ಬೆಂಗಳೂರು: ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ.ಸುರೇಶ್ ಅವರು ಮತದಾರರನ್ನು ಓಲೈಸಲು ಲಕ್ಷಾಂತರ ಕುಕ್ಕರ್ ಗಳನ್ನು ವಿತರಿಸಿದ್ದಾರೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಆರೋಪಿಸಿದ್ದಾರೆ.
ತಮ್ಮ ಹೇಳಿಕೆಯನ್ನು ದೃಢೀಕರಿಸಲು ಛಾಯಾಚಿತ್ರಗಳನ್ನು ಬಿಡುಗಡೆ ಮಾಡಿದ ಅವರು, ಚುನಾವಣಾ ಆಯೋಗ ಮಧ್ಯಪ್ರವೇಶಿಸಬೇಕು ಎಂದು ಒತ್ತಾಯಿಸಿದರು. ಯಾವುದೇ ಕ್ರಮ ಕೈಗೊಳ್ಳದಿದ್ದರೆ ಕುಕ್ಕರ್ ಮತ್ತು ಸೀರೆಗಳನ್ನು ಸಂಗ್ರಹಿಸಿಟ್ಟಿರುವ ಗೋದಾಮುಗಳಿಗೆ ಬೆಂಕಿ ಹಚ್ಚಲು ಜೆಡಿಎಸ್ ಕಾರ್ಯಕರ್ತರಿಗೆ ಸೂಚನೆ ನೀಡಲಾಗುವುದು ಎಂದು ಎಚ್ಚರಿಕೆ ನೀಡಿದರು.
“ನನ್ನ ಪಕ್ಷದ ಕಾರ್ಯಕರ್ತರು ಸಹ ಪ್ರಬಲರಾಗಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಯ ಈ ಕಾನೂನು ಬಾಹಿರ ಚಟುವಟಿಕೆ ಮುಂದುವರಿದರೆ ನಾವು ಬೀದಿಗಿಳಿದು ಹೋರಾಟ ಮಾಡಬೇಕಾಗುತ್ತದೆ ಎಂದು ಕುಮಾರಸ್ವಾಮಿ ಸುದ್ದಿಗೋಷ್ಠಿಯಲ್ಲಿ ಎಚ್ಚರಿಕೆ ನೀಡಿದರು.
ಬೆಂಗಳೂರು ಗ್ರಾಮಾಂತರದಲ್ಲಿ ಅರೆಸೈನಿಕ ಪಡೆಗಳನ್ನು ನಿಯೋಜಿಸುವಂತೆ ಕುಮಾರಸ್ವಾಮಿ ಚುನಾವಣಾ ಆಯೋಗವನ್ನು ಕೋರಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ.ಸುರೇಶ್ ಅವರ ಸಹೋದರ ಡಿ.ಕೆ.ಶಿವಕುಮಾರ್ ಅವರು ಅಧಿಕಾರಿಗಳೊಂದಿಗೆ ಸಭೆ ನಡೆಸಿ ಬೂತ್ ಗಳಲ್ಲಿ ಮುನ್ನಡೆ ಸಾಧಿಸುವಂತೆ ಸೂಚನೆ ನೀಡುತ್ತಿದ್ದಾರೆ. ಚುನಾವಣೆ ನ್ಯಾಯಸಮ್ಮತವಾಗಲು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಪಂಚಾಯಿತಿ ಸಿಇಒ ಅವರನ್ನು ಬದಲಾಯಿಸಬೇಕೆಂದು ನಾನು ಒತ್ತಾಯಿಸುತ್ತೇನೆ” ಎಂದು ಅವರು ಹೇಳಿದರು.
ಸುರೇಶ್ ವಿರುದ್ಧ ಬಿಜೆಪಿ ಅಭ್ಯರ್ಥಿಯಾಗಿ ಕುಮಾರಸ್ವಾಮಿ ಅವರ ಸೋದರ ಮಾವ ಡಾ.ಸಿ.ಎನ್.ಮಂಜುನಾಥ್ ಕಣದಲ್ಲಿದ್ದಾರೆ. “ಇಂತಹ ಕಾನೂನುಬಾಹಿರ ಕೃತ್ಯ ನಡೆಯುತ್ತಿರುವಾಗ ಈ ಪ್ರಾಮಾಣಿಕ ವೈದ್ಯರು ಈ ಚುನಾವಣೆಯಲ್ಲಿ ಹೇಗೆ ಹೋರಾಡಲು ಸಾಧ್ಯ? ಎಂದು ಕೇಳಿದರು.