ಬೆಂಗಳೂರು / ಬೆಳಗಾವಿ ಸುವರ್ಣಸೌಧ : ನ್ಯಾಯಮೂರ್ತಿ ಹೆಚ್.ಎನ್. ನಾಗಮೋಹನ್ ದಾಸ್ ಅವರು ನೀಡಿರುವ ವರದಿಯನ್ವಯ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಠ ಪಂಗಡ ಮೀಸಲಾತಿ ಪ್ರಮಾಣ ಹೆಚ್ಚಿಸಿ ಶೆಡ್ಯೂಲ್-9 ರಲ್ಲಿ ಸೇರ್ಪಡೆಗೊಳಿಸಿ ಸಂರಕ್ಷಿಸಲು ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಲಾಗಿದೆ ಎಂದು ಸಾರಿಗೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರಾದ ಬಿ.ಶ್ರೀರಾಮು ಹೇಳಿದರು.
ವಿಧಾನ ಪರಿಷತ್ತಿನಲ್ಲಿಂದು ಸದಸ್ಯ ಶರವಣ ಟಿ ಎ ಅವರ ಪ್ರಶ್ನೆಗೆ ಉತ್ತರಿಸಿ ಸಚಿವ ಶ್ರೀರಾಮುಲು ಮಾತನಾಡಿದರು, ಸಂವಿಧಾನದ ಶೆಡ್ಯೂಲ್-9 ರಲ್ಲಿ ಸೇರ್ಪಡೆಗೊಳಿಸಿ ಸಂರಕ್ಷಿಸಲು ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿ ಕ್ರಮವಹಿಸಲು ಎಲ್ಲಾ ರೀತಿಯ ಪ್ರಯತ್ನ ಮಾಡಲಾಗುತ್ತಿದೆ. ಪರಿಶಿಷ್ಟ ಪಂಗಡ ಸಮುದಾಯದವರ ಸಂಖ್ಯೆ 2011ರ ಜನಗಣತಿ ಪ್ರಕಾರ 42.40 ಲಕ್ಷ ಇದೆ. ನ್ಯಾ. ಹೆಚ್.ಎನ್.ನಾಗಮೋಹನ್ ದಾಸ್ ಅವರ ವರದಿಯ ಶಿಫಾರಸ್ಸಿನನ್ವಯ ಶೈಕ್ಷಣಿಕ ಸಂಸ್ಥೆಗಳಲ್ಲಿನ ಸ್ಥಾನಗಳಲ್ಲಿ ಮತ್ತು ರಾಜ್ಯಾಧೀನ ಸೇವೆಗಳಲ್ಲಿನ ನೇಮಕಾತಿ ಅಥವಾ ಹುದ್ದೆಗಳಲ್ಲಿ ಪರಿಶಿಷ್ಟ ಜಾತಿಗೆ ಶೇ.15 ರಿಂದ ಶೇ. 17ಕ್ಕೆ ಮತ್ತು ಪರಿಶಿಷ್ಟ ಪಂಗಡಕ್ಕೆ ಶೇ.3 ರಿಂದ 7ರಷ್ಟು ಮೀಸಲಾತಿ ಹೆಚ್ಚಿಸಲಾಗಿದೆ. ಬಳಿಕ ಅಧಿಸೂಚನೆಯನ್ನು ಸಹ ಹೊರಡಿಸಿ 2022ರ ನವೆಂಬರ್ 1 ರಿಂದ ಜಾರಿ ತರಲಾಗಿದೆ ಎಂದು ಅವರು ತಿಳಿಸಿದರು.
ಸರ್ವೋಚ್ಚ ನ್ಯಾಯಾಲಯದ 9 ನ್ಯಾಯಾಧೀಶರನ್ನೊಳಗೊಂಡ ಪೀಠವು, ಇಂದಿರಾ ಸಹಾನಿ ಪ್ರಕರಣದಲ್ಲಿ ಮೀಸಲಾತಿ ಪ್ರಮಾಣ ಶೇ.50ನ್ನು ಮೀರಿರಬಾರದೆಂದು ಹೇಳಿದೆ. ಆದರೆ ಕೆಲವೊಂದು ವಿಶೇಷ ಸಂದರ್ಭಗಳಲ್ಲಿ ಅಂದರೆ ಸಮುದಾಯಗಳ ಜನಸಂಖ್ಯೆಯ ನಿಖರ ಅಂಕಿ ಅಂಶಗಳು ಹಾಗೂ ಸಮುದಾಯಗಳ ಸಾಮಾಜಿಕ ಹಿಂದುಳಿಯುವಿಕೆಯ ಹಿನ್ನೆಲೆಯಲ್ಲಿ ಮೀಸಲಾತಿ ಪ್ರಮಾಣವನ್ನು ಹೆಚ್ಚಿಸಲಾಗಿದೆ ಎಂದು ಸಚಿವರು ತಿಳಿಸಿದರು