ಬೆಂಗಳೂರು : ಸೆಪ್ಟೆಂಬರ್ 6 ರಂದು ರಾಜ್ಯ ಸರ್ಕಾರಿ ನೌಕರರ ದಿನಾಚರಣೆಯನ್ನು ಆಯೋಜಿಸಲಾಗಿದ್ದು, ಈ ಕಾರ್ಯಕ್ರಮದಲ್ಲಿ ಸೇವಾ ಸಾಧಕರಿಗೆ ಸರ್ವೋತ್ತಮ ಸೇವಾ ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿದೆ.
ಸೆಪ್ಟೆಂಬರ್ 6 ರ ಬೆಳಿಗ್ಗೆ 11 ಗಂಟೆಗೆ ಬೆಂಗಳೂರಿನ ವಿಧಾನಸೌಧದ ಔತಣ ಸಭಾಂಗಣದಲ್ಲಿ ರಾಜ್ಯ ಸರ್ಕಾರಿ ನೌಕರರ ದಿನಾಚರಣೆ ಆಯೋಜಿಸಲಾಗಿದ್ದು, ಈ ಸಮಾರಂಭಕ್ಕೆ ಹಾಜರಾಗುವ ಸರ್ಕಾರಿ ನೌಕರರಿಗೆ ಅರ್ಧ ದಿನದ ವಿಶೇಷ ಸಾಂದರ್ಭಿಕ ರಜೆಯ ಸೌಲಭ್ಯವನ್ನೂ ಕಲ್ಪಿಸಲಾಗಿದೆ. ರಾಜ್ಯ ಸರ್ಕಾರಿ ಸೇವೆಯಲ್ಲಿ ಅನುಪಮ ಸೇವೆ ಸಲ್ಲಿಸಿ ಗಮನಾರ್ಹ ಸಾಧನೆ ಮಾಡಿರುವ 30 ಸರ್ಕಾರಿ ಅಧಿಕಾರಿ ಮತ್ತು ನೌಕರರಿಗೆ 2022ನೇ ಸಾಲಿನ ರಾಜ್ಯ ಮಟ್ಟದ ಸರ್ವೋತ್ತಮ ಸೇವಾ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಆಡಳಿತ ಸುಧಾರಣಾ ವಿಭಾಗದ ಸರ್ಕಾರದ ಪ್ರಧಾನ ಕಾರ್ಯದರ್ಶಿ ಶ್ರೀವತ್ಸ ಕೃಷ್ಣ ಮಾಹಿತಿ ನೀಡಿದ್ದಾರೆ.
ಕರ್ನಾಟಕ ರಾಜ್ಯ ಸರ್ಕಾರಿ ನೌಖರರ ಸಂಘದ ಸಹಯೋಗದಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಆಯೋಜಿಸಿರುವ ಕಾರ್ಯಕ್ರಮವನ್ನು ಸಿಎಂ ಬಸವರಾಜ ಬೊಮ್ಮಾಯಿ ಉದ್ಘಾಟಿಸಲಿದ್ದಾರೆ.