ಹಾಸನ: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರ ಲೈಂಗಿಕ ಹಗರಣದ ಬಗ್ಗೆ ಅಮಿತ್ ಶಾ ಮತ್ತು ಬಿಜೆಪಿಯ ಇತರ ನಾಯಕರಿಗೆ ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಳ್ಳುವ ಮೊದಲೇ ತಿಳಿದಿತ್ತು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಮಂಗಳವಾರ ಹೇಳಿದ್ದಾರೆ.
ಬಿಜೆಪಿ ನಾಯಕರೊಬ್ಬರು ಡಿಸೆಂಬರ್ ನಲ್ಲಿಯೇ ಅಮಿತ್ ಶಾ ಮತ್ತು ಬಿ.ವೈ.ವಿಜಯೇಂದ್ರ ಅವರಿಗೆ ಪತ್ರ ಬರೆದು, ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಳ್ಳದಂತೆ ಮನವಿ ಮಾಡಿದ್ದರು. ಆದರೆ ಬಿಜೆಪಿ ನಾಯಕರು ಯಾವುದೇ ಕ್ರಮ ಕೈಗೊಂಡಿಲ್ಲ. ಲೈಂಗಿಕ ಹಗರಣದಲ್ಲಿ ಪ್ರಜ್ವಲ್ ಭಾಗಿಯಾಗಿರುವುದು ಗೊತ್ತಿದ್ದರೂ ಬಿಜೆಪಿ ನಾಯಕರು ಅವರನ್ನು ವಿಮಾನ ನಿಲ್ದಾಣದಲ್ಲಿ ಏಕೆ ತಡೆಯಲಿಲ್ಲ? ಈ ಪ್ರಕರಣದಲ್ಲಿ ಬಿಜೆಪಿ ಕೂಡ ತಪ್ಪಿತಸ್ಥವಾಗಿದೆ” ಎಂದು ಅವರು ಹೇಳಿದರು.
ಮಂಗಳವಾರ ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ದಿನೇಶ್, ನೇಹಾ ಹಿರೇಮಠ್ ಕೊಲೆ ಪ್ರಕರಣವನ್ನು ರಾಜಕೀಯಗೊಳಿಸಲು ಬಿಜೆಪಿ ಪ್ರತಿಭಟನೆ ನಡೆಸುತ್ತಿದೆ, ಆದರೆ ಪರೋಕ್ಷವಾಗಿ ಪ್ರಜ್ವಲ್ ಅವರನ್ನು ಬೆಂಬಲಿಸುತ್ತದೆ ಎಂದು ಆರೋಪಿಸಿದರು.