ಬೆಂಗಳೂರು : ನೆರೆಯ ಭೂತಾನ್ ದೇಶದಿಂದ ಅಡಕೆ ಆಮದು ಮಾಡುವ ಕೇಂದ್ರ ಸರ್ಕಾರದ ನಿರ್ಧಾರವನ್ನು ಖಂಡಿಸಿ ರೈತ ಸಂಘಟನೆಗಳು ಪ್ರತಿಭಟನೆಗೆ ಸಜ್ಜಾಗಿದೆ.
ಇದೀಗ ಈ ವಿಚಾರದ ಕುರಿತು ಗೃಹ ಸಚಿವ ಆರಗ ಜ್ಞಾನೇಂದ್ರ ಪ್ರತಿಕ್ರಿಯೆ ನೀಡಿದ್ದು, ಭೂತಾನ್ ದೇಶದಿಂದ ಅಡಕೆ ಆಮದು ಮಾಡಿಕೊಳ್ಳುತ್ತಿರುವುದರಿಂದ ರೈತರಿಗೆ ಯಾವುದೇ ಸಮಸ್ಯೆ ಇಲ್ಲ, ಕೆಲವರು ರಾಜಕೀಯ ಲಾಭ ಪಡೆದುಕೊಳ್ಳಲು ಗುಲ್ಲೆಬ್ಬಿಸುತ್ತಿದ್ದಾರೆ ಎಂದರು.
ಈ ಹಿಂದೆ 17 ಸಾವಿರ ಟನ್ ಹಸಿ ಅಡಿಕೆ ಆಮದು ಮಾಡಿಕೊಳ್ಳಲು ಅನುಮತಿ ನೀಡಲಾಗಿತ್ತು, ಅದರಲ್ಲಿ ಶೇ 12 ರಷ್ಟು ಅಡಿಕೆಯನ್ನು ಒಣಗಿಸಲಾಗುತ್ತಿದೆ. ಭೂತಾನ್ ಜೊತೆ ನಾವು ಉತ್ತಮ ಸಂಬಂಧ ಇಟ್ಟುಕೊಳ್ಳುವ ಸಲುವಾಗಿ ಕೇಂದ್ರ ಸರ್ಕಾರ ಈ ನಿರ್ಧಾರ ಮಾಡಿದೆ ಎಂದರು. ಒಣಅಡಿಕೆ ಮತ್ತು ಅದರ ಉಪ ಉತ್ಪನ್ನಗಳನ್ನುಅಲ್ಲಿಗೆ ರಫ್ತು ಮಾಡುತ್ತಿದ್ದೇವೆ, ಈ ಹಿನ್ನೆಲೆ ಕೇಂದ್ರ ಸರ್ಕಾರ ಮುಕ್ತ ವ್ಯಾಪಾರ ಒಪ್ಪಂದ ಮಾಡಿಕೊಂಡಿದೆ. ರೈತರು ಆತಂಕಪಡುವ ಅಗತ್ಯವಿಲ್ಲ ಎಂದರು.
ಇನ್ನೂ, ನೆರೆಯ ಭೂತಾನ್ ದೇಶದಿಂದ ಅಡಕೆ ಆಮದು ಮಾಡುವ ಕೇಂದ್ರ ಸರ್ಕಾರದ ನಿರ್ಧಾರವನ್ನು ಖಂಡಿಸಿ ಖಂಡಿಸಿ ಅ. 14 ರಂದು ಬೃಹತ್ ಪ್ರತಿಭಟನಾ ಸಭೆಯನ್ನು ಕರೆಯಲಾಗಿದೆ ಎಂದು ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ರಾಜ್ಯಾಧ್ಯಕ್ಷ ಹೆಚ್ ಆರ್ ಬಸವರಾಜಪ್ಪ ತಿಳಿಸಿದ್ದಾರೆ.
ಅಡಿಕೆ ಮಾರಾಟ ಸಹಕಾರ ಸಂಘಗಳ ಒಕ್ಕೂಟ ಹಾಗೂ ಅಡಿಕೆ ವರ್ತಕರ ಸಂಘದ ಸಹಕಾರದೊಂದಿಗೆ ಬೆಳಗ್ಗೆ 10 ಗಂಟೆಗೆ ಖಾಸಗಿ ಬಸ್ ನಿಲ್ದಾಣದಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ ನಂತರ ಜಿಲ್ಲಾಡಳಿತದ ಮೂಲಕ ಪ್ರಧಾನ ಮಂತ್ರಿ, ಕೇಂದ್ರದ ವಾಣಿಜ್ಯ ಕೃಷಿ ಸಚಿವರಿಗೆ ಹಾಗೂ ರಾಜ್ಯದ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಗುತ್ತದೆ ಎಂದಿದ್ದಾರೆ.
ರಾಹುಲ್ ಗಾಂಧಿ ಅಸ್ತಿತ್ವಕ್ಕಾಗಿ ಕಾಂಗ್ರೆಸ್ ಪಾದಯಾತ್ರೆ – CM ಬಸವರಾಜ ಬೊಮ್ಮಾಯಿ