ಬೆಂಗಳೂರು: ಫೆಬ್ರವರಿ.27ರಂದು ಬೆಂಗಳೂರಲ್ಲಿ ಅರಮನೆ ಮೈದಾನದಲ್ಲಿ ರಾಜ್ಯ ಸರ್ಕಾರಿ ನೌಕರರ ಮಹಾ ಸಮ್ಮೇಳನ ಮತ್ತು ಆಡಳಿತದಲ್ಲಿ ಕಾರ್ಯಕ್ಷಮತೆಯ ಕಾರ್ಯಾಗಾರ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಭಾಗವಹಿಸೋದಕ್ಕೆ ರಾಜ್ಯ ಸರ್ಕಾರಿ ನೌಕರರಿಗೆ ಈಗಾಗಲೇ 2 ದಿನ ವಿಶೇಷ ಸಾಂದರ್ಭಿಕ ರಜೆ ಮಂಜೂರು ಮಾಡಲಾಗಿತ್ತು. ಈಗ ಮುಂದುವರೆದು ರಾಜ್ಯದ ಅನುದಾನಿತ ಶಾಲಾ ಶಿಕ್ಷಕರಿಗೂ ಓಓಡಿ ನೀಡಿ ಸರ್ಕಾರ ಆದೇಶಿಸಿದೆ.
ಈ ಕುರಿತಂತೆ ಇಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಸುತ್ತೋಲೆ ಹೊರಡಿಸಿದ್ದು, ಅದರಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘವು ದಿನಾಂಕ: 27.02.2024 ರಂದು ಬೆಂಗಳೂರು ನಗರದ ಅರಮನೆ ಆವರಣದಲ್ಲಿ ನಡೆಯಲಿರುವ ರಾಜ್ಯ ಸರ್ಕಾರಿ ನೌಕರರ ಮಹಾ ಸಮ್ಮೇಳನ ಮತ್ತು ಆಡಳಿತದಲ್ಲಿ ಕಾರ್ಯಕ್ಷಮತೆ ಕಾರ್ಯಾಗಾರದಲ್ಲಿ ಭಾಗವಹಿಸಲು ಇಚ್ಛಿಸುವ ಅಧಿಕಾರಿ/ಸಿಬ್ಬಂದಿಗಳಿಗೆ ಸಮ ಸಂಖ್ಯೆಯ ಸುತ್ತೋಲೆ ದಿನಾಂಕ: 14.02.2024 ರಂತೆ ವಿಶೇಷ ಸಾಂದರ್ಭಿಕ ರಜೆಯನ್ನು ಮಂಜೂರು ಮಾಡಲಾಗಿದೆ ಎಂದಿದ್ದಾರೆ.
ಇನ್ನೂ ಮುಂದುವರೆದು, ನಿಗಮ-ಮಂಡಳಿ, ನಗರ ಪಾಲಿಕೆಗಳು, ಪ್ರಾಧಿಕಾರಗಳು, ಸ್ವಾಯತ್ತ ಸಂಸ್ಥೆಗಳು, ವಿಶ್ವವಿದ್ಯಾಲಯಗಳು ಮತ್ತು ಅನುದಾನಿತ ಶಿಕ್ಷಣ ಸಂಸ್ಥೆಗಳ ನೌಕರರಿಗೆ ಸಮ ಸಂಖ್ಯೆಯ ಸುತ್ತೋಲೆ ದಿನಾಂಕ: 14.02.2024 ರಲ್ಲಿ ತಿಳಿಸಿರುವ ವಿಶೇಷ ಸಾಂದರ್ಭಿಕ ರಜೆಯನ್ನು ಮಂಜೂರು ಮಾಡುವ ಕುರಿತು ಆಯಾಯ ಸಂಸ್ಥೆಯು ತಮ್ಮ ಹಂತದಲ್ಲಿ ಪರಿಶೀಲಿಸಿ, ಸೂಕ್ತ ನಿರ್ಧಾರ ತೆಗೆದುಕೊಳ್ಳತಕ್ಕದ್ದು ಎಂಬುದಾಗಿ ತಿಳಿಸಲಾಗಿದೆ.