ಬೆಂಗಳೂರು: ವೀರ ರಾಣಿ ಕಿತ್ತೂರು ಚೆನ್ನಮ್ಮರವರು ಬ್ರಿಟಿಷರ ವಿರುದ್ಧ ಸಾಧಿಸಿದ ವಿಜಯೋತ್ಸವದ ನೆನಪಿಗಾಗಿ ಕಿತ್ತೂರು ಉತ್ಸವವನ್ನ ಕಿತ್ತೂರಿನಲ್ಲಿ ಆಚರಿಸಲಿದ್ದು, ಇಂದು ನಗರದ ಟೌನ್ ಹಾಲ್ ನಲ್ಲಿ ವೀರ ಜ್ಯೋತಿ ಯಾತ್ರೆಗೆ ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿಯವರು ( Chief Minister Basavaraj Bommai ) ಚಾಲನೆ ನೀಡುತ್ತಾರೆ ಎಂದು ಸಚಿವ ಗೋವಿಂದ ಕಾರಜೋಳರವರು ( Minister Govinda Karajol ) ಹೇಳಿದರು.
ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಳಗಾವಿಯ ಕಿತ್ತೂರಿನಲ್ಲಿ ಅಕ್ಟೋಬರ್ 23,24 ಮತ್ತು 25 ರಂದು ಅದ್ದೂರಿಯಾಗಿ ಕಿತ್ತೂರು ಉತ್ಸವವನ್ನ ಆಚರಿಸಲಾಗುತ್ತದೆ. ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರ ಸ್ಥಾನಗಳಿಗೆ ತಲುಪಿ ಆಅಯಾ ಜಿಲ್ಲಾಡಳಿತದಿಂದ ಪೂಜೆ ನೆರವೇರಿಸಲಾಗುತ್ತದೆ, ಅಲ್ಲದೇ ಮಾರ್ಗದುದ್ದಕ್ಕೂ ಎಲ್ಲಾ ಜಿಲ್ಲೆಗಳಲ್ಲಿ ಸ್ವಾತಂತ್ರ್ಯ ಯೋದರಿಗೂ ಸನ್ಮಾನ ಮಾಡುವ ಮೂಲಕ ಗೌರವ ಸಲ್ಲಿಸಲಾಗುವುದು ಎಂದರು.
ಮೂರು ವೇದಿಕೆ-ವಿಶಿಷ್ಟ ವಸ್ತುಪ್ರದರ್ಶನ:
ಈ ಬಾರಿ ಉತ್ಸವದಲ್ಲಿ ಮೂರು ವೇದಿಕೆ ನಿರ್ಮಿಸಲಾಗುವುದು. ಮಹಿಳೆಯರಿಗಾಗಿ ಒಂದು ದಿನ ಮೀಸಲಿಡಲು ನಿರ್ಧರಿಸಲಾಗಿದೆ. ಇದೇ ರೀತಿ ವಿವಿಧ ಬಗೆಯ ಕ್ರೀಡೆಗಳಿಗೆ ಅವಕಾಶ ಕಲ್ಪಿಸಲಾಗುವುದು. ಸ್ಥಳೀಯ ಕಲಾವಿದರಿಗೆ ಪ್ರೋತ್ಸಾಹ ದೊರಕಲಿದೆ ಎಂದು ಶಾಸಕ ದೊಡ್ಡಗೌಡ್ರ ಹೇಳಿದರು.
