ನವದೆಹಲಿ : ಲೋಕಸಭೆ ಚುನಾವಣೆಗೆ ಭರ್ಜರಿ ಸಿದ್ದತೆ ನಡೆಸಿರುವ ಬಿಜೆಪಿ ಇದೀಗ ಆಂಧ್ರಪ್ರದೇಶದಲ್ಲಿ ಟಿಡಿಪಿ, ಜೆಎಸ್ ಪಿ ಮೈತ್ರಿ ಜೊತೆಗೆ ಸೀಟು ಹಂಚಿಕೆ ಫೈನಲ್ ಆಗಿದ್ದು, ಟಿಡಿಪಿ 17 ಲೋಕಸಭಾ ಮತ್ತು 144 ವಿಧಾನಸಭಾ ಸ್ಥಾನಗಳಲ್ಲಿ ಸ್ಪರ್ಧಿಸಲಿದೆ.
ಆಂಧ್ರಪ್ರದೇಶದಲ್ಲಿ ಬಿಜೆಪಿ-ಟಿಡಿಪಿ-ಜೆಎಸ್ ಪಿ ಮೈತ್ರಿ ಔಪಚಾರಿಕವಾಗಿ ಮುದ್ರೆ ಒತ್ತಲಾಗಿದೆ. ತೆಲುಗು ದೇಶಂ ಪಕ್ಷ (ಟಿಡಿಪಿ) 17 ಲೋಕಸಭಾ ಮತ್ತು 144 ವಿಧಾನಸಭಾ ಸ್ಥಾನಗಳಲ್ಲಿ ಸ್ಪರ್ಧಿಸಲಿದೆ. ಭಾರತೀಯ ಜನತಾ ಪಕ್ಷ (ಬಿಜೆಪಿ) 6 ಲೋಕಸಭಾ 10 ವಿಧಾನಸಭಾ ಸ್ಥಾನಗಳಲ್ಲಿ ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದರೆ, ನಟ ಪವನ್ ಕಲ್ಯಾಣ್ ಅವರ ಜನಸೇನಾ ಪಕ್ಷಕ್ಕೆ (ಜೆಎಸ್ಪಿ) 2 ಲೋಕಸಭಾ ಮತ್ತು 21 ವಿಧಾನಸಭಾ ಸ್ಥಾನಗಳನ್ನು ನೀಡಲಾಗಿದೆ.
ಆಂಧ್ರಪ್ರದೇಶದಲ್ಲಿ ಲೋಕಸಭಾ ಚುನಾವಣೆಯ ಜೊತೆಗೆ ವಿಧಾನಸಭಾ ಚುನಾವಣೆಯೂ ನಡೆಯಲಿದೆ. ಇದರಲ್ಲಿ 175 ವಿಧಾನಸಭಾ ಸ್ಥಾನಗಳು ಮತ್ತು 25 ಲೋಕಸಭಾ ಸ್ಥಾನಗಳಿವೆ.
ಕೇಂದ್ರ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಸೇರಿದಂತೆ ಹಿರಿಯ ಬಿಜೆಪಿ ನಾಯಕರು ಸೋಮವಾರ ಟಿಡಿಪಿ ಮುಖ್ಯಸ್ಥ ಎನ್ ಚಂದ್ರಬಾಬು ನಾಯ್ಡು ಮತ್ತು ಜನಸೇನಾ ಮುಖ್ಯಸ್ಥ ಪವನ್ ಕಲ್ಯಾಣ್ ಅವರನ್ನು ಭೇಟಿಯಾಗಿ ಆಂಧ್ರಪ್ರದೇಶದಲ್ಲಿ ಮುಂಬರುವ ಲೋಕಸಭಾ ಮತ್ತು ವಿಧಾನಸಭಾ ಚುನಾವಣೆಗೆ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟದ (ಎನ್ಡಿಎ) ಅಭ್ಯರ್ಥಿಗಳನ್ನು ಅಂತಿಮಗೊಳಿಸಿದರು.