ಬೆಂಗಳೂರು : ಠಾಣೆಯಲ್ಲಿ ಸಿವಿಲ್ ವ್ಯಾಜ್ಯ ಇತ್ಯರ್ಥಪಡಿಸುವ ಪೊಲೀಸರ ಕಾರ್ಯವೈಖರಿ ಪುನರಾವರ್ತನೆ ಆಗುತ್ತಿರುವುದಕ್ಕೆ ಮತ್ತೊಮ್ಮೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಹೈಕೋರ್ಟ್, ಠಾಣೆಯಲ್ಲಿ ಕೂತು ವಸೂಲಿ ಮಾಡುವುದು ಪೊಲೀಸರ ಕೆಲಸವೇ? ಎಂದು ಆಕ್ರೋಶ ಹೊರಹಾಕಿದೆ.
ಹೌದು ನಿವೇಶನವೊಂದರ ಖರೀದಿಗೆ ಸಂಬಂಧಿಸಿದ ವಿಚಾರ ದಲ್ಲಿ ಮಾರಾಟದಾರರಿಗೆ ಹಣ ಪಾವತಿಸಲು ಖರೀದಿದಾ ರರಿಗೆ ಒತ್ತಾಯಿಸಿದ ಹಾಗೂ ಬೆದರಿಕೆ ಹಾಕಿದ ಆರೋಪ ಸಂಬಂಧ ಬೆಂಗಳೂರಿನ ಚಂದ್ರ ಲೇಔಟ್ ಠಾಣೆಯ ಪೊಲೀಸರ ವಿರುದ್ಧ ನ್ಯಾಯಮೂರ್ತಿ ಎಚ್.ಪಿ. ಸಂದೇಶ್ ಅವರು ಅಸಮಾಧಾನ ವ್ಯಕ್ತಪಡಿಸಿದರು.
ಇದಕ್ಕೂ ಮುನ್ನ ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು, ಪ್ರಕರಣದ ತನಿಖಾಧಿಕಾರಿಯು ಅರ್ಜಿದಾರರನ್ನು ಅನಗತ್ಯವಾಗಿ ವಿಚಾರಣೆಗೆ ಒಳಪಡಿಸಿ ಕಿರುಕುಳ ನೀಡಿ, ಬೆದರಿಕೆ ಹಾಕಿ ಹಣ ಪಾವತಿಸುವಂತೆ ಮಾಡಿದ್ದಾರೆ. ಇದರಿಂದ ಅರ್ಜಿದಾರರು ಮಾನಸಿಕ ಯಾತನೆ ಅನುಭವಿಸಿದ್ದಾರೆ.
ಇದೇ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಕೋರಿ ಅರ್ಜಿದಾರರು ಸಲ್ಲಿಸಿರುವ ಅರ್ಜಿಗೆ ಪ್ರಾಸಿಕ್ಯೂಷನ್ ಪರ ವಕೀಲರು ಸೂಕ್ತ ಮಾಹಿತಿ ನೀಡಿಲ್ಲ. ಇದರಿಂದ ಅರ್ಜಿ ವಿಲೇವಾರಿಯಾಗದೆ ಬಾಕಿಯಿದೆ. ಹಾಗಾಗಿ ಅರ್ಜಿದಾರರ ವಿರುದ್ಧದ ಎಫ್ ಐಆರ್ ಮತ್ತು ತನಿಖಾ ಪ್ರಕ್ರಿಯೆಗೆ ತಡೆ ನೀಡಬೇಕು ಎಂದು ಕೋರಿದರು.
ಪೊಲೀಸ್ ತನಿಖಾಧಿಕಾರಿ ಸಿವಿಲ್ ವ್ಯಾಜ್ಯಗಳನ್ನು ಠಾಣೆಯಲ್ಲಿ ಇತ್ಯರ್ಥ ಪಡಿಸುವಲ್ಲಿ ಮುತುರ್ವಜಿ ತೋರಿಸಿದ್ದಾರೆ. ಪೊಲೀಸರು ಸಿವಿಲ್ ವ್ಯಾಜ್ಯದಲ್ಲಿ ಮಧ್ಯಪ್ರವೇಶ ಮಾಡಬಾರದು ಎಂಬುದಾಗಿ ನ್ಯಾಯಾಲಯಗಳು ಹಲವು ಬಾರಿ ಆದೇಶಿಸಿದೆ. ಆದರೂ ಪೊಲೀಸರು ಮಾತ್ರ ಸಿವಿಲ್ ವ್ಯಾಜ್ಯಗಳಲ್ಲಿ ಮೂಗು ತೂರಿಸುತ್ತಿದ್ದು, ಈ ಕ್ರಮ ಒಪ್ಪುವಂತದಲ್ಲ ಎಂದು ಬೇಸರ ವ್ಯಕ್ತಪಡಿಸಿದರು.
ಈ ಪ್ರಕರಣದಲ್ಲಿ ಪೊಲೀಸ್ ಹಲವಾರು ಕಾನೂನು ರೀತಿಯಲ್ಲಿ ಉಲ್ಲಂಘಿಸಿರದು ಮೇಲ್ನೋಟಕ್ಕೆ ಕಂಡು ಬರುತ್ತಿದೆ. ಹಾಗಾಗಿ ಅವರ ವಿರುದ್ಧ ಬೆಂಗಳೂರು ಪಶ್ಚಿಮ ವಿಭಾಗದ ಉಪ ಪೊಲೀಸ್ ಆಯುಕ್ತರು (ಡಿಸಿಪಿ) ಕ್ರಮ ಕೈಗೊಂಡು ಒಂದು ತಿಂಗಳಲ್ಲಿ ನ್ಯಾಯಾಲಯಕ್ಕೆ ವರದಿ ಸಲ್ಲಿಸಬೇಕು.ಹಾಗೆಯೇ, ಪ್ರಕರಣ ಸಂಬಂಧ ಅರ್ಜಿದಾರರ ವಿರುದ್ಧ ಚಂದ್ರ ಲೇಔಟ್ ಠಾಣಾ ಪೊಲೀಸರು ದಾಖಲಿಸಿರುವ ಎಫ್ಐಆರ್ ಹಾಗೂ ಅದಕ್ಕೆ ಸಂಬಂಧಿಸಿದ ಮುಂದಿನ ಎಲ್ಲ ಕಾನೂನು ಪ್ರಕ್ರಿಯೆಗಳಿಗೆ ತಡೆಯಾಜ್ಞೆ ನೀಡಿ ನ್ಯಾಯಪೀಠ ಮಧ್ಯಂತರ ಆದೇಶ ನೀಡಿದೆ.