ಬೆಂಗಳೂರು: ಸದಾ ವಿವಾದದ ಹೇಳಿಕೆ ನೀಡಿ ಸುದ್ದಿಯಲ್ಲಿರುವ ಸಂಸದ ಅನಂತ್ ಕುಮಾರ್ ಹೆಗಡೆ ವಿರುದ್ಧ ಯಾವುದೇ ರೀತಿಯಾದಂತಹ ಬಲವಂತ ಕ್ರಮ ಜರುಗಿಸಬೇಡಿ ಎಂದು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಮಧ್ಯಂತರ ಆದೇಶ ಹೊರಡಿಸಿದೆ ಎಂದು ತಿಳಿದುಬಂದಿದೆ.
ರಾಮಮಂದಿರ ವಿಚಾರದ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ ಪ್ರಕರಣ ಸಂಬಂಧ ಬಿಜೆಪಿ ಸಂಸದ ಅನಂತಕುಮಾರ್ಹೆಗಡೆ ವಿರುದ್ಧ ಯಾವುದೇ ಬಲವಂತದಕ್ರಮ ಜರುಗಿಸಬಾರದು ಎಂದು ಸರ್ಕಾರಕ್ಕೆ ನಿರ್ದೇಶಿಸಿ ಹೈಕೋರ್ಟ್ ಶುಕ್ರವಾರ ಮಧ್ಯಂತರ ಆದೇಶ ಮಾಡಿದೆ.
ಪ್ರಕರಣ ಸಂಬಂಧ ಉತ್ತರ ಕನ್ನಡ ಜಿಲ್ಲೆಯ ಕುಮಟಾ ಠಾಣೆ ಪೊಲೀಸರು ದಾಖಲಿಸಿರುವ ಎಫ್ಐಆರ್ ಹಾಗೂ ನಡೆಸುತ್ತಿರುವ ತನಿಖೆ ರದ್ದುಪಡಿಸುವಂತೆ ಕೋರಿ ಹೆಗಡೆ ಸಲ್ಲಿಸಿರುವ ಕ್ರಿಮಿನಲ್ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರ ಪೀಠ, ಅರ್ಜಿಯ ಮುಂದಿನ ವಿಚಾರಣೆವರೆಗೆ ಅರ್ಜಿದಾರರ ವಿರುದ್ಧ ಬಲವಂತದ ಕ್ರಮ ಜರುಗಿಸಬಾರದು ಎಂದು ಪೊಲೀಸರಿಗೆ ನಿರ್ದೇಶಿಸಿದೆ.ಜತೆಗೆ, ಅರ್ಜಿ ಸಂಬಂಧ ಕುಮಟಾ ಪೊಲೀಸರು ಮತ್ತು ದೂರುದಾರ ಮಂಜುನಾಥ್ ಗೌಡರ್ ಅವರಿಗೆ ನೋಟಿಸ್ ಜಾರಿಗೊಳಿಸಿ ವಿಚಾರಣೆ ಮುಂದೂಡಿದೆ.