ಬೆಂಗಳೂರು : ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರ ಕಾರು ಚಾಲಕ ರವಿಕುಮಾರ್ ಎಸ್ ಕಾಳೆ ಹೃದಯಾಘಾತದಿಂದ ಇಂದು ಮೃತಪಟ್ಟಿದ್ದಾರೆ.
ಸುಮಾರು 16 ವರ್ಷದಿಂದ ರಾಜ್ಯಪಾಲರ ಕಾರು ಚಾಲಕನಾಗಿದ್ದ ರವಿಕುಮಾರ್ ಇಂದು ನಿಧನರಾಗಿದ್ದು, ರವಿಕುಮಾರ್ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಇಂದು ಪುಷ್ಪ ನಮನ ಸಲ್ಲಿಸಿದರು.
ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಮಧ್ಯರಾತ್ರಿ ರಾಜ್ಯಪಾಲರನ್ನು ಕರೆದೊಯ್ಯಲು ರವಿಕುಮಾರ್ ಬಂದಿದ್ದರು. ಈ ವೇಳೆ ಅವರಿಗೆ ಎದೆನೋವು ಕಾಣಿಸಿಕೊಂಡಿದೆ.ಕೂಡಲೇ ಅವರನ್ನು ಸ್ಥಳೀಯ ಆಸ್ಪತ್ರೆಗೆ ಆಂಬುಲೆನ್ಸ್ ಮೂಲಕ ಕರೆದುಕೊಂಡು ಹೋಗಲಾಗುತ್ತಿತ್ತು, ಆದರೆ ಮಾರ್ಗಮಧ್ಯೆ ಅವರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.