ಆಹಾರ, ಫಲಪುಷ್ಪ ಪ್ರದರ್ಶನ ಸೇರಿದಂತೆ ವಿವಿಧ ಬಗೆಯ ವಸ್ತುಪ್ರದರ್ಶನ ಮೇಳವನ್ನು ಆಯೋಜಿಸುವ ಕುರಿತು ಚರ್ಚೆ ನಡೆಸಲಾಗಿದೆ. ಇದಲ್ಲದೇ ಮೂರು ದಿನಗಳ ಕಾಲ ಅತ್ಯುತ್ತಮ ದೀಪಾಲಂಕಾರ ಮಾಡಲು ಟೆಂಡರ್ ನೀಡಲಾಗುವುದು ಎಂದು ತಿಳಿಸಿದರು. ಕಿತ್ತೂರು ಪಟ್ಟಣ ಮತ್ತು ಕೋಟೆಯ ಆವರಣದ ಸ್ವಚ್ಛತೆಗೆ ಕ್ರಮ ಕೈಗೊಳ್ಳಲಾಗುವುದು. ಚೆನ್ನಮ್ಮ ಉತ್ಸವದಲ್ಲಿ ವಿವಿಧ ಸಮಿತಿಗಳಲ್ಲಿ ಕೆಲಸ ನಿರ್ವಹಿಸಲು ಅನುಕೂಲವಾಗುವಂತೆ ಹೆಸರು ನೋಂದಾಯಿಸಲು ತಹಶೀಲ್ದಾರ ಕಚೇರಿಯಲ್ಲಿ ಪ್ರತ್ಯೇಕ ಕೌಂಟರ್ ತೆರೆಯಲಾಗುವುದು ಎಂದು ಹೇಳಿದರು.
ಉತ್ಸವ ಯಶಸ್ವಿಗೆ ಪೂರ್ವಸಿದ್ಧತೆ ಆರಂಭ:
ಕಿತ್ತೂರು ಉತ್ಸವ ರಾಜ್ಯಮಟ್ಟದ ಉತ್ಸವವಾಗಿ ಘೋಷಣೆಯಾಗಿದೆ. ಈ ಬಾರಿ ಎರಡು ಕೋಟಿ ರೂಪಾಯಿ ಅನುದಾನವನ್ನು ಸರಕಾರ ಬಿಡುಗಡೆ ಮಾಡಿದೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದರು.
ಮೊದಲ ಬಾರಿ ರಾಜ್ಯಮಟ್ಟದ ಉತ್ಸವವನ್ನಾಗಿ ಸಂಭ್ರಮದಿಂದ ಅಚರಿಸುವ ನಿಟ್ಟಿನಲ್ಲಿ ಎಲ್ಲ ರೀತಿಯ ಪೂರ್ವಸಿದ್ಧತೆಗಳನ್ನು ನಡೆಸಲಾಗುತ್ತಿದೆ. ಸ್ಥಳೀಯ ಕಲಾವಿದರಿಗೆ ಮೊದಲ ಆದ್ಯತೆ ನೀಡಲಾಗುವುದು. ಸಾಂಸ್ಕೃತಿಕ ಸಮಿತಿಯು ಸ್ಥಳೀಯ ಕಲಾವಿದರನ್ನು ಗುರುತಿಸಿ ಅವರಿಗೆ ಅವಕಾಶ ನೀಡಲಿದೆ. ಈ ಬಾರಿಯ ಉತ್ಸವದಲ್ಲಿ ಮೂರು ವೇದಿಕೆಗಳನ್ನು ನಿರ್ಮಿಸಲಾಗುವುದು. ಇತಿಹಾಸ ತಜ್ಞರ ಜತೆ ಚರ್ಚಿಸಿ ಈ ವೇದಿಕೆಗಳಿಗೆ ಹೆಸರುಗಳನ್ನು ಇಡಲಾಗುವುದು.
ಮುಖ್ಯಮಂತ್ರಿಗಳ ಜತೆ ಚರ್ಚಿಸಿ ರಾಷ್ಟ್ರಪತಿ ಅಥವಾ ಇತರೆ ಗಣ್ಯರನ್ನು ಆಹ್ವಾನಿಸುವ ಕುರಿತು ತೀರ್ಮಾನಿಸಲಾಗುವುದು. ಕೋಟೆಯ ಆವರರಣದ ಸ್ವಚ್ಛತೆಯ ಕೆಲಸವನ್ನು ನಾಳೆಯಿಂದಲೇ ಆರಂಭಿಸಲಾಗುವುದು. ಮುಂಬರುವ ದಿನಗಳಲ್ಲಿ ವರ್ಷವಿಡೀ ಸ್ವಚ್ಛತೆ ಕಾಪಾಡಲು ಕ್ರಮ ಕೈಗೊಳ್ಳಲಾಗುವುದು.
