ಬೆಂಗಳೂರು :ದಿನಾಂಕ: 01.04.2006ರ ಪೂರ್ವದಲ್ಲಿನ ನೇಮಕಾತಿ ಅಧಿಸೂಚನೆಗಳ ಮೂಲಕ ಆಯ್ಕೆ ಹೊಂದಿ ಆ ದಿನಾಂಕದಂದು ಅಥವಾ ನಂತರದಲ್ಲಿ ರಾಜ್ಯ ಸರ್ಕಾರದ ಸೇವೆಗೆ ಸೇರಿದ ನೌಕರರನ್ನು ಹಳೆಯ ಡಿಫೈನ್ಸ್ ಪಿಂಚಣಿ ಯೋಜನೆಗೆ ಒಳಪಡಿಸುವ ಕುರಿತು ರಾಜ್ಯ ಸರ್ಕಾರವು ಅಧಿಕೃತ ರಾಜ್ಯಪತ್ರ ಹೊರಡಿಸಿದೆ. ಈ ಮೂಲಕ ಸಾವಿರಾರು ಮಂದಿಗೆ ಸಿಹಿ ಸುದ್ದಿಯನ್ನು ನೀಡಿದೆ.
ಇನ್ನೂ ಗೆಜೆಟ್ ನಲ್ಲಿ ಉಲ್ಲೇಕ ಮಾಡಿರುವುದು ಈ ಕೆಳಕಂಡತಿವೆ
ಸರ್ಕಾರಿ ಆದೇಶದನ್ವಯ ದಿನಾಂಕ: 01.04.2006 ರಂದು ಹಾಗೂ ತದನಂತರ ಸರ್ಕಾರಿ ಸೇವೆಗೆ ಸೇರಿದ ಎಲ್ಲಾ ಸರ್ಕಾರಿ ನೌಕರರಿಗೆ ನೂತನ ಅಂಶದಾಯಿ ಕೊಡುಗೆ ಯೋಜನೆಯನ್ನು (ರಾಷ್ಟ್ರೀಯ ಪಿಂಚಣಿ ಯೋಜನೆ) ಕಡ್ಡಾಯವಾಗಿ ಜಾರಿಗೊಳಿಸಲಾಗಿದೆ.
ಓದಲಾದ ಕ್ರಮ ಸಂಖ್ಯೆ (2)ರ ಸರ್ಕಾರಿ ಆದೇಶದಲ್ಲಿನ ಸೂಚನೆಗಳನ್ವಯ ರಾಷ್ಟ್ರೀಯ ಪಿಂಚಣಿ ಯೋಜನೆಯನ್ನು ಜಾರಿಗೊಳಿಸುವ ಮಾರ್ಗಸೂಚಿಯನ್ನು ರೂಪಿಸುವುದರೊಂದಿಗೆ ಈ ಯೋಜನೆಯನ್ನು ಕಾರ್ಯಗತಗೊಳಿಸಲಾಗಿದೆ.
ಕೇಂದ್ರ ಸರ್ಕಾರವು ತನ್ನ ನೌಕರರಿಗೆ 22-12-2003 ರ ಮೊದಲು ನೇಮಕಾತಿ/ನೇಮಕಾತಿಗಾಗಿ ಜಾಹೀರಾತು/ಅಧಿಸೂಚಿಸಲಾದ ಹುದ್ದೆ ಅಥವಾ ರಿಕ್ತ ಸ್ಥಾನದ ಎದುರಾಗಿ ನೇಮಕಾತಿ ಹೊಂದಿ ದಿನಾಂಕ:01.01.2004ರಂದು ಅಥವಾ ತದನಂತರ ಸೇವೆಗೆ ಸೇರಿದ ನೌಕರರಿಗೆ ಹಿಂದಿನ ಡಿಫೈನ್ಸ್ ಪಿಂಚಣಿ ಯೋಜನೆಗೆ ಒಳಪಡಿಸಲು ಒಂದು ಬಾರಿಯ ಆಯ್ಕೆಯ ಅವಕಾಶವನ್ನು ಕಲ್ಪಿಸಿ ದಿನಾಂಕ:31.08.2023 ರೊಳಗೆ ಆಯ್ಕೆ ಮಾಡಿಕೊಳ್ಳಲು ಕೇಂದ್ರ ಸರ್ಕಾರದ ದಿನಾಂಕ:03.03.2023ರ ಅಧಿಕೃತ ಜ್ಞಾಪನದಲ್ಲಿ ಮಾರ್ಗಸೂಚಿಗಳನ್ನು ಹೊರಡಿಸಿದೆ.
