ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಮ್ಮನ್ನೆಲ್ಲ ಅಗಲಿ ಇಂದಿಗೆ ಒಂದು ವರ್ಷ ಕಳೆದಿದೆ. ಆದರೂ ಕೂಡ ಅಭಿಮಾನಿಗಳಿಗಂತೂ ಇನ್ನೂ ನೆನಪು ಹಾಗೆ ಉಳಿದಿದೆ. ಇಂದಿಗೂ ಸಹ ಅಭಿಮಾನಿಗಳು ಅಪ್ಪು ನೆನಪಿಗಾಗಿ ಸಾಕಷ್ಟು ಸಾಮಾಜಿಕ ಕಾರ್ಯ ಮಾಡಿಕೊಂಡು ಬಂದಿದ್ದಾರೆ.
ಇಂದು ಅವರ ಮೊದಲ ವರ್ಷದ ಪುಣ್ಯಸ್ಮರಣೆ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ಕುಟುಂಬಸ್ಥರು ಅಪ್ಪು ಸಮಾಧಿ ಬಳಿ ಆಗಮಿಸಿದ್ದಾರೆ. ಈ ವೇಳೆ ಅಪ್ಪು ಸಮಾಧಿಗೆ ಕುಟುಂಬದ ಸದಸ್ಯರು ಪೂಜೆ ಸಲ್ಲಿಸಿದರು. ಅಪ್ಪು ನೋಡಲು ಅಭಿಮಾನಿಗಳು ಬೆಳಗ್ಗೆಯಿಂದಲೇ ಸಮಾಧಿ ಬಳಿ ಬರುತ್ತಿದ್ದಾರೆ.ಈ ನಡುವೆ ಪತ್ನಿ ಅಶ್ವಿನಿ ಪುನೀತ್ ರಾಜ್ ಕುಮಾರ್ ಅಭಿಮಾನಿಗಳಿಗೆ ಭಾವುಕ ಪತ್ರ ಬರೆದಿದ್ದಾರೆ.
ನೆನಪಿನ ಸಾಗರದಲ್ಲಿ. ಅಪ್ಪು ಅವರು ನಮ್ಮ ನೆನಪುಗಳಲ್ಲಿ ಮಾತ್ರವಲ್ಲದೇ, ನಮ್ಮ ಆಲೋಚನೆಗಳು ಹಾಗೂ ನಾವು ಮಾಡುವ ಸತ್ಕಾರ್ಯಗಳಲ್ಲಿಯೂ ನಮ್ಮ ನಡುವೆ ಸದಾ ಜೀವಂತವಾಗಿದ್ದಾರೆ. ಅವರ ಕನಸು ಮತ್ತು ಮೌಲ್ಯಗಳನ್ನು ಜೀವಂತವಾಗಿಡಲು ನೂರಾರು ಕುಟುಂಬ ಸದಸ್ಯರು, ಅವರ ಸಾವಿರಾರು ಸ್ನೇಹಿತರು ಹಾಗೂ ಕೋಟ್ಯಂತರ ಅಭಿಮಾನಿಗಳಿಂದ ನಾನು ಪಡೆದ ಬೆಂಬಲದ ಶಕ್ತಿಯೇ ನನಗೆ ದಾರಿ ಮಾಡಿಕೊಟ್ಟಿದೆ. ಅಪ್ಪು ಅವರ ಮೇಲೆ ನಿಮ್ಮೆಲ್ಲರಿಗೆ ಇರುವ ಪ್ರೀತಿ ಮತ್ತು ಗೌರವದಿಂದ, ಸದಾ ಕಾಲ ಅವರನ್ನು ಜೀವಂತವಾಗಿರಿಸಿದ್ದಕ್ಕಾಗಿ ಎಲ್ಲರಿಗೂ ನನ್ನ ನಮನಗಳು ಎಂದು ಬರೆದಿದ್ದಾರೆ.