ಮಡಿಕೇರಿ : ಮಾಜಿ ಸಿಎಂ ಸಿದ್ದರಾಮಯ್ಯ ಕಾರಿಗೆ ಮೊಟ್ಟೆ ಎಸೆತ ಖಂಡಿಸಿ ಆಗಸ್ಟ್ 26 ರಂದು ಕಾಂಗ್ರೆಸ್ ಮಡಿಕೇರಿ ಚಲೋಗೆ ಕರೆ ನೀಡಿದ್ದು, ಇದಕ್ಕೆ ಪ್ರತಿಯಾಗಿ ಬಿಜೆಪಿ ಜನಜಾಗೃತಿ ಸಮಾವೇಶ ಆಯೋಜಿಸಿದ ಬೆನ್ನಲ್ಲೇ ಕೊಡಗು ಜಿಲ್ಲೆಯಾದ್ಯಂತ ಆಗಸ್ಟ್ 24 ರಿಂದ 27 ರವರೆಗೆ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.
ಕೊಡಗು ಜಿಲ್ಲೆಯಾದ್ಯಂತ ಆಗಸ್ಟ್ 24 ರ ಬೆಳಗ್ಗೆ 6 ಗಂಟೆಯಿಂದ ಆಗಸ್ಟ್ 27 ರ ಸಂಜೆ 6 ಗಂಟೆಯವರೆಗೆ ನಿಷೇಧಾಜ್ಞೆ ಜಾರಿ ಮಾಡಿ ಜಿಲ್ಲಾಧಿಕಾರಿ ಡಾ.ಸತೀಶ್ ಆದೇಶ ಹೊರಡಿಸಿದ್ದಾರೆ. ಕೋಮು ಸೌಹಾರ್ದತೆ, ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ಸಲುವಾಗಿ ಸೆಕ್ಷನ್ ಜಾರಿ ಮಾಡಲಾಗಿದ್ದು, ಜೊತೆಗೆ ಮದ್ಯ ಮಾರಾಟವನ್ನೂ ನಿಷೇಧಿಸಲಾಗಿದೆ.
ಮತೀಯವಾಗಿ ಸೂಕ್ಷ್ಮವಾದ ಕೊಡಗು ಜಿಲ್ಲೆಯ್ಲಿ ಯಾವುದೇ ರಾಜಕೀಯ, ಮತೀಯ, ಸಾರ್ವಜನಿಕ ಸಭೆ, ಮೆರವಣಿಗೆ ಪ್ರತಿಭಟನೆಗಳಿಗೆ ಅವಕಾಶ ನೀಡಿದಲ್ಲಿ ಕೋಮು ಗಲಭೆ ಆಗುವ ಸಾಧ್ಯತೆ ಇದೆ. ಆದ್ದರಿಂದ ನಿಷೇಧಾಜ್ಞೆ ಜರಿಗೊಳಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಸತೀಶ್ ತಿಳಿಸಿದ್ದಾರೆ.