ಸರ್ಕಾರಿ ಆದೇಶದನ್ವಯ ರಾಜ್ಯ ಸರ್ಕಾರದ ಸೇವೆಯಲ್ಲಿರುವ ಅಖಿಲ ಭಾರತ ಸೇವೆಗೆ ಸೇರಿದ ಅರ್ಹ ಅಧಿಕಾರಿಗಳನ್ನು ಹಿಂದಿನ ಡಿಫೈನ್ಸ್ ಪಿಂಚಣಿ ಯೋಜನೆಗೆ ಒಳಪಡಿಸಿ ಆದೇಶಿಸಿದೆ.
ಕೇಂದ್ರ ಸರ್ಕಾರದ ದಿನಾಂಕ: 03.03.2023ರ ಅಧಿಕೃತ ಜ್ಞಾಪನದಲ್ಲಿ ಸಂಬಂಧಿತ ಕೇಂದ್ರ ಸರ್ಕಾರಿ ನೌಕರರಿಗೆ ಕಲ್ಪಿಸಲಾದ ಸೌಲಭ್ಯವನ್ನು ಅದೇ ಸನ್ನಿವೇಶದಲ್ಲಿರುವ ರಾಜ್ಯ ಸರ್ಕಾರಿ ನೌಕರರಿಗೂ ಅನ್ವಯಿಸಲು ತೀರ್ಮಾನಿಸಿದ ಸರ್ಕಾರವು ದಿನಾಂಕ: 01.04.2006ರ ಪೂರ್ವದಲ್ಲಿನ ನೇಮಕಾತಿ ಅಧಿಸೂಚನೆಗಳ ಮೂಲಕ ಆಯ್ಕೆ ಹೊಂದಿ ಆ ದಿನಾಂಕದಂದು ಅಥವಾ ತದನಂತರದಲ್ಲಿ ರಾಜ್ಯ ಸರ್ಕಾರದ ಸೇವೆಗೆ ಸೇರಿದ ನೌಕರರನ್ನು ಹಳೆಯ ಡಿಫೈನ್ಸ್ ಪಿಂಚಣಿ ಯೋಜನೆ ವ್ಯಾಪ್ತಿಗೆ ಒಳಪಡಿಸಲು ಸಂಬಂಧಪಟ್ಟ ಸರ್ಕಾರಿ ನೌಕರರಿಂದ ಅಭಿಮತವನ್ನು ಪಡೆದು ಕ್ರಮಕೈಗೊಳ್ಳುವುದು ಸೂಕ್ತವೆಂದು ಪರಿಗಣಿಸಿ ಈ ಕೆಳಕಂಡಂತೆ ಆದೇಶಿಸಿದೆ.
