ಬೆಂಗಳೂರು : ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳಿಂದ ವಿಧಾನಪರಿಷತ್ ಸದಸ್ಯ ಸ್ಥಾನಕ್ಕೆ ನಡೆಯುವ ಚುನಾವಣೆಯಲ್ಲಿ ನಾಮ ನಿರ್ದೇಶಿತ ಸದಸ್ಯರಿಗೆ ಮತದಾನದ ಹಕ್ಕಿಲ್ಲ ಎಂದು ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ.
ಚಿಕ್ಕಮಗಳೂರು ಕ್ಷೇತ್ರದ ಮತದಾರರ ಪಟ್ಟಿಗೆ ಮೂಡಿಗೆರೆ, ಎನ್.ಆರ್. ಪುರ, ಶೃಂಗೇರಿ ಮತ್ತು ಕೊಪ್ಪ ಪಟ್ಟಣ ಪಂಚಾಯಿತಿಗಳ 12 ನಾಮ ನಿರ್ದೇಶಿತ ಸದಸ್ಯರನ್ನು ಸೇರಿಸಿದ ಚಿಕ್ಕಮಗಳೂರು ಸ್ಥಳೀಯ ಸಂಸ್ಥೆಗಳ ಮತದಾರರ ಪಟ್ಟಿ ನೋಂದಣಾಧಿಕಾರಿಯ ಕ್ರಮವನ್ನು ಹೈಕೋರ್ಟ್ ರದ್ದುಪಡಿಸಿದೆ.
ಕಳೆದ ಡಿಸೆಂಬರ್ ನಲ್ಲಿ ಚಿಕ್ಕಮಗಳೂರು ಕ್ಷೇತ್ರದಿಂದ ಮೇಲ್ಮನೆಗೆ ಆಯ್ಕೆಯಾಗಿದ್ದ ಬಿಜೆಪಿಯ ಎಂ.ಕೆ. ಪ್ರಾಣೇಶ್ ಸಂಕಷ್ಟಕ್ಕೆ ಸಿಲುಕಿದ್ದು, ಮತದಾರರ ಪಟ್ಟಿ ನೋಂದಣಾಧಿಕಾರಿಯ ಕ್ರಮ ಪ್ರಶ್ನಿಸಿ ಚುನಾವಣೆಯಲ್ಲಿ 6 ಮತಗಳ ಅಂತರದಲ್ಲಿ ಸೋಲುಂಡಿದ್ದ ಕಾಂಗ್ರೆಸ್ ಪಕ್ಷದ ಗಾಯತ್ರಿ ಶಾಂತೇಗೌಡ ಮತ್ತು ಇತರರು ಸಲ್ಲಿಸಿದ್ದ ತಕರಾರು ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಹೇಮಂತ್ ಚಂದನ್ ಗೌಡರ್ ಅವರ ನ್ಯಾಯಪೀಠ ಗುರುವಾರ ಈ ತೀರ್ಪು ನೀಡಿದೆ.