ಬೆಂಗಳೂರು : ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಬೆಂಗಳೂರು ನಗರದಾದ್ಯಂತ ಮಾದರಿ ನೀತಿ ಸಂಹಿತೆ ಜಾರಿಗೊಳಿಸಿ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಆದೇಶ ಹೊರಡಿಸಿದ್ದಾರೆ.
ಅಧಿಕಾರಿಗಳ ಜೊತೆ ಸಭೆ ನಡೆಸಿದ ಅವರು, ಯಾವುದೇ ಫ್ಲೆಕ್ಸ್, ಪೋಸ್ಟರ್, ಬ್ಯಾನರ್, ಬಿತ್ತಿಪತ್ರಗಳು, ಗೋಡೆ ಬರಹಗಳು ಇರುವಂತಿಲ್ಲ. ಕುಡಿಯುವ ನೀರಿನ ಘಟಕ, ಉದ್ಯಾನವನ ಸೇರಿದಂತೆ ಇನ್ನಿತರೆ ಸ್ಥಳಗಳಲ್ಲಿ ಅಳವಡಿಸಿರುವ ನಾಮಫಲಕಗಳಲ್ಲಿ ಜನಪ್ರತಿನಿಧಿಗಳ ಹೆಸರು, ಭಾವಚಿತ್ರಗಳು ಇರುವಂತಿಲ್ಲ ಎಂದು ಸೂಚನೆ ನೀಡಿದ್ದಾರೆ.
24 ಗಂಟೆಗಳ ಒಳಗೆ ಸರ್ಕಾರದ ವೆಬ್ ಸೈಟ್ಗಳಲ್ಲಿ ರಾಜಕೀಯ ಪ್ರತಿನಿಧಿಗಳ ಭಾವಚಿತ್ರ ತೆಗೆಯಲು, RO, ARO ಕಚೇರಿಗಳಲ್ಲಿ ನಿಯಂತ್ರಣ ಕೊಠಡಿ ಸ್ಥಾಪನೆಗೆ, ಎಫ್‌ಎಸ್‌ಟಿ, ಎಸ್‌ಎಸ್‌ಟಿ ಸೇರಿದಂತೆ ಇನ್ನಿತರೆ ತಂಡಗಳನ್ನ ಸಕ್ರಿಯಗೊಳಿಸುವಂತೆ ಅಧಿಕಾರಿಗಳ ಆಂತರಿಕ ಸಭೆಯಲ್ಲಿ ಸೂಚನೆ ನೀಡಲಾಗಿದೆ.
ಬಿಬಿಎಂಪಿ ವ್ಯಾಪ್ತಿಯಲ್ಲಿ ಜನಪ್ರತಿನಿಧಿಗಳ ಹೆಸರು, ಭಾವಚಿತ್ರ, ತೆಗೆಯಲು ತಿಳಿಸಿದ್ದು, ಮಾದರಿ ನೀತಿ ಸಂಹಿತೆ ಉಲ್ಲಘನೆಗಳ ಮೇಲೆ ನಿಗಾವಹಿಸಲು ಸೂಚಿಸಿದ್ದಾರೆ. ಸರ್ಕಾರಿ ಕಛೇರಿ, ಸರ್ಕಾರಿ ಆಸ್ತಿಗಳು ಸೇರಿದಂತೆ ಇನ್ನಿತರೆ ಸಾರ್ವಜನಿಕ ಸ್ಥಳಗಳಲ್ಲಿ ಜನಪ್ರತಿನಿಧಿಗಳ ಹೆಸರು, ಭಾವಚಿತ್ರ ಹಾಗೂ ಜಾಹೀರಾತುಗಳನ್ನ ತೆಗೆಯಲು ಅಧಿಕಾರಿಗಳಿಗೆ ಆದೇಶಿಸಲಾಗಿದೆ.