ತುಮಕೂರು : ತುಮಕೂರಿನಲ್ಲಿ ಘೋರ ದುರಂತವೊಂದು ಸಂಭವಿಸಿದ್ದು, ತುಮಕೂರು ಜಿಲ್ಲಾಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ಬಾಣಂತಿ ಮತ್ತು ಅವಳಿ ಮಕ್ಕಳು ಸಾವನ್ನಪ್ಪಿರುವ ಘಟನೆ ನಡೆದಿದೆ.
ತುಮಕೂರು ನಗರದ ಆಂಜನೇಯ ದೇಗುಲದ ಬಳಿ ಪುತ್ರಿ ಜೊಎಗೆ ಬಾಡಿಗೆ ಮನೆಯಲ್ಲಿ ನೆಲೆಸಿದ್ದ ತಮಿಳುನಾಡು ಮೂಲದ ಕಸ್ತೂರಿ (30) ಎಂಬ ಮಹಿಳೆಗೆ ನಿನ್ನೆ ಸಂಜೆ ಹೆರಿಗೆ ನೋವು ಕಾಣಿಸಿಕೊಂಡಿತ್ತು. ಸ್ಥಳೀಯರು ಆಟೋದಲ್ಲಿ ತುಮಕೂರು ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದರು.
ಗರ್ಭಿಣಿ ಮಹಿಳೆ ಕಸ್ತೂರಿ ಬಳಿ ತಾಯಿ ಕಾರ್ಡ್ ಹಾಗೂ ಆಧಾರ್ ಕಾರ್ಡ್ ಇಲ್ಲವೆಂದು ಜಿಲ್ಲಾಸ್ಪತ್ರೆ ವೈದ್ಯರು ಹಾಗೂ ಸಿಬ್ಬಂದಿ ಆಸ್ಪತ್ರೆಗೆ ದಾಖಲಿಸಿಕೊಳ್ಳಲು ನಿರಾಕರಿಸಿದ್ದಾರೆ. ನಾವು ಚಿಕಿತ್ಸೆ ಕೊಡಲ್ಲ. ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ಕರೆದೊಯ್ಯಿರಿ ಎಂದು ಸಿಬ್ಬಂದಿಗಳು ಹೇಳಿದ್ದಾರೆ. ಆದರೆ ಹಣ ಇಲ್ಲದೆ ಕಸ್ತೂರಿ ಮನೆಗೆ ಹಿಂದುರಿಗಿದ್ದರು.
ಇಂದು ಮುಂಜಾನೆ ಕಸ್ತೂರಿ ಒಂದು ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಮತ್ತೊಂದು ಮಗುವಿಗೆ ಜನ್ಮ ನೀಡುವಾಗ ರಕ್ತಸ್ರಾವವಾಗಿ ಕಸ್ತೂರಿ ಹಾಗೂ ಅವಳಿ ಮಕ್ಕಳೂ ಸಾವನ್ನಪ್ಪಿವೆ.