ಬೆಂಗಳೂರು: : 87 ನೇ ಕನ್ನಡ ಸಾಹಿತ್ಯ ಸಮ್ಮೇಳನ ಅದ್ದೂರಿ ಎನ್ನುವುದಕ್ಕಿಂತ ಅರ್ಥಪೂರ್ಣವಾಗಿ ಆಚರಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಮಂಡ್ಯದಲ್ಲಿ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಕುರಿತು ಅವರ ಅಧ್ಯಕ್ಷತೆಯಲ್ಲಿ ಇಂದು ಪೂರ್ವಭಾವಿ ಸಭೆ ಜರುಗಿತು.
ಜಿಲ್ಲಾಡಳಿತದ ಸಹಕಾರದೊಂದಿಗೆ ಸಮ್ಮೇಳನ ಆಯೋಜಿಸುವಂತೆ ಸಲಹೆ ನೀಡಿದ ಮುಖ್ಯಮಂತ್ರಿಗಳು ಕನ್ನಡ ಸಂಘಟನೆಗಳನ್ನೂ ವಿಶ್ವಾಸಕ್ಕೆ ಪಡೆಯಲು ಸೂಚಿಸಿದರು. ಜೂನ್ ಮೊದಲನೇ ವಾರದಲ್ಲಿ ಸಮ್ಮೇಳನ ಆಯೋಜಿಸಲು ಮುಖ್ಯ ಮಂತ್ರಿಗಳು ಸೂಚಿಸಿದರು.
ಸಮ್ಮೇಳನಾಧ್ಯಕ್ಷರನ್ನು ಆಯ್ಕೆ ಮಾಡುವಾಗ ಹಿರಿಯರು, ಸಾಹಿತ್ಯ ಕ್ಷೇತ್ರದಲ್ಲಿ ಅಪಾರ ಕೆಲಸ ಮಾಡಿದವರನ್ನು ಪರಿಗಣಿಸಲು ಮುಖ್ಯಮಂತ್ರಿಗಳು ಸೂಚಿಸಿದರು.
ಕನ್ನಡರಥ ಜಾಥಾ, 87 ಜನ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಸೇರಿದಂತೆ ಮೂರು ದಿನಗಳ ಕಾಲ ಕನ್ನಡ ವಿಚಾರ ಗೋಷ್ಠಿ ಮುಂತಾದ ಕಾರ್ಯಕ್ರಮ ಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರು ಸಭೆಗೆ ತಿಳಿಸಿದರು.
ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ 30 ಕೋಟಿ ರೂ.ಗಳ ಅನುದಾನ ಒದಗಿಸಲು ಪರಿಷತ್ ಅಧ್ಯಕ್ಷರು ಮನವಿ ಸಲ್ಲಿಸಿದರು. ಜಿಲ್ಲಾ ಉಸ್ತುವಾರಿ ಸಚಿವ ಚೆಲುವನಾರಾಯಣಸ್ವಾಮಿ, ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್ ತಂಗಡಗಿ, ಶಾಸಕ ಪಿ.ಎಂ ನರೇಂದ್ರಸ್ವಾಮಿ, ಮುಖ್ಯ ಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಮಹೇಶ್ ಜೋಶಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಾರ್ಯದರ್ಶಿ ಎನ್.ಮಂಜುಳಾ, ನಿರ್ದೇಶಕಿ ಧರಣಿದೇವಿ ಮಾಲಗತ್ತಿ ಉಪಸ್ಥಿತರಿದ್ದರು.