ಮಂಡ್ಯ : ಮುಂಬರುವ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಜನಸಂಕಲ್ಪ ಯಾತ್ರೆ ಮೂಲಕ ಚುನಾವಣಾ ತಯಾರಿ ಆರಂಭಿಸಿರುವ ಬಿಜೆಪಿ ನಾಯಕರು ಶುಕ್ರವಾರ ಸಕ್ಕರೆನಾಡು ಮಂಡ್ಯದಲ್ಲಿ ಚುನಾವಣಾ ರಣಕಹಳೆ ಮೊಳಗಿಸಿದರು.
ಚುನಾವಣೆ ಹಿನ್ನೆಲೆಯಲ್ಲಿ ಮದ್ದೂರು ತಾಲೂಕು ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಜನಸಂಕಲ್ಪ ಯಾತ್ರೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ, ಕಂದಾಯ ಸಚಿವ ಆರ್.ಅಶೋಕ್, ಜಿಲ್ಲಾ ಉಸ್ತುವಾರಿ ಸಚಿವ ಗೋಪಾಲಯ್ಯ, ಕ್ರೀಡಾ ಸಚಿವ ನಾರಾಯಣ ಗೌಡ ಸೇರಿದಂತೆ ಪಕ್ಷದ ಹಲವು ಮುಖಂಡರು ಚಾಲನೆ ನೀಡಿದರು.
BREAKING NEWS: ಮುರುಘಾ ಶ್ರೀ ವಿರುದ್ಧ ಪಿತೂರಿ ಕೇಸ್: ‘ಸೌಭಾಗ್ಯ ಬಸವರಾಜನ್’ಗೆ 1 ದಿನ ಪೊಲೀಸ್ ಕಸ್ಟಡಿಗೆ
ದೇಶದಲ್ಲಿ ಕಾಂಗ್ರೆಸ್ ಪಕ್ಷ ನೂರಾರು ವರ್ಷಗಳ ಕಾಲ ಆಡಳಿತ ಮಾಡಿದಂತ ಪಕ್ಷ. ಆದರೆ, ಇಂದು ನಾಯಕನಿಲ್ಲದ ತಬ್ಬಲಿಯಂತೆ ಅಲೆಯುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವ್ಯಂಗ್ಯವಾಡಿದರು.
ದೇಶದಲ್ಲಿ ಜಾತಿಯ ವಿಷ ಬೀಜ ಬಿತ್ತಿ ಅಧಿಕಾರ ಹಿಡಿಯುವ ಭ್ರಮೆಯಲ್ಲಿ ಕಾಂಗ್ರೆಸ್ ಇದೆ. ಮುಖ್ಯಮಂತ್ರಿ ಕುರ್ಚಿಗಾಗಿ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಟವೆಲ್ ಹಿಡಿದುಕೊಂಡು ಕೂತಿದ್ದಾರೆ. ಆದರೆ, ಮುಂದಿನ ವಿಧಾನಸಭಾ ಚುನಾವಣೆ ನಂತರ ರಾಜ್ಯದಲ್ಲಿ ಮತ್ತೆ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರುವುದು ಸೂರ್ಯ ಚಂದ್ರ ರಷ್ಟೇ ಸತ್ಯವಾಗಿದೆ ಎಂದರು.
BREAKING NEWS: 40 ಸಾವಿರ ಲಂಚ ಸ್ವೀಕರಿಸುವಾಗಲೇ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಬೆಸ್ಕಾಂ ಎಇ
ಭಾರತೀಯ ಜನತಾ ಪಕ್ಷ ಸಕಾರಾತ್ಮಕ ರಾಜಕಾರಣವನ್ನು ಮಾಡುತ್ತದೆ. ಸಬ್ ಕಾ ಸಾಥ್, ಸಬ್ ಕಾ ವಿಶ್ವಾಸ್, ಸಬ್ ಕಾ ಪ್ರಯಾಸ್ ಎಂಬ ಮಂತ್ರದೊಂದಿಗೆ ರಾಜ್ಯದಲ್ಲಿ ಅಭಿವೃದ್ಧಿ ಮಾಡಲಾಗುತ್ತಿದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರದ ಜನಕಲ್ಯಾಣ ಕಾರ್ಯಕ್ರಮಗಳ ಸಾಧನೆಯ ರಿಪೋರ್ಟ್ ಕಾರ್ಡ್ ನ್ನು ಮುಂದಿಟ್ಟುಕೊಂಡು ಈ ಬಾರಿಯೂ ರಾಜ್ಯದಲ್ಲಿ ಬಿಜೆಪಿ ಸರ್ಕಾರವನ್ನು ಅಧಿಕಾರಕ್ಕೆ ತರಲಾಗುವುದು ಎಂದರು.
