ಬೆಂಗಳೂರು: ಶಿಕ್ಷಕರ ನೇಮಕಾತಿಗಾಗಿ ಸರ್ಕಾರವು ಈಗಾಗಲೇ ಅಗತ್ಯ ಕ್ರಮ ವಹಿಸಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಹಾಗೂ ಸಕಾಲ ಸಚಿವರು ತಿಳಿಸಿದರು. ಇಂದು ವಿಧಾನ ಪರಿಷತ್ತಿನ ಕಲಾಪದ ವೇಳೆ ವಿಧಾನ ಪರಿಷತ್ತಿನ ಸದಸ್ಯರಾದ ಬಸವರಾಜ ಶಿವಲಿಂಗಪ್ಪ ಹೊರಟ್ಟಿ ಇವರ ಶೂನ್ಯ ವೇಳೆ ಪತ್ರಕ್ಕೆ ಉತ್ತರಿಸಿದ ಸಚಿವರು, ರಾಜ್ಯದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳಲ್ಲಿ ಖಾಲಿಯಿರುವ 2120 ದೈಹಿಕ ಶಿಕ್ಷಣ ಶಿಕ್ಷಕರ ಖಾಲಿ ಹುದ್ದೆಗಳನ್ನು ಭರ್ತಿಗೆ ಅನುಮತಿ ನೀಡಲು ಕೋರಿದ ಕಡತವು ಆರ್ಥಿಕ ಇಲಾಖೆಯ ಪರಿಶೀಲನೆಯಲ್ಲಿರುತ್ತದೆ.
ರಾಜ್ಯದ ಸರ್ಕಾರಿ ಪ್ರೌಢಶಾಲೆಗಳಲ್ಲಿ ಖಾಲಿಯಿರುವ ದೈಹಿಕ ಶಿಕ್ಷಕರ ಹುದ್ದೆಗಳ ಪೈಕಿ 200 ದೈಹಿಕ ಶಿಕ್ಷಕರ ಹುದ್ದೆಗಳನ್ನು ಭರ್ತಿ ಮಾಡಲು ಕೇಂದ್ರಿಕೃತ ದಾಖಲಾತಿ ಘಟಕ, ಬೆಂಗಳೂರು (ಸಿಎಸಿ) ಇವರ ಮೂಲಕ ಕ್ರಮವಹಿಸುವಂತೆ ಸರ್ಕಾರದ ಪತ್ರ ಸಂಖ್ಯೆ: ಇಪಿ 14 ಎಲ್ಬಿಪಿ 2022ರಲ್ಲಿ ದಿ:13/09/2022ರಲ್ಲಿ ಆಯುಕ್ತರು, ಸಾರ್ವಜನಿಕ ಶಿಕ್ಷಣ ಇಲಾಖೆ, ಬೆಂಗಳೂರು ಇವರಿಗೆ ತಿಳಿಸಲಾಗಿದೆ.
ಸರ್ಕಾರದ ಅಧಿಸೂಚನೆ ಸಂಖ್ಯೆ ಇಡಿ 35 ಡಿಜಿಒ 2009 ದಿ:15-05-2014ರ ವೃಂದ ಮತ್ತು ನೇಮಕಾತಿ ನಿಯಮಗಳನ್ವಯ ಒಟ್ಟು 20 ದೈಹಿಕ ಶಿಕ್ಷಣ ಉಪನ್ಯಾಸಕರ ಹುದ್ದೆಗಳಿಗೆ ಮಂಜೂರಾತಿ ಇರುತ್ತದೆ.
ಮಂಜೂರಾದ ಹುದ್ದೆಗಳಲ್ಲಿ ಶೇಕಡಾ 50 ರಷ್ಟನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು, ಶೇಕಡ 50 ರಷ್ಟನ್ನು ಸಾರ್ವಜನಿಕ ಶಿಕ್ಷಣ ಇಲಾಖೆಯ ಸರ್ಕಾರಿ ಪ್ರೌಢ ಶಾಲೆಯಲ್ಲಿ ಸೇವೆ ಸಲ್ಲಿಸುತ್ತಿರುವ ಗ್ರೇಡ್-1 ದೈಹಿಕ ಶಿಕ್ಷಕರಿಗೆ ಬಡ್ತಿ ನೀಡುವ ಮೂಲಕ ಭರ್ತಿ ಮಾಡಲು ಅವಕಾಶ ಕಲ್ಪಿಸಲಾಗಿರುತ್ತದೆ.
ಪ್ರಸ್ತುತ ಮಂಜೂರಾಗಿರುವ 20 ದೈಹಿಕ ಶಿಕ್ಷಣ ಉಪನ್ಯಾಸಕರ ಹುದ್ದೆಗಳು ಖಾಲಿಯಿದ್ದು, ಇದರಲ್ಲಿ 10 ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿಗಾಗಿ ದಿನಾಂಕ: 18-11-2021ರಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ ಪ್ರಸ್ತಾವನೆಯನ್ನು ಸಲ್ಲಿಸಲಾಗಿದೆ.
10 ಹುದ್ದೆಗಳನ್ನು ಬಡ್ತಿ ಮೂಲಕ ಭರ್ತಿ ಮಾಡಲು ಸಾರ್ವಜನಿಕ ಶಿಕ್ಷಣ ಇಲಾಖೆಯ ಸರ್ಕಾರಿ ಪ್ರೌಢ ಶಾಲೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ಅರ್ಹ ಗ್ರೇಡ್-1 ದೈಹಿಕ ಶಿಕ್ಷಣ ಶಿಕ್ಷಕರಿಂದ ವ್ಯಕ್ತಿ ಪೂರ್ವೋತ್ತರ ದಸ್ತಾವೇಜುಗಳನ್ನು ಸಲ್ಲಿಸುವಂತೆ ಆಯುಕ್ತರು, ಸಾರ್ವಜನಿಕ ಶಿಕ್ಷಣ ಇಲಾಖೆ, ಬೆಂಗಳೂರು ಇವರಿಗೆ ದಿನಾಂಕ: 01-08-2022 ರಲ್ಲಿ ಪತ್ರ ಬರೆಯಲಾಗಿದೆ ಎಂದು ತಿಳಿಸಿದರು.