ಪಾಕಿಸ್ತಾನಿ ಪ್ರಜೆಗಳಿಗೆ ಗುಜರಾತ್‌ನ ವಿಶೇಷ ನ್ಯಾಯಾಲಯವು 20 ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಮಹತ್ವದ ತೀರ್ಪು ನೀಡಿದೆ.
2022ರಲ್ಲಿ ಗುಜರಾತ್ ಕರಾವಳಿಯ ಅಂತರಾಷ್ಟ್ರೀಯ ಜಲಪ್ರದೇಶದಲ್ಲಿ ಭಾರತೀಯ ಕೋಸ್ಟ್ ಗಾರ್ಡ್ ಮತ್ತು ಭಯೋತ್ಪಾದನಾ ವಿರೋಧಿ ದಳ (ATS) ಜಂಟಿ ಕಾರ್ಯಾಚರಣೆ ನಡೆಸಿದ್ದವು. ಈ ವೇಳೆ ಪಾಕಿಸ್ತಾನದ ‘ಅಲ್ ನಜಾಕರ್’ ಎಂಬ ಬೋಟ್ ಅನ್ನು ತಡೆದು ತಪಾಸಣೆ ನಡೆಸಿದಾಗ, ಸುಮಾರು 77 ಕೆಜಿ ಹೆರಾಯಿನ್ ಪತ್ತೆಯಾಗಿತ್ತು. ಇದರ ಅಂತರಾಷ್ಟ್ರೀಯ ಮಾರುಕಟ್ಟೆ ಮೌಲ್ಯ ಸುಮಾರು 384 ಕೋಟಿ ರೂಪಾಯಿ ಎಂದು ಅಂದಾಜಿಸಲಾಗಿತ್ತು.
ಈ ಪ್ರಕರಣದ ವಿಚಾರಣೆ ನಡೆಸಿದ ಎನ್‌ಡಿಪಿಎಸ್ (NDPS) ವಿಶೇಷ ನ್ಯಾಯಾಲಯವು, ಆರೋಪಿಗಳ ಮೇಲಿನ ಅಪರಾಧ ಸಾಬೀತಾದ ಹಿನ್ನೆಲೆಯಲ್ಲಿ ಈ ಕೆಳಗಿನ ಶಿಕ್ಷೆ ಪ್ರಕಟಿಸಿದೆ:
ಆರೂ ಮಂದಿ ಆರೋಪಿಗಳಿಗೆ ತಲಾ 20 ವರ್ಷಗಳ ಕಠಿಣ ಜೈಲು ಶಿಕ್ಷೆ.
ಪ್ರತಿಯೊಬ್ಬರಿಗೂ 2 ಲಕ್ಷ ರೂಪಾಯಿಗಳ ದಂಡ ವಿಧಿಸಲಾಗಿದ್ದು, ದಂಡ ಪಾವತಿಸಲು ವಿಫಲವಾದರೆ ಹೆಚ್ಚುವರಿ ಒಂದು ವರ್ಷ ಜೈಲು ಶಿಕ್ಷೆ ಅನುಭವಿಸಬೇಕಾಗುತ್ತದೆ.








