ಬೆಂಗಳೂರು : ಮಹಿಳೆಯರನ್ನು ಲೈಂಗಿಕವಾಗಿ ದುರ್ಬಳಕೆ ಮಾಡಿ ವಿದೇಶಕ್ಕೆ ಪರಾರಿಯಾಗಿರುವ ಪ್ರಜ್ವಲ್ ರೇವಣ್ಣ ಅವರ ಪಾಸ್ ಪೋರ್ಟ್ ರದ್ದುಪಡಿಸಿ ಸ್ವದೇಶಕ್ಕೆ ವಾಪಸ್ ಕರೆಸಲು ನೆರವಾಗುವಂತೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸಿಎಂ ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ.
ಮಹಿಳಾ ದೌರ್ಜನ್ಯದಂತಹ ಗುರುತರ ಆರೋಪ ಹೊತ್ತಿರುವ ಹಾಲಿ ಸಂಸದ ಹಾಗೂ ಎನ್‌ಡಿಎ ಮೈತ್ರಿಕೂಟದ ಲೋಕಸಭಾ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವೀಡಿಯೋ ಪ್ರಕರಣದ ತನಿಖೆಗಾಗಿ ರಾಜ್ಯ ಸರ್ಕಾರವು ವಿಶೇಷ ತನಿಖಾ ತಂಡ ರಚಿಸಿದೆ.
ಈ ನಡುವೆ ಆರೋಪಿಯು ರಾಜತಾಂತ್ರಿಕ ಪಾಸ್‌ಪೋರ್ಟನ್ನು ಬಳಕೆ ಮಾಡಿಕೊಂಡು ವಿದೇಶಕ್ಕೆ ಪರಾರಿಯಾಗಿರುವ ಬಗ್ಗೆ ವರದಿಯಾಗಿದೆ. ಎಸ್.ಐ.ಟಿ ಯು ತನಿಖೆಯನ್ನು ಮುಂದುವರೆಸಬೇಕಾದರೆ ಆರೋಪಿಯ ವಿಚಾರಣೆ ನಡೆಸುವ ಅಗತ್ಯವಿದೆ. ಹಾಗಾಗಿ ವಿದೇಶಾಂಗ ಸಚಿವಾಲಯ ಮತ್ತು ಗೃಹ ಸಚಿವಾಲಯಗಳು ತಕ್ಷಣ ಕಾರ್ಯಪ್ರವೃತ್ತವಾಗಿ ರಾಜತಾಂತ್ರಿಕ ಪಾಸ್‌ಪೋರ್ಟ್ ಹಿಂಪಡೆಯುವ ಜೊತೆಗೆ ಅಂತಾರಾಷ್ಟ್ರೀಯ ಪೊಲೀಸ್ ಏಜೆನ್ಸಿಗಳನ್ನು ಬಳಸಿಕೊಂಡು ವಿದೇಶದಲ್ಲಿ ತಲೆಮರೆಸಿಕೊಂಡಿರುವ ಪ್ರಜ್ವಲ್ ರೇವಣ್ಣ ಅವರನ್ನು ಮರಳಿ ಭಾರತಕ್ಕೆ ಕರೆತರಲು ನೆರವಾಗಬೇಕು ಎಂದು ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದಿದ್ದಾರೆ.