ಬೆಂಗಳೂರು: ರಾಜ್ಯ ಸರ್ಕಾರದ ಹುಕ್ಕ ಬ್ಯಾನ್ ಆದೇಶವನ್ನು ಕರ್ನಾಟಕ ಹೈಕೋರ್ಟ್ ಎತ್ತಿಹಿಡಿದಿದೆ. ಹಲವು ಮಂದಿ ರಾಜ್ಯ ಸರ್ಕಾರದ ಆದೇಶದ ವಿರುದ್ದ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು.ರಾಜ್ಯದಲ್ಲಿ ಎಲ್ಲಾ ರೀತಿಯ ಹುಕ್ಕಾ ಉತ್ಪನ್ನಗಳ ಮಾರಾಟ, ಬಳಕೆ, ಸಂಗ್ರಹಣೆ, ಜಾಹೀರಾತು ಮತ್ತು ಪ್ರಚಾರವನ್ನು ನಿಷೇಧಿಸುವ ಸರ್ಕಾರದ ಅಧಿಸೂಚನೆಯನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಗಳನ್ನು ಕರ್ನಾಟಕ ಹೈಕೋರ್ಟ್ ಸೋಮವಾರ ತಿರಸ್ಕರಿಸಿದೆ. ಈ ಮೂಲಕ ಕರ್ನಾಟಕದಲ್ಲಿ ಎಲ್ಲಾ ರೀತಿಯ ಹುಕ್ಕಾ ಉತ್ಪನ್ನಗಳ ನಿಷೇಧವನ್ನು ನ್ಯಾಯಾಲಯ ಎತ್ತಿಹಿಡಿದಿದೆ.
ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠವು ಮಾರ್ಚ್ 11ರಂದು ಎರಡೂ ಕಡೆಯ ವಾದಗಳನ್ನು ಆಲಿಸಿ ತೀರ್ಪನ್ನು ಕಾಯ್ದಿರಿಸಿತ್ತು. ಅಧಿಸೂಚನೆಯ ಪ್ರಕಾರ, ಹುಕ್ಕಾ ಬಾರ್ ಬೆಂಕಿ ಅಪಾಯಗಳಿಗೆ ಕಾರಣವಾಗಿದೆ ಮತ್ತು ರಾಜ್ಯ ಅಗ್ನಿಶಾಮಕ ನಿಯಂತ್ರಣ ಮತ್ತು ಅಗ್ನಿ ಸುರಕ್ಷತಾ ಕಾನೂನುಗಳನ್ನು ಉಲ್ಲಂಘಿಸುತ್ತದೆ. ಹೋಟೆಲ್ಗಳು, ಬಾರ್ಗಳು ಮತ್ತು ರೆಸ್ಟೋರೆಂಟ್ಗಳಲ್ಲಿ ಹುಕ್ಕಾ ಸೇವನೆಯು ಆಹಾರ ಪದಾರ್ಥಗಳನ್ನು ಸಾರ್ವಜನಿಕ ಬಳಕೆಗೆ ಅಸುರಕ್ಷಿತವಾಗಿಸುತ್ತದೆ ಮತ್ತು ಸಾರ್ವಜನಿಕ ಆರೋಗ್ಯದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.