ಬೆಂಗಳೂರು: 5, 8 ಮತ್ತು 9ನೇ ತರಗತಿ ಮೌಲ್ಯಾಂಕನ ಪರೀಕ್ಷೆಗೆ ಹೈಕೋರ್ಟ್ ಗ್ರೀನ್ ಸಿಗ್ನಲ್ ನೀಡಿತ್ತು. ಹೀಗಾಗಿ ನಿಗದಿತ ವೇಳಾಪಟ್ಟಿಯಂತೆ 5, 8 ಮತ್ತು 9ನೇ ತರಗತಿ ಪರೀಕ್ಷೆಯನ್ನು ನಡೆಸುವುದಾಗಿ ಶಾಲಾ ಶಿಕ್ಷಣ ಇಲಾಖೆ ಘೋಷಿಸಿತ್ತು. ಈ ಬೆನ್ನಲ್ಲೇ ವಿದ್ಯಾರ್ಥಿಗಳಿಗೆ ಮೌಲ್ಯಾಂಕನ ಪರೀಕ್ಷೆಗೆ ಉತ್ತರ ಹಾಳೆಗಳನ್ನು ಇಲಾಖೆಯಿಂದಲೇ ವಿತರಿಸೋದಾಗಿ ತಿಳಿಸಿದೆ.
ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯ ಅಧ್ಯಕ್ಷರು ಮಾಹಿತಿ ನೀಡಿದ್ದಾರೆ. ರಾಜ್ಯ ಪಠ್ಯಕ್ರಮ ಅನುಸರಿಸುತ್ತಿರುವ ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ 5, 8 ಮತ್ತು 9ನೇ ತರಗತಿ ವಿದ್ಯಾರ್ಥಿಗಳಿಗೆ 2023-24ನೇ ಸಾಲಿನ ಸಂಕಲನಾತ್ಮಕ ಮೌಲ್ಯಮಾಪನ-2 (SA-2) ಮೌಲ್ಯಾಂಕನವನ್ನು ನಡೆಸುವ ಸಂಬಂಧ ಘನ ಉಚ್ಛ ನ್ಯಾಯಾಲಯದಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸರ್ಕಾರದ ದಿನಾಂಕ: 06.10.2023 ಮತ್ತು 09.10.2023 ರ ಅಧಿಸೂಚನೆಗಳನ್ನು ಏಕಸದಸ್ಯ ಪೀಠದಲ್ಲಿ ರದ್ದು (Quash) ಮಾಡಲಾಗಿತ್ತು ಎಂದಿದ್ದಾರೆ.
ಸದರಿ ತೀರ್ಪಿನ ವಿರುದ್ಧ ಸರ್ಕಾರವು ದಿನಾಂಕ: 07.03.2024 ರಂದು ಘನ ಉಚ್ಛ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಸಿದ್ದು, ಘನ ಉಚ್ಛ ನ್ಯಾಯಾಲಯದ ದ್ವಿಸದಸ್ಯ ಪೀಠವು ಪ್ರಕರಣವನ್ನು ಆಲಿಸಿ ಸದರಿ 5, 8 ಮತ್ತು 9ನೇ ತರಗತಿಗಳ ವಿದ್ಯಾರ್ಥಿಗಳಿಗೆ ಸಂಕಲನಾತ್ಮಕ ಮೌಲ್ಯಮಾಪನ-2 (SA-2) ಮೌಲ್ಯಾಂಕನ ಕಾರ್ಯವನ್ನು ಮುಂದುವರೆಸಲು ಮಧ್ಯಂತರ ತೀರ್ಪು ನೀಡಿದ್ದು, ಅದರಂತೆ ಈಗಾಗಲೇ ನಿಗದಿಯಾಗಿರುವ ವೇಳಾಪಟ್ಟಿಯಂತೆ ಮೌಲ್ಯಾಂಕನ ಕಾರ್ಯವು ಯಥಾವತ್ತಾಗಿ ಮುಂದುವರೆಯುತ್ತದೆ ಎಂದು ಹೇಳಿದ್ದಾರೆ.
ಸದರಿ ಮೌಲ್ಯಾಂಕನಕ್ಕೆ ಪ್ರಶ್ನೆಪತ್ರಿಕೆಗಳನ್ನು ಮಂಡಲಿ ವತಿಯಿಂದ ಸರಬರಾಜು ಮಾಡುತ್ತಿದ್ದು, ವಿದ್ಯಾರ್ಥಿಗಳು ಉತ್ತರಿಸಬೇಕಾದ ಹಾಳೆಗಳೊಂದಿಗೆ ಮೌಲ್ಯಾಂಕನಕ್ಕೆ ಹಾಜರಾಗುವಂತೆ ಮಂಡಲಿಯ ಮಾರ್ಗಸೂಚಿಯಲ್ಲಿ ತಿಳಿಸಲಾಗಿತ್ತು. ಪ್ರಸ್ತುತ ವಿದ್ಯಾರ್ಥಿಗಳು ಉತ್ತರಿಸಲು ಅವಶ್ಯಕವಿರುವ ಉತ್ತರ ಹಾಳೆಗಳನ್ನು ಇಲಾಖೆಯಿಂದ ಒದಗಿಸಲಾಗುವುದು ಎಂಬುದಾಗಿ ತಿಳಿಸಿದ್ದಾರೆ.