ಬೆಂಗಳೂರು : ರಾಜ್ಯದ 2,200 ಹಳ್ಳಿಗಳಿಗೆ ಕುಡಿಯುವ ನೀರಿನ ಸಮಸ್ಯೆ ಕಂಡು ಬಂದಿದ್ದು, ಹಳ್ಳಿಗಳಿಗೆ ನೀರು ಪೂರೈಸಲು ರಾಜ್ಯ ಸರ್ಕಾರಿ ಖಾಸಗಿ ಬೋರ್ ವೆಲ್ ಗಳನ್ನು ಬಾಡಿಗೆ ಪಡೆದಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿನ 158 ತಾಲೂಕುಗಳಲ್ಲಿರುವ 26,106 ಗ್ರಾಮಗಳ ಪೈಕಿ 2,207 ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಕಂಡುಬಂದಿದ್ದು, ಅದರಲ್ಲಿ 548 ಗ್ರಾಮಗಳಿಗೆ 846 ಟ್ಯಾಂಕರ್ ಗಳ ಮೂಲಕ ಹಾಗೂ 1659 ಗ್ರಾಮಗಳಿಗೆ ಖಾಸಗಿ ಬೋರ್ ವೆಲ್ ಗಳನ್ನು ಬಾಡಿಗೆ ಆಧಾರದಲ್ಲಿ ನೀರು ಪೂರೈಸಲಾಗುತ್ತಿದೆ ಎಂದು ತಿಳಿಸಿದ್ದಾರೆ.
ರಾಜ್ಯ ವಿಪತ್ತು ನಿರ್ವಹಣಾ ನಿಧಿ ಅಡಿಯಲ್ಲಿ ಲಭ್ಯವಿರುವ ಅನುದಾನವನ್ನು ಮೊದಲ ಆದ್ಯತೆಯಲ್ಲಿ ಬಳಸಿಕೊಳ್ಳಲಾಗುತ್ತಿದೆ. ಹೆಚ್ಚುವರಿಯಾಗಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಅನುದಾನ ನೀಡಲಾಗಿದೆ. ಜೊತೆಗೆ ಹೆಚ್ಚುವರಿಯಾಗಿ ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ 20 ಕೋಟಿ ರೂ. ಬಿಡುಗಡೆ ಮಾಡಲಾಗಿದೆ ಎಂದು ಹೇಳಿದ್ದಾರೆ.