ಚುನಾವಣೆ ಸಮಯದಲ್ಲಿ ಪಕ್ಷದ ಮುಖಂಡರು ಮೈ ಮರೆಯದೆ ಮನೆ ಮನೆಗೆ ತೆರಳಿ ಕೇಂದ್ರ ಮತ್ತು ರಾಜ್ಯದ ಅಭಿವೃದ್ಧಿ ಕೆಲಸಗಳನ್ನು ಅರಿವು ಮೂಡಿಸಬೇಕು. ಎಲ್ಲರೂ ಪ್ರಾಮಾಣಿಕ ಪ್ರಯತ್ನ ಮಾಡಿದರೆ ಬಿಜೆಪಿ ಅಭ್ಯರ್ಥಿ ಎಸ್.ಪಿ.ಸ್ವಾಮಿ 15 ರಿಂದ 20 ಸಾವಿರ ಮತಗಳ ಅಂತರದಿಂದ ಜಯಗಳಿಸುವುದರಲ್ಲಿ ಯಾವುದೇ ಸಂಶಯವಿಲ್ಲ ಎಂದು ಕಾರ್ಯಕರ್ತರಿಗೆ ಕಿವಿ ಮಾತು ಹೇಳಿದರು.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾತನಾಡಿ ಹಳೇ ಮೈಸೂರು ಭಾಗದಲ್ಲಿ ಪಕ್ಷದ ಬಲವರ್ಧನೆಗಾಗಿ ಶೀಘ್ರದಲ್ಲೇ ಪ್ರಧಾನಿ ನರೇಂದ್ರ ಮೋದಿ ಪ್ರವಾಸ ನಡೆಸಲಿದ್ದಾರೆ ಎಂದು ತಿಳಿಸಿದರು.
BREAKING NEWS: ಮುರುಘಾ ಶ್ರೀ ವಿರುದ್ಧ ಪಿತೂರಿ ಕೇಸ್: ‘ಸೌಭಾಗ್ಯ ಬಸವರಾಜನ್’ಗೆ 1 ದಿನ ಪೊಲೀಸ್ ಕಸ್ಟಡಿಗೆ
ಮಂಡ್ಯ ಸೇರಿದಂತೆ ಹಳೇ ಮೈಸೂರು ಭಾಗದಲ್ಲಿ ಬಿಜೆಪಿ ಪರ ಅಲೆ ಎದ್ದಿದೆ. ಈಗಾಗಲೇ ಕಾಂಗ್ರೆಸ್, ಜೆಡಿಎಸ್ ಆಡಳಿತ ನಡೆಸಿವೆ. ಈ ಎರಡು ಪಕ್ಷಗಳ ಆಡಳಿತದಲ್ಲಿ ಮೈಷುಗರ್ ಕಾರ್ಖಾನೆ ಅವನತಿ ಹೊಂದಿತ್ತು. ಇದರಿಂದ ಕಾರ್ಖಾನೆ ವ್ಯಾಪ್ತಿಯ ರೈತರು ಮೈಸೂರಿನ ಖಾಸಗಿ ಕಾರ್ಖಾನೆಗಳಿಗೆ ಕಬ್ಬು ರವಾನಿಸುವ ಪರಿಸ್ಥಿತಿ ಎದುರಾಗಿತ್ತು. ಆನಂತರ ಅಧಿಕಾರಕ್ಕೆ ಬಂದ ಬಿಜೆಪಿ ಸರ್ಕಾರ ಕಾರ್ಖಾನೆ ಆರಂಭಿಸುವ ಮೂಲಕ ರೈತರ ಸಂಕಷ್ಟಕ್ಕೆ ಸ್ಪಂದಿಸಿ, ರೈತರ ಬೆಂಬಲಕ್ಕೆ ನಮ್ಮ ಸರ್ಕಾರ ನಿಂತಿದೆ ಎಂದು ತಿಳಿಸಿದರು.
