ಮಂಗಳೂರು: ಪ್ರಧಾನಿ ನರೇಂದ್ರ ಮೋದಿ(Prime Minister Narendra Modi) ಅವರು ಸೆಪ್ಟೆಂಬರ್ 2 (ಶುಕ್ರವಾರ) ಮಂಗಳೂರಿಗೆ ಭೇಟಿ ನೀಡಲಿದ್ದಾರೆ ಎಂದು ಬಿಜೆಪಿ ಪಕ್ಷದ ಮೂಲಗಳು ತಿಳಿಸಿವೆ.
ಕಳೆದ ಜೂನ್ 22 ರಂದು ಬೆಂಗಳೂರಿಗೆ ಬಂದಿದ್ದ ಮೋದಿ ಅವರು 2 ದಿನಗಳ ಪ್ರವಾಸ ಕೈಗೊಂಡು ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡಿದ್ದರು. ಇದೀಗ, ಈ ಬಾರಿ ಮೋದಿ ಮಂಗಳೂರಿಗೆ ಬರುತ್ತಿದ್ದು, ಸಮಯ ನಿಗದಿಯಾಗಿದೆ.
ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿರುವ ಮೋದಿ
ಹಲವು ಅಭಿವೃದ್ಧಿ ಕಾರ್ಯಕ್ರಮಗಳಿಗೆ ಚಾಲನೆ ನೀಡಲು ಪ್ರಧಾನಿ ನರೇಂದ್ರ ಮೋದಿ ಅವರು ಸೆ.2ರಂದು ಮಂಗಳೂರಿಗೆ ಭೇಟಿ ನೀಡುವ ಸಾಧ್ಯತೆ ಇದೆ. ಮಂಗಳೂರು ಹೊರವಲಯದಲ್ಲಿ ಮೋದಿಯವರ ಬೃಹತ್ ಸಮಾವೇಶ ಆಯೋಜಿಸಲು ರಾಜ್ಯ ಬಿಜೆಪಿ ಸಜ್ಜಾಗಿದೆ. ಇದೇ ವೇಳೆ ನಗರದ ಹೊರವಲಯ ಕೂಳೂರಿನಲ್ಲಿ ಪಕ್ಷದ ಕಾರ್ಯಕ್ರಮ ಆಯೋಜಿಸಲು ರಾಜ್ಯ ಬಿಜೆಪಿ ಮುಂದಾಗಿದೆ. ಈ ಮೂಲಕ ಬಿಜೆಪಿ ಕಾರ್ಯಕರ್ತರು ಹಾಗೂ ಹಿಂದೂ ಕಾರ್ಯಕರ್ತರಿಗೆ ಹೊಸ ಹುರುಪು ನೀಡಲು ಬಿಜೆಪಿ ಸಜ್ಜಾಗಿದೆ ಎನ್ನಲಾಗಿದೆ.
ಸರ್ಕಾರದ ಅಧಿಕೃತ ಕಾರ್ಯಕ್ರಮಕ್ಕಾಗಿ ಪ್ರಧಾನಿ ನರೇಂದ್ರ ಮಂಗಳೂರಿಗೆ ಭೇಟಿ ನೀಡುವ ಸಾಧ್ಯತೆ ಇದೆ ಎನ್ನಲಾಗಿದೆ. ನವಮಂಗಳೂರು ಬಂದರು ಪ್ರಾಧಿಕಾರದ ಕಾರ್ಯಕ್ರಮಕ್ಕೆ ಮೋದಿ ಅವರನ್ನು ಆಹ್ವಾನಿಸಲಾಗಿದೆ. ಎನ್ಎಂಪಿಎಯ ಹಲವು ಯೋಜನೆಗಳ ಉದ್ಘಾಟನೆಗೆ ಆಹ್ವಾನಿಸಲಾಗಿದೆ. ಈ ಹಿನ್ನೆಲೆಯಲ್ಲಿ ಕಾರ್ಯಕ್ರಮಕ್ಕೆ ಬರಲು ಪ್ರಧಾನಿ ಸಮ್ಮತಿಸಿದ್ದಾರೆ. ಮಂಗಳೂರು ಭೇಟಿ ಪ್ರಧಾನಿ ಕಚೇರಿಯಿಂದ ಅಧಿಕೃತವಾಗಿದ್ದು, ಮಂಗಳೂರು ಪ್ರವಾಸ ಕಾರ್ಯಕ್ರಮ ಪಟ್ಟಿ ಅಂತಿಮಗೊಳ್ಳುವ ಸಾಧ್ಯತೆ ಇದೆ.
ಮಂಗಳೂರಿನಲ್ಲಿ ಪರಿಸ್ಥಿತಿ ತಿಳಿಗೊಳಿಸುವ ಪ್ರಯತ್ನ
ಮಂಗಳೂರಿನಲ್ಲಿ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆಯ ನಂತರ ಬಿಜೆಪಿ ಕಾರ್ಯಕರ್ತರೇ ಬಿಜೆಪಿ ವಿರುದ್ಧ ತಿರುಗಿ ಬಿದ್ದಿದ್ದರು. ಇದಾದ ನಂತರ ಬಿಜೆಪಿ ಕಾರ್ಯಕರ್ತರು ಹಾಗೂ ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ಸಾವರ್ಕರ್ ಫೋಟೋ ಗಲಾಟೆ ಇತ್ಯಾದಿಗಳಿಂದ ಬಿಜೆಪಿ ಹಾಗೂ ರಾಜ್ಯ ಸರ್ಕಾರವನ್ನು ಕೆಣಕಿದ್ದಾರೆ. ಹೀಗಾಗಿ ಬಿಜೆಪಿ ಭದ್ರಕೋಟೆ ಉಳಿಸಿಕೊಳ್ಳಲು ಬಿಜೆಪಿ ಹರಸಾಹಸ ಪಡುತ್ತಿದೆ. ಇದರಿಂದಾಗಿ ಪ್ರಧಾನಿ ಮೋದಿಯವರನ್ನು ಕರೆಸಿ ಡ್ಯಾಮೇಜ್ ಕಂಟ್ರೋಲ್ ಮಾಡಲು ಮುಂದಾಗಿದ್ದಾರೆ ಎಂಬ ಮಾತುಗಳೂ ಕೇಳಿ ಬರುತ್ತಿವೆ.