ದಿಸ್ಪುರ್(ಅಸ್ಸಾಂ): ಇತ್ತೀಚಿನ ದಿನಗಳಲ್ಲಿ ಪರೀಕ್ಷೆಗಳಲ್ಲಿ ಅಕ್ರಮ ನಡೆಯುತ್ತಿದೆ. ಹೀಗಾಗಿ, ಈ ಅಕ್ರಮವನ್ನು ತಡೆಯಲು ಅಸ್ಸಾಂ ಸರ್ಕಾರ ಪರೀಕ್ಷಾ ಕೇಂದ್ರದ ಸುತ್ತಲೂ 4 ಗಂಟೆಗಳ ಕಾಲ ಇಂಟರ್ನೆಟ್ ಸೇವೆಯನ್ನು ಸ್ಥಗಿತಗೊಳಿಸಿದೆ.
ಇಂದಿನಿಂದ ನಡೆಯುತ್ತಿರುವ ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿನ 27,000 ಸರ್ಕಾರಿ ಹುದ್ದೆಗಳನ್ನು ಭರ್ತಿ ಮಾಡಲು ಅಭ್ಯರ್ಥಿಗಳಿಗೆ ನೇಮಕಾತಿ ಪರೀಕ್ಷೆ ನಡೆಸುತ್ತಿದ್ದು, 14 ಲಕ್ಷ ಅಭ್ಯರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾರೆ. ಈ ವೇಳೆ ಅಭ್ಯರ್ಥಿಗಳು ನಕಲು ಮಾಡುವುದನ್ನು ತಡೆಯಲು ರಾಜ್ಯ ಸರ್ಕಾರವು ಪರೀಕ್ಷಾ ಕೇಂದ್ರಗಳ ಸುತ್ತ ಮೊಬೈಲ್ ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಿದೆ.
ಪರೀಕ್ಷೆ ನಡೆಯುವ ಎಲ್ಲಾ ಜಿಲ್ಲೆಗಳಲ್ಲಿ ಇಂಟರ್ನೆಟ್ ಸೇವೆಗಳು ಲಭ್ಯವಿರುವುದಿಲ್ಲ.
ಪ್ರತಿ ಪರೀಕ್ಷಾ ಕೇಂದ್ರಗಳಲ್ಲಿ ಬಿಗಿ ಭದ್ರತೆಯನ್ನು ಮಾಡಲಾಗಿರುವುದರಿಂದ ಸಿಆರ್ಪಿಸಿಯ ಸೆಕ್ಷನ್ 144 ವಿಧಿಸಲಾಗುವುದು ಎಂದು ಸರ್ಕಾರ ತಿಳಿಸಿದೆ.
ನಿಯಮಗಳ ಭಾಗವಾಗಿ, ಅಭ್ಯರ್ಥಿಗಳು ಮತ್ತು ಇನ್ವಿಜಿಲೇಟರ್ಗಳು ಪರೀಕ್ಷಾ ಕೇಂದ್ರಗಳಿಗೆ ಮೊಬೈಲ್ ಫೋನ್ ಅಥವಾ ಇತರ ಯಾವುದೇ ಎಲೆಕ್ಟ್ರಾನಿಕ್ ಗ್ಯಾಜೆಟ್ಗಳನ್ನು ಕೊಂಡೊಯ್ಯುವುದನ್ನು ನಿರ್ಬಂಧಿಸಲಾಗಿದೆ. ಪ್ರತಿ ಪರೀಕ್ಷಾ ಕೇಂದ್ರದ ಉಸ್ತುವಾರಿ ಕೇಂದ್ರದವರಿಗೆ ಪರೀಕ್ಷಾ ಕೇಂದ್ರದ ವಿಡಿಯೋ ಗ್ರಾಫ್ ಮಾಡಲು ಸೂಚಿಸಲಾಗಿದೆ.
ಪರೀಕ್ಷೆಯ ಮೊದಲು, ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ ಅವರು ಪರೀಕ್ಷೆಗಳನ್ನು ಸುಗಮವಾಗಿ ನಡೆಸುವುದನ್ನು ಖಚಿತಪಡಿಸಿಕೊಳ್ಳಲು ಜಿಲ್ಲಾಧಿಕಾರಿಗಳು ಮತ್ತು ಇತರ ಅಧಿಕಾರಿಗಳೊಂದಿಗೆ ವರ್ಚುವಲ್ ಸಭೆ ನಡೆಸಿದರು. ಪರೀಕ್ಷೆ ನಡೆಸುವಾಗ ನಿರಾಸಕ್ತಿ ತೋರಬಾರದು ಎಂದು ಸಭೆಯಲ್ಲಿ ಅಧಿಕಾರಿಗಳಿಗೆ ಸೂಚಿಸಿದ್ದಾರೆ.