ಬೆಂಗಳೂರು : ಹುಬ್ಬಳ್ಳಿಯ ಅಂಜಲಿ ಅಂಬಿಗೇರ್ ಹತ್ಯೆ ಪ್ರಕರಣದ ಕುರಿತು ಗೃಹ ಸಚಿವ ಡಾ.ಜಿ. ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದು, ಅಂಜಲಿ ಹತ್ಯೆ ಪ್ರಕರಣದಲ್ಲಿ ಪೊಲೀಸರ ಲೋಪವೂ ಇದೆ ಎಂದು ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಂಜಲಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರ ಲೋಪ ಇರುವುದು ಸ್ಪಷ್ಟವಾಗಿ ಕಂಡು ಬಂದಿದೆ. ಕರ್ತವ್ಯ ಲೋಪದಡಿ ಪೊಲೀಸ್ ಇನ್ಸ್ಪೆಕ್ಟರ್ ಮತ್ತು ಮಹಿಳಾ ಹೆಡ್ಕಾನ್ಸ್ಟೇಬಲ್ ಅವರನ್ನು ಅಮಾನತುಗೊಳಿಸಲಾಗಿದೆ ಎಂದು ತಿಳಿಸಿದ್ದಾರೆ.
ನನ್ನ ಮೊಮ್ಮಗಳಿಗೆ ಜೀವ ಬೆದರಿಕೆ ಇದೆ ಎಂದು ಅಂಜಲಿ ಅಜ್ಜಿ ಪೊಲೀಸರಿಗೆ ದೂರು ಕೊಟ್ಟಿರಲಿಲ್ಲ. ಕೇವಲ ಮಾಹಿತಿ ನೀಡಿದ್ದರು. ಅಂಜಲಿ ಪೋಷಕರು ಪೊಲೀಸರಿಗೆ ಮೊದಲೇ ಮಾಹಿತಿ ನೀಡಿದ್ದೆವು ಎಂದು ತಿಳಿಸಿದ್ದಾರೆ. ಸದ್ಯ ಕೊಲೆ ಆರೋಪಿ ಗಿರೀಶ್ ಅಲಿಯಾಸ್ ವಿಶ್ವನನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿ ವಿರುದ್ಧ ಯಾವುದೇ ಮುಲಾಜಿಲ್ಲದೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.