ಮಂಡ್ಯವನ್ನು ಈ ಬಾರಿ ಗಂಭೀರವಾಗಿ ಪರಿಗಣಿಸಿದ್ದೇವೆ. ಜಿಲ್ಲೆಯಲ್ಲಿ ಬದಲಾವಣೆ ಅವಶ್ಯಕತೆ ಇದೆ. ಕನಿಷ್ಠ 5, ಗರಿಷ್ಠ 7 ಸ್ಥಾನಗಳನ್ನು ಗೆಲ್ಲುವ ರಣತಂತ್ರ ರೂಪಿಸಲಾಗಿದೆ. ಮಂಡ್ಯದ 7 ಕ್ಷೇತ್ರಗಳಲ್ಲೂ ಉತ್ತಮ ನಾಯಕರು ಬಿಜೆಪಿಗೆ ಸೇರ್ಪಡೆಯಾಗಿದ್ದು, ಕಾಂಗ್ರೆಸ್ ಮತ್ತು ಜೆಡಿಎಸ್ ನಾಯಕರಿಗೆ ಈಗಾಗಲೇ ಭಯ ಶುರುವಾಗಿದೆ. ಮಂಡ್ಯದ 7 ಕ್ಷೇತ್ರಗಳಲ್ಲೂ ಇನ್ನು ಮುಂದೆ ನಮ್ಮದೇ ಆಟ ಎಂದು ವಿರೋಧ ಪಕ್ಷಗಳಿಗೆ ಟಾಂಗ್ ನೀಡಿದರು.
ಮಂಡ್ಯದಲ್ಲಿ ಬಿಜೆಪಿಗೆ ಶಕ್ತಿ ನೀಡಿದರೇ ಜಿಲ್ಲೆಯ ಸರ್ವಾಂಗೀಣ ಅಭಿವೃದ್ಧಿಗೆ ಸರ್ಕಾರ ಬದ್ದವಾಗಿದೆ. ಮದ್ದೂರು ಕ್ಷೇತ್ರದ ಅಭಿವೃದ್ಧಿಗೂ ನಮ್ಮ ಸರ್ಕಾರ ವಿಶೇಷ ಕಾಳಜಿ ವಹಿಸಿದೆ. ಮದ್ದೂರಿನಲ್ಲಿ ಎಸ್.ಪಿ.ಸ್ವಾಮಿ ಒಳ್ಳೆ ಸಂಘಟನೆ ಮಾಡಿದ್ದಾರೆ. ಚುನಾವಣೆಯಲ್ಲಿ ಕ್ಷೇತ್ರದ ಜನತೆ ಎಸ್.ಪಿ.ಸ್ವಾಮಿಗೆ ಆಶೀರ್ವಾದ ಮಾಡಿದರೇ, ಸ್ಪಷ್ಟ ಬಹುಮತದ ಮೂಲಕ ಮತ್ತೆ ಬಿಜೆಪಿ ಅಧಿಕಾರಕ್ಕೆ ಬಂದು ಕ್ಷೇತ್ರದ ಮತ್ತಷ್ಟು ಅಭಿವೃದ್ಧಿಗೆ ನಮ್ಮ ಸರ್ಕಾರ ಬದ್ಧವಾಗಿದೆ ಎಂದರು.
ಕಾರ್ಯಕ್ರಮದಲ್ಲಿ ಕಂದಾಯ ಸಚಿವ ಆರ್.ಅಶೋಕ್, ಜಿಲ್ಲಾ ಉಸ್ತುವಾರಿ ಸಚಿವ ಗೋಪಾಲಯ್ಯ, ಕ್ರೀಡಾ ಸಚಿವ ನಾರಾಯಣ ಗೌಡ, ಮಾಜಿ ಎಂಎಲ್ಸಿ ಡಿ.ಎಸ್.ವೀರಯ್ಯ, ಮಾಜಿ ಸಚಿವ ಸೋಮಶೇಖರ್ ಮುಖಂಡರಾದ ಮುನಿರಾಜು, ಜಿಲ್ಲಾಧ್ಯಕ್ಷ ಸಿ.ಪಿ.ಉಮೇಶ್, ತಾಲ್ಲೂಕು ಅಧ್ಯಕ್ಷ ಪಣ್ಣೆದೊಡ್ಡಿ ರಘು, ಇಂಡುವಾಳು ಸಚ್ಚಿದಾನಂದ ಸೇರಿದಂತೆ ಮುಖಂಡರು, ಕಾರ್ಯಕರ್ತರು ಇದ್ದರು.
ವರದಿ : ಗಿರೀಶ್ ರಾಜ್, ಮಂಡ್ಯ