ನವದೆಹಲಿ: ಕಾಂಗ್ರೆಸ್ ಅಧ್ಯಕ್ಷ ಚುನಾವಣೆಯಲ್ಲಿ ಭರ್ಜರಿ ಗೆಲವು ಪಡೆದಿರುವ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆಯವರು ನಾಳೆ ಕಾಂಗ್ರೆಸ್ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಸಮಾರಂಭಕ್ಕೆ ಕಾಂಗ್ರೆಸ್ ಪ್ರಧಾನ ಕಚೇರಿಯಲ್ಲಿ ಬಿರುಸಿನ ಸಿದ್ಧತೆಗಳು ನಡೆಯುತ್ತಿವೆ.
ಈ ಹಿನ್ನೆಲೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ನಾಳೆ ದೆಹಲಿಗೆ ತೆರಳಲಿದ್ದಾರೆ. ದೆಹಲಿಯಲ್ಲಿ ನಡೆಯಲಿರುವ ಪದಗ್ರಹಣ ಕಾರ್ಯಕ್ರಮಕ್ಕೆ ಆಗಮಿಸಲಿರುವ ಡಿಕೆಶಿ ಮಲ್ಲಿಕಾರ್ಜುನ ಖರ್ಗೆ ಜೊತೆ ರಾಜ್ಯದಲ್ಲಿ ನಡೆಯಬೇಕಿರುವ ಕಾಂಗ್ರೆಸ್ ಬಸ್ ಯಾತ್ರೆ ಬಗ್ಗೆ ಚರ್ಚೆ ನಡೆಸಲಿದ್ದಾರೆ ಎನ್ನಲಾಗಿದೆ.
ಖರ್ಗೆ ಭೇಟಿಯಾದ ಸಿದ್ದರಾಮಯ್ಯ
ಪದಗ್ರಹಣಕ್ಕೂ ಮುನ್ನ ಮಲ್ಲಿಕಾರ್ಜುನ ಖರ್ಗೆಯನ್ನು ಸಿದ್ದರಾಮಯ್ಯ ಭೇಟಿಯಾಗಿದ್ದಾರೆ. ನವದೆಹಲಿಯ ಖರ್ಗೆ ನಿವಾಸದಲ್ಲಿ ಸಿದ್ದರಾಮಯ್ಯ ಸೌಹಾರ್ದಯುತ ಭೇಟಿ ನಡೆಸಿದ್ದಾರೆ. ಮಲ್ಲಿಕಾರ್ಜುನ ಖರ್ಗೆಯವರು ನಾಳೆ ಕಾಂಗ್ರೆಸ್ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಳ್ಳಲಿದ್ದು, ಪದಗ್ರಹಣ ಕಾರ್ಯಕ್ರಮಕ್ಕೆಂದು ಸಿದ್ದರಾಮಯ್ಯ ದೆಹಲಿಗೆ ತೆರಳಿದ್ದಾರೆ.
ಗಾಂಧಿ ಕುಟುಂಬ ಅಧ್ಯಕ್ಷ ಸ್ಪರ್ಧೆಯಿಂದ ಹೊರಗುಳಿದ ನಂತರ ಕಾಂಗ್ರೆಸ್ ಪಕ್ಷದ ಉನ್ನತ ಹುದ್ದೆಗೆ ನೇರ ಸ್ಪರ್ಧೆಯಲ್ಲಿ ಖರ್ಗೆ ಅವರು ತಿರುವನಂತಪುರಂ ಸಂಸದ ಶಶಿ ತರೂರ್ ಅವರನ್ನು ಸೋಲಿಸುವ ಮೂಲಕ ಅಧ್ಯಕ್ಷ ಸ್ಥಾನಕ್ಕೆ ಆಯ್ಕೆಯಾಗಿದ್ದಾರೆ. ಅಖಿಲ ಭಾರತ ಕಾಂಗ್ರೆಸ್ ಸಮಿತಿ ಪ್ರಧಾನ ಕಚೇರಿಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ಮಲ್ಲಿಕಾರ್ಜುನ ಖರ್ಗೆಯವರು ಅಧಿಕಾರ ಪಡೆಯಲಿದ್ದಾರೆ.
ಕಾರ್ಯಕ್ರಮಕ್ಕಾಗಿ ಎಐಸಿಸಿ ಪ್ರಧಾನ ಕಛೇರಿಯ ಕಾಂಗ್ರೆಸ್ ಅಧ್ಯಕ್ಷರ ಕಚೇರಿ ಕೊಠಡಿಯಲ್ಲಿ ಭದ್ರತಾ ಸಿಬ್ಬಂದಿ ಮತ್ತು ಕಾರ್ಯಕರ್ತರು ಭರದಿಂದ ಸಿದ್ಧತೆಗಳನ್ನು ನಡೆಸುತ್ತಿದ್ದಾರೆ ಎನ್ನಲಾಗುತ್ತಿದೆ.