ಬೆಂಗಳೂರು: ನಾಳೆ ಬೆಂಗಳೂರಿಗೆ ಪ್ರಧಾನಿ ಮೋದಿ ಆಗಮಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಸುಗಮ ಸಂಚಾರ ವ್ಯವಸ್ಥೆಗೆ ಅಡಚಣೆಯಾಗದಂತೆ ಹಾಗೂ ಭದ್ರತಾ ದೃಷ್ಟಿಯಿಂದ ವಿಧಾನಸೌಧ, ರಾಜಭವನ ಸೇರಿದಂತೆ ಹಲವು ರಸ್ತೆಗಳಲ್ಲಿ ಸಂಚಾರವನ್ನು ನಿಷೇಧಿಸಲಾಗಿದೆ.
ರಾಜಧಾನಿಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಭದ್ರತಾ ದೃಷ್ಟಿಯಿಂದ ನಾಳೆ ಬೆಳಗ್ಗೆ 6 ರಿಂದ ಮಧ್ಯಾಹ್ನ 2ರ ವರೆಗೆ ಈ ರಸ್ತೆಗಳಲ್ಲಿ ಸಾರ್ವಜನಿಕ ಸಂಚಾರವನ್ನು ನಿರ್ಬಂಧಿಸಿ ಪರ್ಯಾಯ ಮಾರ್ಗಗಳನ್ನು ಬಳಸುವಂತೆ ನಗರ ಪೊಲೀಸ್ ಜಂಟಿ ಆಯುಕ್ತ ಬಿ.ಆರ್. ರವಿಕಾಂತೇಗೌಡ ತಿಳಿಸಿದ್ದಾರೆ.
ಮೊದಲು ಶಾಸಕರ ಭವನದಲ್ಲಿ ಕನಕದಾಸ ಮತ್ತು ವಾಲ್ಮೀಕಿ ಪ್ರತಿಮೆಗೆ ಮಾಲಾರ್ಪಣೆ ಮಾಡಲಿರುವ ಮೋದಿ, ಆನಂತರ ಸಂಗೊಳ್ಳಿರಾಯಣ್ಣ ರೈಲ್ವೆ ನಿಲ್ದಾಣದಲ್ಲಿ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ಉದ್ಘಾಟನೆ ಮಾಡಲಿದ್ದಾರೆ. ಬಳಿಕ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಟರ್ಮಿನಲ್-2 ಉದ್ಘಾಟನೆ ಮತ್ತು ಕೆಂಪೇಗೌಡ ಪ್ರತಿಮೆಯ ಅನಾವರಣ ಮಾಡಲಿದ್ದಾರೆ.