ರಾಜ್ಯ ಸಿವಿಲ್ ಸೇವೆಗಳಲ್ಲಿನ ಖಾಲಿ ಹುದ್ದೆಗಳ ಭರ್ತಿಗಾಗಿ ಹೊರಡಿಸಿದ ನೇಮಕಾತಿ ಅಧಿಸೂಚನೆಗಳ ಮೇರೆಗೆ ಆಯ್ಕೆ ಹೊಂದಿ ದಿನಾಂಕ: 01.04.2006ರಂದು ಅಥವಾ ಆ ದಿನಾಂಕದ ನಂತರ ಸೇವೆಗೆ ಸೇರಿರುವ ಕಾರಣದಿಂದ ನೂತನ ಅಂಶದಾಯಿ ಕೊಡುಗೆ ಯೋಜನೆಯ (ರಾಷ್ಟ್ರೀಯ ಪಿಂಚಣಿ ಯೋಜನೆ) ವ್ಯಾಪ್ತಿಗೊಳಪಟ್ಟಿರುವ ಸರ್ಕಾರಿ ನೌಕರರನ್ನು ಸರ್ಕಾರವು ಅವರ ಅಭಿಮತದ ಮೇರೆಗೆ ಕೆಳಕಂಡ ಷರತ್ತುಗಳಿಗೊಳಪಟ್ಟು ಒಂದು ಬಾರಿಯ ಕ್ರಮವಾಗಿ ಹಿಂದಿನ ಡಿಫೈನ್ಸ್ ಪಿಂಚಣಿ ಯೋಜನೆಯ ವ್ಯಾಪ್ತಿಗೊಳಪಡಿಸಲು ಒಪ್ಪಿಗೆ ನೀಡಿದೆ:-
ದಿನಾಂಕ: 01.04.2006ರ ಪೂರ್ವದಲ್ಲಿನ ನೇಮಕಾತಿ ಅಧಿಸೂಚನೆಗಳ ಮೂಲಕ ಆಯ್ಕೆ ಹೊಂದಿ ಆ ದಿನಾಂಕದಂದು ಅಥವಾ ತದನಂತರದಲ್ಲಿ ರಾಜ್ಯ ಸರ್ಕಾರದ ಸೇವೆಗೆ ಸೇರಿದ ಸರ್ಕಾರಿ ನೌಕರರು ಹಿಂದಿನ ಡಿಫೈನ್ಸ್ ಪಿಂಚಣಿ ಯೋಜನೆಗೆ ಒಳಪಡಲು ಇಚ್ಚಿಸಿದಲ್ಲಿ ತಮ್ಮ ಅಭಿಮತವನ್ನು ನಿಗಧಿತ ನಮೂನೆಯಲ್ಲಿ ದಿನಾಂಕ: 30.06.2024ರೊಳಗೆ ಸಕ್ಷಮ ನೇಮಕಾತಿ ಪ್ರಾಧಿಕಾರಕ್ಕೆ ನೇರವಾಗಿ ಸಲ್ಲಿಸತಕ್ಕದ್ದು. ಈ ಆಯ್ಕೆಯನ್ನು ಒಂದು ಬಾರಿಗೆ ಮಾತ್ರ ಚಲಾಯಿಸಲು ಅವಕಾಶವಿರುತ್ತದೆ.
ಒಂದು ಬಾರಿ ಮಾಡಿಕೊಂಡ ಆಯ್ಕೆಯನ್ನು ಬದಲಾಯಿಸಲು ಅವಕಾಶವಿಲ್ಲ.
ಮೇಲಿನ 1 ರಂತೆ ಆಯ್ಕೆಯನ್ನು ಚಲಾಯಿಸಲು ಅರ್ಹ ಸರ್ಕಾರಿ ನೌಕರರು ನಿಗಧಿತ ದಿನಾಂಕದೊಳಗೆ ತಮ್ಮ ಆಯ್ಕೆಯನ್ನು ಚಲಾಯಿಸದೇ ಇದ್ದಲ್ಲಿ ರಾಷ್ಟ್ರೀಯ ಪಿಂಚಣಿ ಯೋಜನೆಯಲ್ಲಿ ಮುಂದುವರೆಯುತ್ತಾರೆ.
ನೌಕರರ ಆಯ್ಕೆಗನುಸಾರ ಅವರು ಹಿಂದಿನ ಡಿಫೈನ್ಸ್ ಪಿಂಚಣಿ ಯೋಜನೆಗೊಳಪಡಲು ನಿಗಧಿತ ಅರ್ಹತೆಯನ್ನು ಹೊಂದಿರುವುದನ್ನು ಸಕ್ಷಮ ನೇಮಕಾತಿ ಪ್ರಾಧಿಕಾರವು ಖಚಿತಪಡಿಸಿಕೊಂಡು ದಿನಾಂಕ: 31.07.2024 ರೊಳಗಾಗಿ ಅಂತಹ ನೌಕರರನ್ನು ಹಿಂದಿನ ಡಿಫೈನ್ಸ್ ಪಿಂಚಣಿ ಯೋಜನೆಗೊಳಪಡಿಸಲು ಶಿಫಾರಸ್ಸಿನೊಂದಿಗೆ ಇಲಾಖಾ ಮುಖ್ಯಸ್ಥರಿಗೆ ಕ್ರೋಢೀಕೃತ ಪ್ರಸ್ತಾವನೆಯನ್ನು ಸಲ್ಲಿಸತಕ್ಕದ್ದು.
