ಬೆಂಗಳೂರು: ರಾಜ್ಯದಲ್ಲಿ ಸ್ಥಾಪಿಸಿರುವಂತ ಅನೇಕ ಕಾರ್ಖಾನೆಗಳು ಸರ್ಕಾರದಿಂದ ರಿಯಾಯಿತಿ ಪಡೆಯುತ್ತಿವೆ. ಹೀಗೆ ರಿಯಾಯಿತಿ ಪಡೆದರೂ ಉದ್ಯೋಗವನ್ನು ಸ್ಥಳೀಯರಿಗೆ ನೀಡದೆ ಇರುವಂತ ಆರೋಪ ಕೇಳಿ ಬಂದಿದೆ. ಹೀಗಾಗಿ ಸ್ಥಳೀಯರಿಗೆ ಉದ್ಯೋಗ ನೀಡದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂಬುದಾಗಿ ಸಚಿವ ಎಂ.ಬಿ ಪಾಟೀಲ್ ಎಚ್ಚರಿಕೆ ನೀಡಿದ್ದಾರೆ.
ಈ ಕುರಿತಂತೆ ಮಾತನಾಡಿರುವಂತ ಕೈಗಾರಿಕಾ ಸಚಿವ ಎಂ.ಬಿ ಪಾಟೀಲ್ ಅವರು, ರಾಜ್ಯ ಸರ್ಕಾರದಿಂದ ರಿಯಾಯಿತಿ ಪಡೆದುಕೊಂಡು ಸ್ಥಳೀಯರಿಗೆ ಉದ್ಯೋಗ ನೀಡದೇ ಇದ್ದರೇ ಅಂತಹ ಉದ್ಯಮಗಳು ಅಥವಾ ಕಂಪನಿಗಳಿಂದ ರಿಯಾಯಿತಿಗಳನ್ನು ಹಿಂದಕ್ಕೆ ಪಡೆದುಕೊಳ್ಳಲಾಗುವುದು ಎಂಬುದಾಗಿ ಎಚ್ಚರಿಸಿದ್ದಾರೆ.
ನಿಯಮಾವಳಿಗಳ ಪ್ರಕಾರ, ಕೈಗಾರಿಕಾ ಉದ್ದೇಶಗಳಿಗಾಗಿ ಜಮೀನು ಕಳೆದುಕೊಂಡ ಕುಟುಂಬಗಳ ಅರ್ಹರಿಗೆ ಉದ್ಯೋಗ ನೀಡುವುದು ಕಡ್ಡಾಯವಾಗಿದೆ. ಈಗ ಸಂಕಷ್ಟಕ್ಕೆ ಸಿಲುಕಿರುವವರ ಬದುಕನ್ನು ಪರಿಗಣಿಸಿ, ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳು ಮತ್ತು ಮಂಗಳೂರು ಎಸ್ಇಜೆಡ್ ಅಭಿವೃದ್ಧಿ ಆಯುಕ್ತರ ಅಧ್ಯಕ್ಷತೆಯಲ್ಲಿ ಹಲವು ಸಭೆಗಳನ್ನು ನಡೆಸಲಾಗಿದೆ. ಅಲ್ಲದೆ, 2023ರ ನ.7ರಂದು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಕೂಡ, ಇವರನ್ನೆಲ್ಲ ಉದ್ಯೋಗದಲ್ಲಿ ಮುಂದುವರಿಸಲು ಅಗತ್ಯ ಅನುಮೋದನೆ ಪಡೆದುಕೊಳ್ಳುವಂತೆ ಜಿಎಂಪಿಎಲ್ ಸಂಸ್ಥೆಯ ಸಿಇಒ ಅವರಿಗೆ ಸೂಚಿಸಲಾಗಿದೆ ಎಂದು ಪಾಟೀಲ ತಿಳಿಸಿದರು.