ಬಳ್ಳಾರಿ : ಬೇಸಿಗೆಯ ತಾಪಮಾನ ಏರುತ್ತಿರುವ ಹಿನ್ನೆಲೆಯಲ್ಲಿ ಆರೋಗ್ಯ ಸಮಸ್ಯೆಗಳನ್ನು ತಡೆಗಟ್ಟಲು ಆರೋಗ್ಯ ಇಲಾಖೆಯು ಅಗತ್ಯ ಮುಂಜಾಗ್ರತಾ ಕ್ರಮ ವಹಿಸಬೇಕು ಎಂದು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರೂ ಆದ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ವೈದ್ಯಾಧಿಕಾರಿಗಳಿಗೆ ಸೂಚನೆ ನೀಡಿದರು.
ಹವಾಮಾನ ಬದಲಾವಣೆ ಮತ್ತು ಮಾನವ ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮದಡಿ ಬೇಸಿಗೆ ಸಮಯದಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಜಿಲ್ಲಾ ಮತ್ತು ತಾಲ್ಲೂಕು ಆರೋಗ್ಯಾಧಿಕಾರಿಗಳ ಜೊತೆ ಸಭೆ ನಡೆಸಿ ಅವರು ಮಾತನಾಡಿದರು.
ಬೇಸಿಗೆ ತಾಪಮಾನ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಉಷ್ಣತೆಗೆ ಸಂಬಂಧಿಸಿದ ಆರೋಗ್ಯ ಸಮಸ್ಯೆಗಳನ್ನು ತಡೆಯಲು, ಹವಾಮಾನ ಬದಲಾವಣೆ ಮತ್ತು ಮಾನವ ಆರೋಗ್ಯದ ರಾಷ್ಟ್ರೀಯ ಕಾರ್ಯಕ್ರಮ ಹೊರಡಿಸಿದ ನಿರ್ದೇಶನಗಳು ಮತ್ತು ಸಲಹೆಗಳ ಆಧಾರದಲ್ಲಿ, ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದರು.
ಜಿಲ್ಲೆಯಲ್ಲಿ ಬೇಸಿಗೆ ಸಮಯದಲ್ಲಿ ಅತಿಹೆಚ್ಚು ತಾಪಮಾನ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ನಿರ್ಜಲೀಕರಣದಿಂದ ಅನಾರೋಗ್ಯ ಸಂಭವ ಹಿನ್ನಲೆಯಲ್ಲಿ ಎಲ್ಲಾ ಜಿಲ್ಲಾ ಮತ್ತು ತಾಲ್ಲೂಕು ಆಸ್ಪತ್ರೆಗಳಲ್ಲಿ ಅಗತ್ಯ ಚಿಕಿತ್ಸೆ ವ್ಯವಸ್ಥೆ ಮಾಡಿಕೊಳ್ಳಬೇಕು ಎಂದು ಹೇಳಿದರು.
ನಗರ, ಪಟ್ಟಣ ಹಾಗೂ ಇತರೆ ಪ್ರದೇಶಗಳಲ್ಲಿ ಕಟ್ಟಡ ಕಾರ್ಮಿಕರಿಗೆ ತೊಂದರೆಯಾಗದಂತೆ, ನಿಗದಿತ ವೇಳೆಯಲ್ಲಿಯೇ ಕಾರ್ಯನಿರ್ವಹಿಸಲು ಗುತ್ತಿಗೆದಾರರಿಗೆ ಸೂಚಿಸಬೇಕು ಎಂದರು.