ಇಲಾಖಾ ಮುಖ್ಯಸ್ಥರು ತಮ್ಮ ಅಧೀನದ ಎಲ್ಲಾ ನೇಮಕಾತಿ ಪ್ರಾಧಿಕಾರಗಳಿಂದ ಸ್ವೀಕೃತವಾದ ಪ್ರಸ್ತಾವನೆಗಳನ್ನು ಪರಿಶೀಲಿಸಿ ಹಿಂದಿನ ಡಿಫೈನ್ಸ್ ಪಿಂಚಣಿ ಯೋಜನೆಗೆ ಒಳಪಡಲು ಅರ್ಹ ನೌಕರರ ಪಟ್ಟಿಯನ್ನು ದಿನಾಂಕ: 31.08.2024ರೊಳಗೆ ಆರ್ಥಿಕ ಇಲಾಖೆಯ ಅನುಮೋದನೆಗಾಗಿ ಸಲ್ಲಿಸತಕ್ಕದ್ದು.
ದಿನಾಂಕ: 01.04.2006ರ ಪೂರ್ವದಲ್ಲಿನ ರಾಜ್ಯ ಸಿವಿಲ್ ಸೇವೆಯಲ್ಲಿನ ಖಾಲಿ ಹುದ್ದೆಗಳಿಗೆ ಹೊರಡಿಸಲಾದ ನೇಮಕಾತಿ ಅಧಿಸೂಚನೆಯನ್ವಯ ಆಯ್ಕೆಯಾಗಿ ಕರ್ತವ್ಯಕ್ಕೆ ವರದಿ ಮಾಡಿಕೊಂಡು ತದನಂತರ ಸಮುಚಿತ ಮಾರ್ಗದಲ್ಲಿ ಅರ್ಜಿಯನ್ನು ಸಲ್ಲಿಸಿ ಸರ್ಕಾರದ ಅನ್ಯ ಇಲಾಖೆಯಲ್ಲಿನ ಹುದ್ದೆಗೆ ನೇಮಕಾತಿ ಹೊಂದಿದ ಅರ್ಹ ಸರ್ಕಾರಿ ನೌಕರರು ಹಿಂದಿನ ಡಿಫೈನ್ಸ್ ಪಿಂಚಣಿ ಯೋಜನೆ ಸೌಲಭ್ಯ ಪಡೆದುಕೊಳ್ಳಲು ಇಚ್ಚಿಸಿದಲ್ಲಿ ಮನವಿಯನ್ನು ಹಿಂದಿನ ನೇಮಕಾತಿ ಪ್ರಾಧಿಕಾರಕ್ಕೆ ದಿನಾಂಕ: 30.06.2024ರೊಳಗಾಗಿ ಸಲ್ಲಿಸತಕ್ಕದ್ದು. ನೇಮಕಾತಿ ಪ್ರಾಧಿಕಾರವು ಅಂತಹ ಸರ್ಕಾರಿ ನೌಕರನು ಸಮುಚಿತ ಮಾರ್ಗದಲ್ಲಿ ಅರ್ಜಿ ಸಲ್ಲಿಸಿ ಅನ್ಯ ಇಲಾಖೆಗೆ ಆಯ್ಕೆಯಾದ ಹುದ್ದೆಗೆ ವರದಿಮಾಡಿಕೊಳ್ಳುವ ಸಲುವಾಗಿ ಬಿಡುಗಡೆ ಹೊಂದಿರುವುದನ್ನು ಖಚಿತಪಡಿಸಿಕೊಂಡು ಮೇಲಿನ ಕ್ರಮ ಸಂಖ್ಯೆ (4) ರಂತೆ ಪರಿಶೀಲಿಸಿ ಮೇಲಿನ ಕ್ರಮ ಸಂಖ್ಯೆ (5) ರಂತೆ ಮುಂದಿನ ಕ್ರಮಕ್ಕಾಗಿ ಕಳುಹಿಸತಕ್ಕದ್ದು.