ಮೂರು ವೇದಿಕೆಗಳಲ್ಲಿ ಮೂರು ದಿನಗಳ ಕಾಲ ನಡೆಯಲಿರುವ ಕಾರ್ಯಕ್ರಮಗಳ ಪಟ್ಟಿಯನ್ನು ಮುದ್ರಿಸಿ ಸಾರ್ವಜನಿಕರಿಗೆ ವಿತರಿಸಲಾಗುವುದು.
ವೀರಜ್ಯೋತಿಯಾತ್ರೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಭಾನುವಾರ(ಅ.2) ಬೆಂಗಳೂರಿನಲ್ಲಿ ಚಾಲನೆ ನೀಡಲಿದ್ದಾರೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.
ಚೆನ್ನಮ್ಮ ಜನ್ಮಸ್ಥಳ ಅಭಿವೃದ್ದಿಗೆ ಕ್ರಮ:
ಕಾಕತಿಯಲ್ಲಿರುವ ಚೆನ್ನಮ್ಮನ ಜನ್ಮಸ್ಥಳವಾಗಿರುವ ವಾಡೆ ಖರೀದಿಸಲು ಸರಕಾರ 30 ಲಕ್ಷ ಅನುದಾನ ಒದಗಿಸಿದೆ. ಇದರ ವಾರಸುದಾರರು ಬೇರೆ ಕಡೆ ಇದ್ದು ಅವರೊಂದಿಗೆ ಚರ್ಚೆ ನಡೆದಿದೆ. ಆದಷ್ಟು ಬೇಗನೇ ಆ ಜಾಗೆಯನ್ನು ಖರೀದಿಸಿ ಅಭಿವೃದ್ಧಿಪಡಿಸಲಾಗುವುದು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದರು. ಉತ್ಸವವನ್ನು ಅರ್ಥಪೂರ್ಣವಾಗಿ ಹಾಗೂ ಸಂಭ್ರಮದಿಂದ ಆಚರಿಸಲು ಎಲ್ಲರೂ ಕೈಜೋಡಿಸಬೇಕು ಎಂದು ಸಾನಿಧ್ಯ ವಹಿಸಿದ್ದ ಕಿತ್ತೂರು ಕಲ್ಮಠದ ರಾಜಯೋಗೀಂದ್ರ ಮಡಿವಾಳೇಶ್ವರ ಸ್ವಾಮೀಜಿ ಕರೆ ನೀಡಿದರು.
ಪ್ರಾಸ್ತಾವಿಕವಾಗಿ ಮಾತನಾಡಿದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ವಿದ್ಯಾವತಿ ಭಜಂತ್ರಿ ಅವರು, ಸ್ವಾತಂತ್ರ್ಯ ಹೋರಾಟದ ಬೆಳ್ಳಿಚುಕ್ಕಿ ಕಿತ್ತೂರು ಚೆನ್ನಮ್ಮನ ಉತ್ಸವವನ್ನು ಈ ಬಾರಿ ರಾಜ್ಯಮಟ್ಟದ ಉತ್ಸವವನ್ನಾಗಿ ಆಚರಿಸಲಾಗುವುದು ಎಂದರು.
ಪ್ರಸಕ್ತ ವರ್ಷ ಮೂರು ವೇದಿಕೆಗಳಲ್ಲಿ ಕಾರ್ಯಕ್ರಮ ನಡೆಸಲು ಅನುಮೋದನೆ ದೊರೆತಿದ್ದು, ರಾಜ್ಯ, ರಾಷ್ಟ್ರ ಹಾಗೂ ಅಂತರರಾಷ್ಟ್ರೀಯ ಕಲಾವಿದರ ಕಾರ್ಯಕ್ರಮ ಆಯೋಜಿಸಲಾಗುವುದು ಎಂದರು.