ನವದೆಹಲಿ: ಮೂರು ತಿಂಗಳೊಳಗೆ ದಕ್ಷಿಣ ಪೆನ್ನಾ ನದಿ ನೀರು ವಿತರಣಾ ನ್ಯಾಯಮಂಡಳಿ ಸ್ಥಾಪಿಸುವಂತೆ ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿದೆ.
ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ತಮಿಳುನಾಡು ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಎಂ.ಆರ್.ಶಾ ಹಾಗೂ ಸಿ.ಟಿ.ರವಿಕುಮಾರ್ ನೇತೃತ್ವದ ನ್ಯಾಯಪೀಠವು ಮೂರು ತಿಂಗಳಲ್ಲಿ ನ್ಯಾಯಾಧಿಕರಣ ರಚಿಸಬೇಕು ಎಂದು ಆದೇಶ ನೀಡಿದೆ.
ಕರ್ನಾಟಕ ಮತ್ತು ತಮಿಳುನಾಡು ನಡುವಿನ ಪೆನ್ನಾರ್ (ದಕ್ಷಿಣ ಪಿನಾಕಿನಿ) ನದಿ ನೀರು ಬಳಕೆ ವಿವಾದ ಪರಿಹಾರಕ್ಕಾಗಿ ಕೇಂದ್ರ ಸರ್ಕಾರವು ನ್ಯಾಯಮಂಡಳಿಗೆ ಮನಸ್ಸು ಮಾಡಿತ್ತು ಎನ್ನಲಾಗಿದೆ. ಈ ನಡುವೆ ವಿವಾದವನ್ನು ಮಾತುಕತೆಯ ಮೂಲಕ ಬಗೆಹರಿಸಿಕೊಳ್ಳಬಹುದು ಎಂದು ಕರ್ನಾಟಕ ವಾದ ಮಂಡಿಸಿತ್ತು.