ಬೆಂಗಳೂರು : ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (ಕೆಸಿಇಟಿ) ರ್ಯಾಂಕಿಂಗ್ ಅನ್ನು ಮರುರೂಪಿಸುವ ಹೈಕೋರ್ಟ್ ಆದೇಶದ ಹಿನ್ನೆಲೆಯಲ್ಲಿ, ಈ ಆದೇಶವನ್ನು ಜಾರಿಗೆ ತರುವ ಮೊದಲು ಅದನ್ನು ಸಂಪೂರ್ಣವಾಗಿ ಅಧ್ಯಯನ ಮಾಡಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಸಿಇಟಿ ಮತ್ತು ಪಿಯುಸಿ ಪರೀಕ್ಷೆಗಳಲ್ಲಿ ಉತ್ತಮವಾಗಿ ಓದಿದ ವಿದ್ಯಾರ್ಥಿಗಳಿಗೆ ಅನ್ಯಾಯವಾಗಬಾರದು. ನಾನು ಈ ಬಗ್ಗೆ ಉನ್ನತ ಶಿಕ್ಷಣ ಸಚಿವರೊಂದಿಗೂ ಚರ್ಚಿಸಿದ್ದೇನೆ. ಎಲ್ಲಾ ವಿಷಯಗಳನ್ನು ಅಧ್ಯಯನ ಮಾಡಿದ ನಂತರ ನಾವು ನ್ಯಾಯಾಲಯದ ಆದೇಶವನ್ನು ಜಾರಿಗೆ ತರುತ್ತೇವೆ ಎಂದು ಅವರು ಹೇಳಿದ್ದಾರೆ.
ಇನ್ನು ಸಿಇಟಿ ಪುನರಾವರ್ತಿತ ಅಭ್ಯರ್ಥಿಗಳಿಗೆ 2020-21 ನೇ ಸಾಲಿನ ದ್ವಿತೀಯ ಪಿಯುಸಿ ಅಂಕಗಳನ್ನು ಪರಿಗಣಿಸಿ ಹೊಸ ರ್ಯಾಂಕಿಂಗ್ ಪಟ್ಟಿ ಪ್ರಕಟಿಸುವಂತೆ ಹೈಕೋರ್ಟ್ ಸೂಚಿಸಿರುವ ಹಿನ್ನೆಲೆಯಲ್ಲಿ ಉನ್ನತ ಶಿಕ್ಷಣ ಸಚಿವ ಅಶ್ವತ್ಥನಾರಾಯಣ ನೇತೃತ್ವದಲ್ಲಿ ಮಹತ್ವದ ಸಭೆ ನಡೆಯಲಿದೆ.
ಸಭೆಯಲ್ಲಿ ಉನ್ನತ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ರಶ್ಮಿ ಮಹೇಶ್, ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ ಆಯುಕ್ತ ಪಿ.ಪ್ರದೀಪ್, ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕಿ ರಮ್ಯಾ, ಕಾನೂನು ತಜ್ಞರು ಪಾಲ್ಗೊಳ್ಳಲಿದ್ದಾರೆ.