ಕುಡಿಯುವ ನೀರಿನ ಸಮಸ್ಯೆಯಾಗುವಂತಹ ಹಳ್ಳಿಗಳನ್ನು ಗುರುತಿಸಿ ಅಲ್ಲಿನ ನೀರಿನ ಸಮಸ್ಯೆ ಪರಿಹರಿಸಲು ಕ್ರಮ ವಹಿಸಬೇಕು ಮತ್ತು ಕುಡಿಯುವ ನೀರಿನ ಸೌಲಭ್ಯಗಳ ಲಭ್ಯತೆಯನ್ನು ಖಚಿತಪಡಿಸಿಕೊಳ್ಳಬೇಕು ಎಂದು ಗ್ರಾಮೀಣಾ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಪ್ರಾಣಿಗಳಲ್ಲಿ ಬಿಸಿಗಾಳಿಗೆ ಸಂಬಂಧಿತ ಕಾಯಿಲೆಯ ಚಿಕಿತ್ಸೆಗೆ ನಿಯಮಾನುಸಾರ ಸಂಬಂಧಿಸಿದ ಪಶು ವೈದ್ಯಕೀಯ ಔಷಧಗಳನ್ನು ಶೇಖರಣೆ ಮಾಡಬೇಕು ಎಂದು ಪಶು ವೈದ್ಯಾಧಿಕಾರಿಗಳಿಗೆ ಸೂಚನೆ ನೀಡಿದರು.
ಹಳ್ಳಿ ಭಾಗಗಳಲ್ಲಿ ಅಗ್ನಿ ಅವಘಡ ಸಂಭವಿಸುವ ಸಾಧ್ಯತೆಗಳಿದ್ದು, ತುರ್ತು ಕರೆಗಳಿಗೆ ಶೀಘ್ರವೇ ಸ್ಪಂದಿಸಬೇಕು. ಸಹಾಯವಾಣಿ ಸಂಖ್ಯೆ ಹೆಚ್ಚು ಪ್ರಚುರಪಡಿಸಬೇಕು ಹಾಗೂ ಅಲ್ಲಲ್ಲಿ ಪ್ರದರ್ಶಿಸಬೇಕು ಎಂದು ಅಗ್ನಿಶಾಮಕ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಹುಲ್ ಶರಣಪ್ಪ ಸಂಕನೂರ ಅವರು ಮಾತನಾಡಿ, ಜಿಲ್ಲೆಯಲ್ಲಿ ಲಕ್ಷಕ್ಕೂ ಅಧಿಕ ಜನರು ನರೇಗಾ ಯೋಜನೆಯಡಿ ಕೆಲಸ ನಿರ್ವಹಿಸುತ್ತಿದ್ದಾರೆ. ಆಯಾ ತಾಲ್ಲೂಕು ಮಟ್ಟದ ವೈದ್ಯಾಧಿಕಾರಿಗಳು ಕಾಮಗಾರಿ ಸ್ಥಳಗಳಿಗೆ ನಿಯಮಿತವಾಗಿ ಭೇಟಿ ನೀಡುವ ಮೂಲಕ ಆರೋಗ್ಯ ತಪಾಸಣೆ ಕೈಗೊಳ್ಳಬೇಕು ಎಂದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ವೈ.ರಮೇಶ್ ಬಾಬು ಅವರು ಮಾತನಾಡಿ, ಬಿಸಿಗಾಳಿ ಆಘಾತದ ನಿರ್ವಹಣೆಗೆ ಜಿಲ್ಲಾಸ್ಪತ್ರೆ ಮತ್ತು ತಾಲೂಕು ಆಸ್ಪತ್ರೆಗಲ್ಲಿ ಬೆಡ್ ಗಳನ್ನು ಮೀಸಲಿಡಲಾಗಿದೆ. ಸಾರ್ವಜನಿಕರು ವಹಿಸಬೇಕಾದ ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆ ವ್ಯಾಪಕ ಪ್ರಚಾರ ನೀಡಲಾಗಿದೆ. ಜಿಲ್ಲಾ ಮಟ್ಟದಲ್ಲಿ ನೋಡಲ್ ಅಧಿಕಾರಿ, ಆರೋಗ್ಯ ಸಿಬ್ಬಂದಿ ಹಾಗೂ ಆಶಾ ಕಾರ್ಯಕರ್ತೆಯರಿಗೆ ತರಬೇತಿ ನೀಡಲಾಗಿದೆ ಎಂದು ಹೇಳಿದರು.