ಬೆಂಗಳೂರು : ಮಕ್ಕಳ ಕಲಿಕಾ ಕೊರತೆ ನೀಗಿಸಲು 2022-23 ನೇ ಸಾಲಿನಿಂದ ರಾಜ್ಯದ 5 ಮತ್ತು 8 ನೇ ತರಗತಿಗೆ ವಾರ್ಷಿಕ ಪರೀಕ್ಷೆ ನಡೆಸಲು ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.
ರಾಜ್ಯದ 5 ಮತ್ತು 8 ನೇ ತರಗತಿ ವಿದ್ಯಾರ್ಥಿಗಳಿಗೆ ವಾರ್ಷಿಕ ಪರೀಕ್ಷೆ ನಡೆಸಲು ರಾಜ್ಯದ ಎಲ್ಲಾ ಶಾಲೆಗಳಿಗೆ ಶಿಕ್ಷಣ ಇಲಾಖೆ ಸೂಚನೆ ನೀಡಿದೆ. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 5 ಮತ್ತು 8 ನೇ ತರಗತಿ ವಿದ್ಯಾರ್ಥಿಗಳ ಕಲಿಕಾ ಗುಣಮಟ್ಟ ಪರಿಶೀಲನೆಗಾಗಿ ಪಬ್ಲಿಕ್ ಪರೀಕ್ಷೆಯ ಮಾದರಿಯಲ್ಲೇ ಪರೀಕ್ಷೆ ನಡೆಸಲು ತೀರ್ಮಾನಿಸಿದೆ.
ರಾಜ್ಯದಲ್ಲಿ 1 ರಿಂದ 9 ನೇ ತರಗತಿ ವಿದ್ಯಾರ್ಥಿಗಳಿಗೆ ಪಾಸ್ ಮಾಡಲಾಗುತ್ತಿತ್ತು. ಹೀಗಾಗಿ ಕಲಿಕೆ ಆಸಕ್ತಿ ಕಡಿಮೆಯಾಗಿದೆ. ಕೊರೊನಾದಿಂದ ವಿದ್ಯಾರ್ಥಿಗಳು ಕಲಿಕೆಯಲ್ಲಿ ಹಿಂದುಳಿದಿದ್ದಾರೆ. ಇದೇ ಪರಿಸ್ಥಿತಿ ಮುಂದುವರೆದರೆ ಎಸ್.ಎಸ್.ಎಲ್. ಸಿ , ಪಿಯುಸಿ ಪರೀಕ್ಷೆ ಸೇರಿದಂತೆ ವಿವಿಧ ಕೋರ್ಸ್ ಗಳ ಪ್ರವೇಶ ಪರೀಕ್ಷೆ ಎದುರಿಸುವುದು ವಿದ್ಯಾರ್ಥಿಗಳಿಗೆ ಕಷ್ಟವಾಗುವ ಸಾದ್ಯತೆ ಇರುವ ಹಿನ್ನೆಲೆಯಲ್ಲಿ 5 ಮತ್ತು 8 ನೇ ತರಗತಿ ವಿದ್ಯಾರ್ಥಿಗಳಿಗೆ ಪಬ್ಲಿಕ್ ಪರೀಕ್ಷೆಗೆ ಶಿಕ್ಷಣ ಇಲಾಖೆ ಮುಂದಾಗಿದೆ.