ಲೋಕಸಭಾ ಚುನಾವಣೆಯನ್ನು ಮುಕ್ತ ಮತ್ತು ನ್ಯಾಯಸಮ್ಮತವಾಗಿ ನಡೆಸಲು ಜಿಲ್ಲಾ ಪಂಚಾಯಿತಿ ಹಾಗೂ ಜಿಲ್ಲಾ ಸ್ವೀಪ್ ಸಮಿತಿ ಈಗಾಗಲೇ ಭರದ ಸಿದ್ಧತೆ ನಡೆಸಿದ್ದು, ಕಳೆದ ಸಲಕ್ಕಿಂತ ಈ ಬಾರಿ ಮತದಾನ ಪ್ರಮಾಣ ಹೆಚ್ಚಳ ಮಾಡಲು ಹಲವು ವಿನೂತನ ಕಾರ್ಯ ಚಟುವಟಿಕೆಗಳನ್ನು ರೂಪಿಸಿದೆ.
ಕಳೆದ ಲೋಕಸಭೆ ಚುನಾವಣೆಯ ಮತದಾನ ಪ್ರಮಾಣಕ್ಕಿಂತ ಈ ಬಾರಿ ಹೆಚ್ಚು ಪ್ರಮಾಣದಲ್ಲಿ ಹೆಚ್ಚಳ ಮಾಡುವ ಗುರಿ ಹೊಂದಿದ್ದು, ಇದಕ್ಕೆ ಪೂರಕವಾಗಿ ಈಗಾಗಲೇ ಬಳ್ಳಾರಿ ಜಿಲ್ಲೆಯ 5 ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾನದ ಕುರಿತು ಜನಜಾಗೃತಿ ಮೂಡಿಸುವ ಕಾರ್ಯಚಟುವಟಿಕೆ ಹಮ್ಮಿಕೊಂಡಿದೆ.
ಜಿಲ್ಲಾ ಸ್ವೀಪ್ ಸಮಿತಿಯು ಮಾದರಿ ನೀತಿ ಸಂಹಿತೆ ಜಾರಿಯಾದಾಗಿನಿಂದ ಅನೇಕ ವಿನೂತನ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಪ್ರಮುಖವಾಗಿ ವಾಕ್‍ಥಾನ್, ಸಹಿ ಸಂಗ್ರಹ ಅಭಿಯಾನ, ಸೈಕಲ್ ಜಾಥಾ, ಪಂಜಿನ ಮೆರವಣಿಗೆ, ‘ನಮ್ಮ ನಡೆ ಮತಗಟ್ಟೆ ಕಡೆ’, ವಿದ್ಯಾರ್ಥಿಗಳಿಗೆ ಚಿತ್ರಕಲಾ ಸ್ಪರ್ಧೆ, ಶಾಲೆ, ಕಾಲೇಜು, ಹಾಸ್ಟೆಲ್ ವಿದ್ಯಾರ್ಥಿಗಳಿಂದ ಪೆÇೀಷಕರಿಗೆ ‘ಪತ್ರ ಚಳವಳಿ’, ಎತ್ತಿನ ಬಂಡಿಗಳ ಮೆರವಣಿಗೆ ಸೇರಿದಂತೆ ಹಲವು ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ಮತದಾರರ ಜಾಗೃತಿ ಅಭಿಯಾನ ಹಮ್ಮಿಕೊಳ್ಳಲಾಗುತ್ತಿದೆ.
ಅರಿಸಿನ– ಕುಂಕುಮದ ಕರೆಯೋಲೆ: ಬಳ್ಳಾರಿ ಲೋಕಸಭಾ ಕ್ಷೇತ್ರ ಚುನಾವಣೆಗೆ ಜಿಲ್ಲಾ ಪಂಚಾಯಿತಿ ಹಾಗೂ ಜಿಲ್ಲಾ ಸ್ವೀಪ್ ಸಮಿತಿಯು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಗ್ರಾಮೀಣ ಪ್ರದೇಶದ ಮಹಿಳೆಯರಿಗೆ ‘ಅರಿಸಿನ– ಕುಂಕುಮ ಹಾಗೂ ಕರೆಯೋಲೆ’ ನೀಡಿ ಮತದಾನಕ್ಕೆ ಆಹ್ವಾನಿಸಲಾಗುತ್ತಿದೆ. ಮೇ 07 ರಂದು ಕಡ್ಡಾಯವಾಗಿ ಮತದಾನ ಮಾಡಬೇಕು ಎಂದು ಕೋರಲಾಗುತ್ತಿದೆ.
ಜಿಲ್ಲಾಡಳಿತ, ಜಿಲ್ಲಾ ಸ್ವೀಪ್ ಸಮಿತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಗುರುವಾರ ಕುಡತಿನಿ ವಲಯದ ಬೆಳಗಲ್ ಗ್ರಾಮದಲ್ಲಿ ಮಹಿಳೆಯೊಬ್ಬರಿಗೆ ಕುಂಕುಮ ಹಚ್ಚಿ ಮತದಾನಕ್ಕೆ ಜಾಗೃತಿ ಮೂಡಿಸುತ್ತಿರುವುದು ವಿಶೇಷವಾಗಿ ಕಂಡುಬಂತು. ಕುಡತಿನಿ ವಲಯದ ಅಂಗನವಾಡಿ ಮೇಲ್ವಿಚಾರಕಿ ಸುಮಂಗಳಮ್ಮ ಅವರು ಮನೆ-ಮನೆಗೆ ತೆರಳಿ ಮಹಿಳೆಯರಿಗೆ ಅರಿಶಿಣ-ಕುಂಕುಮ ವಿತರಣೆ ಮಾಡುವ ಮೂಲಕ ತಪ್ಪದೇ ಮತದಾನ ಮಾಡುವಂತೆ ತಿಳಿಸಿದರು.ಈ ವೇಳೆ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗಳು ಹಾಗೂ ಇತರರು ಹಾಜರಿದ್ದರು.