ಬೆಂಗಳೂರು : ರಾಜ್ಯದ ಅಂಗನವಾಡಿ, ಆಶಾ ಕಾರ್ಯಕರ್ತೆಯರಿಗೆ ಸಿಎಂ ಸಿದ್ದರಾಮಯ್ಯ ಸಿಹಿಸುದ್ದಿ ನೀಡಿದ್ದು, ಶೀಘ್ರವೇ ಗೌರವಧನ 1,000 ರೂ. ಹೆಚ್ಚಳ ಮಾಡಲಾಗುವುದು ಎಂದು ತಿಳಿಸಿದ್ದಾರೆ.
ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರು, ಆಶಾ ಕಾರ್ಯಕರ್ತೆಯರು ಮತ್ತು ವಿಕಲ ಚೇತನರ ಸಂಘಟನೆಗಳ ನಿಯೋಗದವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ, ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ ಮಾಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ತಮ್ಮೆಲ್ಲರ ನ್ಯಾಯಯುತ ಬೇಡಿಕೆಗಳನ್ನು ಮುಂದಿನ ದಿನಗಳಲ್ಲಿ ಹಂತ ಹಂತವಾಗಿ ಈಡೇರಿಸಲು ಪ್ರಯತ್ನಿಸಲಾಗುವುದು.ಅಂಗನವಾಡಿ ಕಾರ್ಯಕರ್ತೆಯರಿಗೆ ₹11,500, ₹10,000 ಹಾಗೂ ಸಹಾಯಕಿಯರಿಗೆ ₹6,000 ರೂ.ಗಳು ಸದ್ಯ ದೊರಕುತ್ತಿದೆ. ಗೌರವ ಧನವನ್ನು ಹೆಚ್ಚಿಸಬೇಕೆಂಬ ಮನವಿ ಇದೆ. ಕೇಂದ್ರದಿಂದ ಬರಬೇಕಾದ ಅನುದಾನ ಬರುತ್ತಿಲ್ಲವಾದ್ದರಿಂದ ತಕ್ಷಣಕ್ಕೆ ಬೇಡಿಕೆ ಈಡೇರಿಸುವುದು ಕಷ್ಟಸಾಧ್ಯ ಎಂದರು.
ಈಗಾಗಲೇ ಸರ್ಕಾರಿ ಶಾಲೆಗಳಿಗೆ ಉಚಿತ ವಿದ್ಯುತ್ ಘೋಷಿಸಲಾಗಿದೆ. ಅದೇ ರೀತಿ ಅಂಗನವಾಡಿ ಕೇಂದ್ರಗಳಿಗೆ ಉಚಿತ ವಿದ್ಯುತ್ ನೀಡುವ ಮತ್ತು ಅಂಗನವಾಡಿ ಕಾರ್ಯಕರ್ತೆಯರ ಸಹಾಯಧನವನ್ನು 1,000 ರೂ. ಹೆಚ್ಚಿಸುವ ಬಗ್ಗೆ ಮುಂದಿನ ದಿನಗಳಲ್ಲಿ ಸಕಾರಾತ್ಮಕ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
ಗೃಹಲಕ್ಷ್ಮೀ ಯೋಜನೆಯಡಿ 2,000 ರೂ.ಗಳನ್ನು ಮನೆ ಯಜಮಾನಿಯಾಗಿರುವ ಅಂಗನವಾಡಿ ಕಾರ್ಯಕರ್ತೆಯರಿಗೂ ಒದಗಿಸಲಾಗುತ್ತಿದೆ. ಶೇ.60 ಅಂಗನವಾಡಿಯಲ್ಲಿ ಕೆಲಸ ಮಾಡುವ ಮಹಿಳೆಯರಿಗೆ ಗೃಹ ಲಕ್ಷ್ಮೀ ಯೋಜನೆಯಡಿ ಹಣ ದೊರೆಯುತ್ತಿದೆ. ಇದು ಕುಟುಂಬ ನಿರ್ವಹಣೆಗೆ ನೆರವಾಗುತ್ತಿದೆ ಎಂದು ಹೇಳಿದ್ದಾರೆ.
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರೊಂದಿಗೆ ಸುಮಾರು 20ಕ್ಕೂ ಹೆಚ್ಚು ವಿವಿಧ ಸಂಘಟನೆಗಳ ಪದಾಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.