ಬೆಂಗಳೂರು : ರಾಜ್ಯ ಸರ್ಕಾರದ ಗ್ಯಾರಂಟಿ ಅನ್ನಭಾಗ್ಯ ಯೋಜನೆಯಡಿ 5 ಕೆ.ಜಿ ಅಕ್ಕಿ ಬದಲಾಗಿ ಪಡಿತರ ಚೀಟಿದಾರರಿಗೆ ನೇರ ನಗದು ವರ್ಗಾವಣೆ ಮಾಡುತ್ತಿದ್ದು, ಯಾವುದೇ ರೀತಿಯ ತಾಂತ್ರಿಕ ಸಮಸ್ಯೆಗಳಿದ್ದಲ್ಲಿ ಹತ್ತಿರದ ನ್ಯಾಯಬೆಲೆ ಅಂಗಡಿಗೆ ಭೇಟಿ ನೀಡಿ ಪರಿಹರಿಸಿಕೊಳ್ಳಬಹುದು.
ಅನ್ನಭಾಗ್ಯ ಯೋಜನೆಯ ಫಲಾನುಭವಿಗಳಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ ಪಡಿತರ ಚೀಟಿದಾರರಿಗೆ ಮೇ ಮಾಹೆಗೆ ಅನ್ವಯವಾಗುವಂತೆ ಪಡಿತರ ಧಾನ್ಯ ಹಂಚಿಕೆ ಮಾಡಲಾಗಿದೆ.
ಅಂತ್ಯೋದಯ ಪಡಿತರ ಚೀಟಿದಾರರಿಗೆ ಪ್ರತಿ ಕಾರ್ಡ್ಗೆ 35 ಕೆ.ಜಿ ಅಕ್ಕಿ, ಆದ್ಯತಾ ಹಾಗೂ ಬಿ.ಪಿ.ಎಲ್ ಪಡಿತರ ಚೀಟಿದಾರರಿಗೆ 5 ಕೆ.ಜಿ ಅಕ್ಕಿ ಉಚಿತವಾಗಿ ವಿತರಿಸಲಾಗುತ್ತದೆ. ಹಾಗೂ ಪ್ರತಿ ಕೆ.ಜಿ ಗೆ ರೂ.15 ರಂತೆ ಒಪ್ಪಿಗೆ ನೀಡಿದ ಎ.ಪಿ.ಎಲ್ ಏಕ ಸದಸ್ಯ ಪಡಿತರ ಚೀಟಿದಾರರಿಗೆ 5 ಕೆ.ಜಿ, ಎರಡು ಮತ್ತು ಹೆಚ್ಚಿನ ಸದಸ್ಯರನ್ನು ಹೊಂದಿರುವವರಿಗೆ 10 ಕೆ.ಜಿ ಅಕ್ಕಿಯನ್ನು ವಿತರಿಸಲಾಗುವುದು.