ಬೆಂಗಳೂರು : ಪೌರ ಕಾರ್ಮಿಕರ ಮಾದರಿಯಲ್ಲೇ ನಗರ ಹಾಗೂ ಮಹಾನಗರ ಪಾಲಿಕೆಗಳಲ್ಲಿ ತ್ಯಾಜ್ಯ ವಿಲೇವಾರಿಯಲ್ಲಿ ಕೆಲಸ ಮಾಡುತ್ತಿರುವ ವಿವಿಧ ಹಂತದ ಕಾರ್ಮಿಕರನ್ನು ಹಂತ ಹಂತವಾಗಿ ನೇಮಕ ಮಾಡಿಕೊಳ್ಳಲು ಕ್ರಮ ಕೈಗೊಳ್ಳಲಾಗುವುದು ಎಂದು ನಗರಾಭಿವೃದ್ದಿ ಸಚಿವ ಭೈರತಿ ಬಸವರಾಜ ಹೇಳಿದರು.
ಮಂಗಳವಾರ ವಿಧಾನಸೌಧದಲ್ಲಿ ಮಾತನಾಡಿದ ಅವರು, ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕೆಲಸ ಮಾಡುವ ಡ್ರೈವರ್, ಕ್ಲೀನರ್, ನೀರುಗಂಟಿ ಕೆಲಸ ಮಾಡುವವರನ್ನು ಹಂತ ಹಂತಗಳಲ್ಲಿ ಕಾಯಂಗೊಳಿಸಲಾಗುವುದು. ಸ್ಥಳೀಯ ಸಂಸ್ಥೆಗಳಲ್ಲಿ ಕೆಲಸ ಮಾಡುತ್ತಿರುವ ಸುಮಾರು 11,133 ಪೌರ ಕಾರ್ಮಿಕರನ್ನು ಸರ್ಕಾರಿ ನೌಕರರೆಂದು ನೇಮಕ ಮಾಡಿಕೊಳ್ಳುವ ಸಂಬಂಧ ಸಚಿವ ಸಂಪುಟ ತೀರ್ಮಾನ ಕೈಗೊಂಡಿದೆ.
ಇದೀಗ ಸ್ಥಳೀಯ ಸಂಸ್ಥೆಗಳಲ್ಲಿ ತ್ಯಾಜ್ಯ ವಿಲೇವಾರಿಯಲ್ಲಿ ಪ್ರಮುಖ ಪಾತ್ರ ವಹಿಸುವ ಲೋಡರ್ ಗಳು, ಕ್ಲೀನರ್ ಗಳು, ಒಳಚರಂಡಿ ಸ್ವಚ್ಚಗೊಳಿಸುವ ಸಹಾಯಕರನ್ನು ಹಂತ ಹಂತವಾಗಿ ಕಾಯಂಗೊಳಿಸಲು ಹಣಕಾಸು ಇಲಾಖೆ ಜೊತೆ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಹೇಳಿದ್ದಾರೆ.
ಸದ್ಯ, ರಾಜ್ಯದ ಸ್ಥಳೀಯ ಸಂಸ್ಥೆಗಳಲ್ಲಿ 806 ಲೋಡರ್, 566 ಕ್ಲೀನರ್, 622 ಯುಜಿಡಿ ಹೆಲ್ಪರ್ ಗಳು ಹಾಗೂ ಚಾಲಕರು ಕಾರ್ಯ ನಿರ್ವಹಿಸುತ್ತಿದ್ದಾರೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ.
ರಾಜ್ಯದ ನಗರಸಭೆ, ಪುರಸಭೆ ಮತ್ತು ಇತರೆ ಸ್ಥಳೀಯ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸುತ್ತಿರುವ 11,133 ಪೌರಕಾರ್ಮಿಕರನ್ನು ವಿಶೇಷ ನೇಮಕಾತಿಯಲ್ಲಿ ಸಕ್ರಮ ಮಾಡಲು ಕೂಡ ರಾಜ್ಯ ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಬಿಬಿಎಂಪಿಯ 3673, ನಗರಸಭೆ ಮತ್ತು ಪುರಸಭೆಯ 5533 ಹಾಗೂ ಮಹಾನಗರ ಪಾಲಿಕೆಗಳಲ್ಲಿನ 1,927 ಗುತ್ತಿಗೆ ನೌಕರರನ್ನು ಖಾಯಂ ಮಾಡಿಕೊಳ್ಳುವುದಕ್ಕೆ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಂಡಿರುವುದು ಪೌರಕಾರ್ಮಿಕರನ್ನು ಖಾಯಂ ಮಾಡಿಕೊಳ್ಳುವುದಕ್ಕೆ ಮುಂದಾಗಿರುವುದು ಕಾರ್ಮಿಕರ ಮೊಗದಲ್ಲಿ ಮಂದ ಹಾಸ ಮೂಡಿದೆ.